Wednesday, June 15, 2022

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳಿಂದ ಹಲವು ಯೋಜನೆಗಳು : ಸಚಿವ ಬಿ.ಸಿ ನಾಗೇಶ್

ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಾದ ಸಿಂಚನ ಮತ್ತು ವಿದ್ಯಾಶ್ರೀ ಅವರನ್ನು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಬುಧವಾರ ಸನ್ಮಾನಿಸಿ ಗೌರವಿಸಿದರು.
    ಭದ್ರಾವತಿ, ಜೂ. ೧೫ : ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿವೆ. ಇದರ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸ್ವಾಭಿಮಾನಿ, ಸ್ವಾವಲಂಬಿ ಬದುಕಿಗೆ ಪೂರಕವಾದ ಶಿಕ್ಷಣ ಪಡೆದುಕೊಳ್ಳಬೇಕೆಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.
    ಅವರು ಬುಧವಾರ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಗೆ ಭೇಟಿ ನೀಡಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಮಾತನಾಡಿದರು.
    ಈ ಹಿಂದೆ ಶಾಲೆಗಳಲ್ಲಿ ಶೌಚಾಲಯ, ಕೊಠಡಿಗಳ ಕೊರತೆ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ಹೆಣ್ಣು ಮಕ್ಕಳು ಶಾಲೆಗಳಿಗೆ ಬರಲು ಹಿಂದೇಟು ಹಾಕುತ್ತಿದ್ದರು. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ರೂಪಿಸಿವೆ. ಈ ಯೋಜನೆಗಳು ಎಲ್ಲಾ ಸರ್ಕಾರಿ ಶಾಲೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದರು.
    ಸರ್ಕಾರಿ ಶಾಲೆಗಳಲ್ಲಿ ಪರಿಣಿತ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣ ನೀಡಲು ಹಗಲಿರಳು ಶ್ರಮಿಸುತ್ತಿದ್ದಾರೆ. ಸ್ವಾವಲಂಬ, ಸ್ವಾಭಿಮಾನಿ ಬದುಕಿಗೆ ಪೂರಕವಾದ ಶಿಕ್ಷಣ ಪಡೆದುಕೊಳ್ಳುವಂತಾಗಬೇಕು. ಕಲಿಕೆಯಲ್ಲಿ ಯಾವುದೇ ರೀತಿಯ ಸಂಕೋಚವಿರಬಾರದು. ಯಾವುದೇ ರೀತಿಯ ಅನುಮಾನಗಳಿದ್ದರೂ ಸಹ ಶಿಕ್ಷಕರಿಂದ ಕೇಳಿ ತಿಳಿದುಕೊಳ್ಳಬೇಕು. ಶಿಕ್ಷಣಕ್ಕೆ ಹೆಚ್ಚಿನ ಗಮನ ಹರಿಸಬೇಕು. ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿನಿಯರು ಸಹ ಹೆಚ್ಚಿನ ಅಂಕಗಳನ್ನು ಪಡೆಯಲು ಪ್ರಯತ್ನಿಸಬೇಕೆಂದರು.
    ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಾದ ಸಿಂಚನ ಮತ್ತು ವಿದ್ಯಾಶ್ರೀ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಕಾಲೇಜಿನ ಉಪಪ್ರಾಚಾರ್ಯರಾದ ಟಿ.ಎಸ್ ಸುಮನ ಅಧ್ಯಕ್ಷತೆ ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಪರಮೇಶ್ವರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ ಹಾಗು ಕಾಲೇಜಿನ ಪ್ರೌಢಶಾಲಾ ವಿಭಾಗದ  ಶಿಕ್ಷಕರು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment