೭೫ ರಿಂದ ೮೦ ಸರ್ಕಾರಿ ಶಾಲೆಗಳಲ್ಲಿ ಸುಣ್ಣ-ಬಣ್ಣ ಬಳಿಯುವ ಕಾರ್ಯ ಪೂರ್ಣ
ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿಯವರು ಆಗಮಿಸಿ ಪರಿಶೀಲನೆ ನಡೆಸಿ ಸುಣ್ಣ-ಬಣ್ಣ ಬಳಿಯುವ ಕಾರ್ಯಕ್ಕೆ ಚಾಲನೆ ನೀಡಿದರು.
ಭದ್ರಾವತಿ, ಮೇ. ೧೪ : ತಾಲೂಕಿನಲ್ಲಿ ಸೋಮವಾರದಿಂದ ಸರ್ಕಾರಿ ಶಾಲೆಗಳ ಆರಂಭಕ್ಕೆ ಭರದ ಸಿದ್ದತೆ ನಡೆಯುತ್ತಿದ್ದು, ಈ ಬಾರಿ ಸರ್ಕಾರಿ ಶಾಲೆಗಳು ಸುಣ್ಣ-ಬಣ್ಣಗಳಿಂದ ಕಂಗೊಳಿಸುತ್ತಿವೆ. ಹಸಿರು ತೋರಣಗಳಿಂದ ಅಲೃಂಕೃತಗೊಂಡು ಮಕ್ಕಳನ್ನು ಆಹ್ವಾನಿಸಲು ಶಾಲೆಗಳು ಎದುರು ನೋಡುತ್ತಿವೆ.
ತಾಲೂಕಿನಲ್ಲಿ ಸರ್ಕಾರಿ, ಅನುದಾನ ಮತ್ತು ಅನುದಾನ ರಹಿತ ಒಟ್ಟು ೨೩೫ ಶಾಲೆಗಳಿದ್ದು, ಈ ಪೈಕಿ ೭೫ ರಿಂದ ೮೦ ಸರ್ಕಾರಿ ಶಾಲೆಗಳಲ್ಲಿ ಸುಣ್ಣ-ಬಣ್ಣ ಬಳಿಯುವ ಕಾರ್ಯ ಸಂಪೂರ್ಣವಾಗಿ ಮುಕ್ತಾಯಗೊಂಡಿದೆ. ಈ ಬಾರಿ ವಿಶೇಷ ಎಂದರೆ ಆಯಾ ಭಾಗದ ಶಾಲೆಗಳ ವ್ಯಾಪ್ತಿಯಲ್ಲಿನ ಜನಪ್ರತಿನಿಧಿಗಳು, ನಿವಾಸಿಗಳು, ದಾನಿಗಳು ಹಾಗು ಶಾಲಾಭಿವೃದ್ಧಿ ಸಮಿತಿ ಸದಸ್ಯರ ಸಹಕಾರದೊಂದಿಗೆ ಸುಣ್ಣ-ಬಣ್ಣ ಬಳಿಯುವ ಕಾರ್ಯ ನಡೆಯುತ್ತಿದೆ.
ಶನಿವಾರ ತಾಲೂಕಿನ ಎಮ್ಮೆಹಟ್ಟಿ, ತಳ್ಳಿಕಟ್ಟೆ ಸೇರಿದಂತೆ ಇತ್ಯಾದಿಗಳ ಭಾಗಗಳಲ್ಲಿ ಸರ್ಕಾರಿ ಶಾಲೆಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದು, ಬಹುತೇಕ ಶಾಲೆಗಳಲ್ಲಿ ಈಗಾಗಲೇ ಸುಣ್ಣ-ಬಣ್ಣ ಬಳಿಯುವ ಕಾರ್ಯ ಮುಕ್ತಾಯಗೊಂಡಿದೆ. ಉಳಿದ ೩-೪ ದಿನಗಳಲ್ಲಿ ಎಲ್ಲಾ ಶಾಲೆಗಳು ಸುಣ್ಣ-ಬಣ್ಣಗಳಿಂದ ಕಂಗೊಳಿಸಲಿವೆ. ಅಲ್ಲದೆ ಅಡುಗೆ ಸಿಬ್ಬಂದಿಗಳಿಗೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಮೊದಲು ಸ್ವಚ್ಛತೆಗೆ ಹೆಚ್ಚಿನ ಗಮನ ನೀಡುವಂತೆ ಹಾಗು ಪರಿಕರಗಳನ್ನು ಪರಿಶೀಲಿಸಿಕೊಳ್ಳುವಂತೆ ಸೂಚಿಸಲಾಗಿದೆ. ಜಿಲ್ಲಾ ಅಕ್ಷರ ದಾಸೋಹ ಕೇಂದ್ರದಿಂದ ತಾಲೂಕು ಕೇಂದ್ರಕ್ಕೆ ಬಿಸಿಯೂಟ ತಯಾರಿಕೆಗೆ ಅಗತ್ಯವಿರುವ ದಿನಸಿ ಸಾಮಗ್ರಿಗಳು ಪೂರೈಕೆಯಾಗಿದ್ದು, ಇಲ್ಲಿಂದ ಎಲ್ಲಾ ಶಾಲೆಗಳಿಗೂ ಸರಬರಾಜು ಮಾಡಲಾಗುವುದು.
- ಎ.ಕೆ ನಾಗೇಂದ್ರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ, ಭದ್ರಾವತಿ.
