ವಿವಿಧೆಡೆ ಕಾರ್ಯಾಚರಣೆ ಗೋ ಮಾಂಸ ವಶ, ಗೋವುಗಳ ರಕ್ಷಣೆ
ಭದ್ರಾವತಿ ಹಳೇನಗರ ಪೊಲೀಸರು ನಗರಸಭೆ ವ್ಯಾಪ್ತಿಯ ಅನ್ವರ್ ಕಾಲೋನಿಯಲ್ಲಿ ಗೋ ಮಾಂಸ ಮರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿ ಹತ್ಯೆ ಮಾಡುವ ಉದ್ದೇಶಕ್ಕಾಗಿ ಅಕ್ರಮವಾಗಿ ಕೂಡಿ ಹಾಕಲಾಗಿದ್ದ ಗೋವುಗಳನ್ನು ರಕ್ಷಣೆ ಮಾಡಿರುವುದು.
ಭದ್ರಾವತಿ, ಜೂ. ೧೯: ರಾಜ್ಯದಲ್ಲಿ ಗೋ ಹತ್ಯೆ ನಿಷೇಧಿಸಲಾಗಿದ್ದರೂ ಸಹ ಅಕ್ರಮವಾಗಿ ಗೋ ಹತ್ಯೆ ನಡೆಯುತ್ತಿದ್ದು, ಕಾಯ್ದೆ ಜಾರಿಗೊಂಡ ನಂತರವೂ ಸಹ ಅದರಲ್ಲೂ ಕ್ಷೇತ್ರದಲ್ಲಿ ಗೋ ಹತ್ಯೆ ವ್ಯಾಪಕವಾಗಿ ನಡೆಯುತ್ತಿರುವುದು ಇತ್ತೀಚಿನ ಕೆಲವು ಪ್ರಕರಣಗಳಿಂದ ಬಯಲಾಗುತ್ತಿದೆ.
ಕೆಲವು ದಿನಗಳ ಹಿಂದೆ ಕೊಪ್ಪ ಪೊಲೀಸರು ಅಕ್ರಮವಾಗಿ ಗೋ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಸುಮಾರು ೪೫ ಕೆ.ಜಿ ಗೋ ಮಾಂಸ ವಶಪಡಿಸಿಕೊಂಡಿದ್ದಾರೆ. ಬಂಧಿತರು ಕ್ಷೇತ್ರದ ನಿವಾಸಿಗಳಾಗಿದ್ದು, ಕಳೆದ ಸುಮಾರು ೨ ವರ್ಷಗಳಿಂದ ನಿರಂತರವಾಗಿ ಗೋ ಮಾಂಸ ಮಾರಾಟದಲ್ಲಿ ತೊಡಗಿರುವುದು ತಿಳಿದು ಬಂದಿದೆ. ಅಲ್ಲದೆ ಗೋ ಮಾಂಸ ಸಾಗಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡುತ್ತಿರುವುದು ಈ ಪ್ರಕರಣದಿಂದ ಬಯಲಾಗಿದೆ.
ಶನಿವಾರ ತಾಲೂಕಿನ ಲಕ್ಷ್ಮೀಪುರದ ಬಳಿ ರೈಲ್ವೆ ಟ್ರಾಕ್ ಹತ್ತಿರ ಇಬ್ಬರು ವ್ಯಕ್ತಿಗಳು ಬಕ್ರೀದ್ ಹಬ್ಬಕ್ಕಾಗಿ ಬಲಿ ಕೊಡಲು ಹೋರಿ ಎತ್ತನ್ನು ಎಳೆದುಕೊಂಡು ಹೋಗುತ್ತಿದ್ದಾಗ ನ್ಯೂಟೌನ್ ಪೊಲೀಸರ ಕೈಗೆ ಸಿಕ್ಕಿ ಓರ್ವ ಬಿದ್ದಿದ್ದಾನೆ.
ಪೊಲೀಸರ ವಿಚಾರಣೆ ವೇಳೆ ಸತ್ಯಾಂಶ ಹೊರಬಿದ್ದಿದ್ದು, ಈ ಪ್ರಕರಣದ ಮತ್ತೊಬ್ಬ ವ್ಯಕ್ತಿ ಪರಾರಿಯಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಭಾನುವಾರ ಬೆಳಿಗ್ಗೆ ನಗರಸಭೆ ವ್ಯಾಪ್ತಿಯ ಅನ್ವರ್ ಕಾಲೋನಿಯಲ್ಲಿ ಪೊಲೀಸರು ಅಕ್ರಮವಾಗಿ ಗೋ ಮಾಂಸ ಮಾರಾಟ ಮಾಡಲಾಗುತ್ತಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಸುಮಾರು ೫೦ ಕೆ.ಜಿ ಗೋ ಮಾಂಸ ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಹತ್ಯೆ ಮಾಡುವ ಉದ್ದೇಶಕ್ಕಾಗಿ ಕೂಡಿ ಹಾಕಲಾಗಿದ್ದ ಸುಮಾರು ೨೯ ಗೋವುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭದ್ರಾವತಿ ಹಳೇನಗರ ಪೊಲೀಸರು ನಗರಸಭೆ ವ್ಯಾಪ್ತಿಯ ಅನ್ವರ್ ಕಾಲೋನಿಯಲ್ಲಿ ಗೋ ಮಾಂಸ ಮರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಂಡು ಬಂದ ದೃಶ್ಯ.
No comments:
Post a Comment