Monday, June 27, 2022

ಸ್ನೇಹ ಜೀವಿ ಬಳಗದಿಂದ ಕೆಂಪೇಗೌಡ ಜಯಂತಿ : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

 ಭದ್ರಾವತಿ ಸ್ನೇಹ ಜೀವಿ ಬಳಗದ ವತಿಯಿಂದ ಪೊಲೀಸ್ ಉಮೇಶ್ ನೇತೃತ್ವದಲ್ಲಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಟೋ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಜೂ. ೨೭ : ಸ್ನೇಹ ಜೀವಿ ಬಳಗದ ವತಿಯಿಂದ ಪೊಲೀಸ್ ಉಮೇಶ್ ನೇತೃತ್ವದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಸೋಮವಾರ ಅದ್ದೂರಿಯಾಗಿ ಆಚರಿಸಲಾಯಿತು.
    ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಟೋ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಿಹಿ ಹಂಚಿಕೆ ಹಾಗು ಅನ್ನಸಂತರ್ಪಣೆ ನಡೆಸಲಾಯಿತು. ಅಲ್ಲದೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಮಹಿಳೆಯರಿಗೆ ಉಚಿತವಾಗಿ ಸೀರೆ ವಿತರಿಸಲಾಯಿತು.
    ಪೊಲೀಸ್ ಉಮೇಶ್ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸುವ ಮೂಲಕ ಅವರಿಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವ ಕಾರ್ಯ ಕೈಗೊಳ್ಳಲಾಗುವುದು ಎಂದರು.
    ಕೆಂಪೇಗೌಡರ ಜಯಂತಿಯಂದು ಮಹಿಳೆಯರನ್ನು ವಿಶೇಷವಾಗಿ ಗೌರವಿಸುವ ಮೂಲಕ ಉಚಿತವಾಗಿ ಸೀರೆ ವಿತರಿಸಲಾಗುತ್ತಿದೆ. ಪ್ರತಿಯೊಂದು ಕಾರ್ಯದ ಹಿಂದೆ ಮಹಿಳೆಯರು ಇದ್ದಾರೆ. ಅವರನ್ನು ಸಮಾಜದಲ್ಲಿ ಪ್ರತಿಯೊಬ್ಬರು ಗೌರವಿಸುವ ಜೊತೆಗೆ ಅವರನ್ನು ಸಮಾನವಾಗಿ ಕಾಣಬೇಕೆಂಬ ಆಶಯ ಇದಾಗಿದೆ ಎಂದರು.
    ತಾಲೂಕು ಆಟೋ ಚಾಲಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಲಕ್ಷ್ಮಣ ಮಾತನಾಡಿ, ಸ್ನೇಹ ಜೀವಿ ಬಳಗದ ವತಿಯಿಂದ ಉತ್ತಮ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ತಾಲೂಕು ಒಕ್ಕಲಿಗರ ಸಂಘದ ಮಹಿಳಾ ವೇದಿಕೆ ಅಧ್ಯಕ್ಷೆ ಅನ್ನಪೂರ್ಣ ಸತೀಶ್, ಕಸಾಪ ಮಾಜಿ ಅಧ್ಯಕ್ಷ ಅಪೇಕ್ಷ ಮಂಜುನಾಥ್, ಸಂದೇಶ್‌ಗೌಡ, ಸುಹಾಸ್‌ಗೌಡ ಸೇರಿದಂತೆ ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು.

No comments:

Post a Comment