ಸರ್ಕಾರ ಸೋಮವಾರದಿಂದ ಶಾಲೆಗಳನ್ನು ಕಡ್ಡಾಯವಾಗಿ ಆರಂಭಿಸಲು ಸೂಚಿಸಿರುವ ಹಿನ್ನಲೆಯಲ್ಲಿ ಕಳೆದ ೫-೬ ದಿನಗಳಿಂದ ಭರದ ಸಿದ್ದತೆಗಳು ನಡೆಯುತ್ತಿವೆ. ಶಾಲಾ ಆರಂಭದೊಂದಿಗೆ ಬಿಸಿಯೂಟ ಸಹ ಆರಂಭಗೊಳ್ಳುವುದರಿಂದ ಅಡುಗೆ ಸಿಬ್ಬಂದಿಗಳು ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸುವುದು, ಅಡುಗೆ ಮನೆಯಲ್ಲಿ ಶುಚಿತ್ವ ಕಾಪಾಡಿಕೊಳ್ಳುವುದು. ಪರಿಕರಗಳ ಪರಿಶೀಲನೆ ಮಾಡಿಕೊಳ್ಳುವುದು ಸೇರಿದಂತೆ ಇನ್ನಿತರ ವಿಚಾರಗಳ ಕುರಿತಂತೆ ಇಲಾಖೆ ವತಿಯಿಂದ ಶಾಲೆಗಳಿಗೆ ಮಾಹಿತಿ ನೀಡಲಾಗಿದೆ. ಈ ನಡುವೆ ಶಿಕ್ಷಣ ಇಲಾಖೆಗೆ ಅಗತ್ಯವಿರುವ ಎಲ್ಲಾ ಸಹಕಾರವನ್ನು ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳು ನೀಡುತ್ತಿವೆ.
ವಿಶೇಷವಾಗಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸಲು ಈ ಬಾರಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ವತಿಯಿಂದ ಹೆಚ್ಚಿನ ಆಸಕ್ತಿವಹಿಸಿ ಗ್ರಾಮ ಮಟ್ಟದಲ್ಲಿ ಆಯಾ ಪಂಚಾಯಿತಿಗಳ, ಶಾಲಾಭಿವೃದ್ಧಿ ಸಮಿತಿ ಹಾಗು ದಾನಿಗಳ ಸಹಕಾರದೊಂದಿಗೆ ಸುಣ್ಣ-ಬಣ್ಣ ಬಳಿಯುವ ಕಾರ್ಯ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಸಣ್ಣ-ಪುಟ್ಟ ದುರಸ್ತಿ ಕಾರ್ಯಗಳನ್ನು ಸಹ ಕೈಗೊಳ್ಳಲಾಗುವುದು.
- ರಮೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಭದ್ರಾವತಿ
ಈಗಾಗಲೇ ತಾಲೂಕಿನ ಹುಣಸೇಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿಯವರು ಆಗಮಿಸಿ ಪರಿಶೀಲನೆ ನಡೆಸಿದ್ದು, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲ ಸೌರ್ಕರ್ಯಗಳ ಕುರಿತು ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದ್ದಾರೆ. ಅಲ್ಲದೆ ಶಾಲೆಗೆ ಸುಣ್ಣ-ಬಣ್ಣ ಬಳಿಯುವ ಕಾರ್ಯಕ್ಕೆ ಚಾಲನೆ ನೀಡಿ ತೆರಳಿದ್ದು, ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಮಹಾಮಾರಿ ಕೊರೋನಾ ಹಿನ್ನಲೆಯಲ್ಲಿ ಕಳೆದ ಸುಮಾರು ೨ ವರ್ಷಗಳಿಂದ ಸಮರ್ಪಕವಾಗಿ ಶಿಕ್ಷಣ ಲಭ್ಯವಾಗದೆ ವಂಚಿತರಾಗಿರುವ ಮಕ್ಕಳಿಗೆ ಕಲಿಕೆಯಲ್ಲಿನ ಕೊರತೆಯನ್ನು ನೀಗಿಸಲು ವಿಶೇಷ ಕ್ರಮಗಳನ್ನು ಇಲಾಖೆ ಕೈಗೊಂಡಿದೆ. ಇಲಾಖೆಯ ಪ್ರಯತ್ನ ಸಾಕಾರಗೊಳ್ಳುವುದೇ ಎಂಬುದನ್ನು ಕಾದು ನೋಡಬೇಕಾಗಿದೆ.
ನಾನು ಹಲವು ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಎಲ್ಲಾ ಶಾಲೆಗಳಲ್ಲೂ ಬಹುತೇಕ ಸುಣ್ಣ-ಬಣ್ಣವಾಗಿದೆ. ಆದರೆ ಈ ಶಾಲೆ ಕಳೆದ ಸುಮಾರು ೧೦ ವರ್ಷಗಳಿಂದ ಸುಣ್ಣ-ಬಣ್ಣ ಕಂಡಿರಲಿಲ್ಲ. ಇದೀಗ ಎಲ್ಲರ ಸಹಕಾರದಿಂದ ಸುಣ್ಣ-ಬಣ್ಣ ನಡೆಯುತ್ತಿರುವುದು ತುಂಬಾ ಸಂತಸವನ್ನುಂಟು ಮಾಡಿದೆ. ಶಾಲೆಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಗ್ರಾಮಸ್ಥರು, ದಾನಿಗಳು, ಶಿಕ್ಷಕರು, ಶಾಲಾಭಿವೃದ್ಧಿ ಸದಸ್ಯರು ಕ್ರೋಢಿಕರಣಕ್ಕೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು.
- ಅನಿತಾ ಮೇರಿ, ಶಿಕ್ಷಕಿ,
ಹುಣಸೇಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲೆ
ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಸೇರಿದಂತೆ ವಿವಿಧೆಡೆ ಸರ್ಕಾರಿ ಶಾಲೆಗಳಿಗೆ ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ವತಃ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
No comments:
Post a Comment