Sunday, May 22, 2022

ಮೇ.೨೪ರಂದು ತ್ರಿವಿಧ ದಾಸೋಹಿ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವ

ಭದ್ರಾವತಿಯಲ್ಲಿ ಮೇ.೨೪ರಂದು ಹಮ್ಮಿಕೊಳ್ಳಲಾಗಿರುವ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವ ಕುರಿತು ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಮಾಹಿತಿ ನೀಡಿದರು.
    ಭದ್ರಾವತಿ, ಮೇ. ೨೨: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವ ಮೇ.೨೪ರಂದು ಬೆಳಿಗ್ಗೆ ೧೧ ಗಂಟೆಗೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಹೇಳಿದರು.
    ತಾಲೂಕು ವೀರಶೈವ ಲಿಂಗಾಯತ ಸಮಾಜ ಹೆಸರಿನಲ್ಲಿ ಲಿಂಗಾಯತ ಸಮಾಜದ ಎಲ್ಲಾ ಸಂಘಟನೆಗಳು ಒಗ್ಗೂಡಿ ಶ್ರೀಗಳ ೧೧೫ನೇ ಜಯಂತ್ಯೋತ್ಸವ ಆಚರಿಸಲಾಗುತ್ತಿದೆ. ಶ್ರೀ ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದರು.
    ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜಯಂತ್ಯೋತ್ಸವ ಉದ್ಘಾಟಿಸಲಿದ್ದು, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವ ಸಲಹೆಗಾರರಾದ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ. ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಎಸ್ ನಾಗೇಶ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಹಾಗು ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಲಿಂಗಾಯತ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರಾದ ಆರ್. ಮಹೇಶ್ ಕುಮಾರ್, ಎಸ್. ಅಡವೀಶಯ್ಯ, ಬಿ.ಎಸ್ ಮಹೇಶ್‌ಕುಮಾರ್, ಎಸ್. ವಾಗೀಶ್, ನಂದಿ ಮಲ್ಲಿಕಾರ್ಜುನ, ಆರ್.ಎಸ್ ಶೋಭ, ಪರಮೇಶ್ವರಪ್ಪ ಮತ್ತು ಮಂಗೋಟೆ ರುದ್ರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment