Friday, June 24, 2022

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ : ಸಿ.ಎಸ್ ಷಡಾಕ್ಷರಿ

ಭದ್ರಾವತಿ ಸೈಂಟ್ ಚಾರ್ಲ್ಸ್ ಕನ್ನಡ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗು ಪದನಿಮಿತ್ತ ಬ್ಲಾಕ್ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗುರುಸ್ಪಂದನ ಕಾರ್ಯಕ್ರಮವನ್ನು  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಉದ್ಘಾಟಿಸಿದರು.
    ಭದ್ರಾವತಿ, ಜೂ. ೨೪ : ಶಿಕ್ಷಕ ವೃತ್ತಿಯಲ್ಲಿ ತೊಡಗಿರುವವರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಹೇಳಿದರು.
    ಅವರು ಶುಕ್ರವಾರ ನಗರ ಸೈಂಟ್ ಚಾರ್ಲ್ಸ್ ಕನ್ನಡ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗು ಪದನಿಮಿತ್ತ ಬ್ಲಾಕ್ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗುರುಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಈಗಾಗಲೇ ಶಿಕ್ಷಕರ ಬಹುತೇಕ ಬೇಡಿಕೆಗಳು ಈಡೇರಿಸಿ ಕೊಡುವಲ್ಲಿ ಸಂಘ ಯಶಸ್ವಿಯಾಗಿದ್ದು, ಶಿಕ್ಷಕರ ಬಹುತೇಕ ಕೆಲಸಗಳು ಆನ್‌ಲೈನ್ ವ್ಯವಸ್ಥೆಯಲ್ಲಿ ನಡೆಯುತ್ತಿದೆ. ವೇತನ ಸಂಬಂಧ ಉಂಟಾಗಿದ್ದ ಸಮಸ್ಯೆ ಸಹ ಬಗೆ ಹರಿದಿದ್ದು, ಶಿಕ್ಷಕರ ಮೊಬೈಲ್‌ಗಳಿಗೆ ಮಾಹಿತಿ ಬರುವಂತಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬೇಡಿಕೆಗಳನ್ನು ಈಡೇರಿಸಿಕೊಡುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಲಾಗುವುದು ಎಂದರು.
    ಶಿಕ್ಷಕರ ಬಹುದಿನಗಳ ಬೇಡಿಕೆಯಂತೆ ನೂತನ ಗುರುಭವನ ನಿರ್ಮಾಣಕ್ಕೆ ಈಗಾಗಲೇ ೨ ಕೋ. ರು. ಅನುದಾನ ಬಿಡುಗಡೆಯಾಗಿದ್ದು, ಭವನದ ಕಾಮಗಾರಿ ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ ಎಂದರು.
    ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ಪೃಥ್ವಿರಾಜ್ ಮಾತನಾಡಿ, ರಾಜ್ಯಾಧ್ಯಕ್ಷರಾದ ಸಿ.ಎಸ್ ಷಡಾಕ್ಷರಿಯವರು ಶಿಕ್ಷಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುತ್ತಿದ್ದಾರೆ. ಇದರಿಂದಾಗಿ ಹಲವಾರು ಬೇಡಿಕೆಗಳು ಈಡೇರುವಂತಾಗಿದೆ. ಪ್ರಸ್ತುತ ನೂತನ ಪಿಂಚಣಿ ವ್ಯವಸ್ಥೆಯನ್ನು ಬದಲಿಸಿ ಹಳೇ ವ್ಯವಸ್ಥೆಯನ್ನೇ ಮುಂದುವರೆಸುವಂತೆ ಸರ್ಕಾರಕ್ಕೆ ಒತ್ತಾಯಿಸುವಂತೆ ಮನವಿ ಮಾಡಿದರು.
    ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಸಿ.ಆರ್ ಪರಮೇಶ್ವರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್. ಮೋಹನ್‌ಕುಮಾರ್, ಸಹ ಕಾರ್ಯದರ್ಶಿ ಸುಮತಿ, ತಾಲೂಕು ಶಾಖೆ ಅಧ್ಯಕ್ಷ ಬಿ. ಸಿದ್ದಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಿ.ಬಿ ರುದ್ರಪ್ಪ, ಪ್ರಧಾನ ಕಾರ್ಯದರ್ಶಿ ಶ್ರೀಧರಗೌಡ, ಸುಮತಿ, ಚಿತ್ರ, ಬಸವಂತರಾವ್ ದಾಳೆ, ಯು. ಮಹಾದೇವಪ್ಪ, ರೇವಣಪ್ಪ, ರಾಜು, ಮಲ್ಲಿಕಾರ್ಜುನ್, ಆನಂದ್, ಮಾಯಮ್ಮ, ಜ್ಯೋತಿ, ಎ. ತಿಪ್ಪೇಸ್ವಾಮಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನವೀದ್ ಅಹಮದ್, ಶಿಕ್ಷಣ ಸಂಯೋಜಕ ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ತಾಲೂಕಿನ ಪ್ರಾಥಮಿಕ ಶಾಲೆಗಳ ಶಿಕ್ಷಕರು ಹಾಗು ಶಿಕ್ಷಣ ಇಲಾಖೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಎಸ್.ಕೆ ಮೋಹನ್ ಸ್ವಾಗತಿಸಿದರು.

No comments:

Post a Comment