Saturday, July 30, 2022

ಭದ್ರಾ ಜಲಾಶಯದಿಂದ ರೈತರಿಗೆ ಸಕಾಲದಲ್ಲಿ ನೀರು ಪೂರೈಕೆ : ಡಾ. ಕೆ.ಸಿ ನಾರಾಯಣಗೌಡ

ಭದ್ರಾವತಿ ತಾಲೂಕಿನ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ ನಾರಾಯಣಗೌಡ, ಸಂಸದ ಬಿ.ವೈ ರಾಘವೇಂದ್ರ ಸೇರಿದಂತೆ ಇನ್ನಿತರರು ಶನಿವಾರ ಭದ್ರೆಗೆ ಬಾಗಿನ ಸಮರ್ಪಿಸಿದರು.
    ಭದ್ರಾವತಿ, ಜು. ೩೦: ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿನ ರೈತರಿಗೆ ಸಕಾಲದಲ್ಲಿ ನೀರೊದಗಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ಜಲಾಶಯ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಅನುದಾನ ಬಿಡುಗಡೆಗೊಳಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ ನಾರಾಯಣಗೌಡ ಭರವಸೆ ನೀಡಿದರು.
    ಅವರು ಶನಿವಾರ ತಾಲೂಕಿನ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಭದ್ರೆಗೆ ಬಾಗಿನ ಸಮರ್ಪಿಸಿ ಮಾತನಾಡಿದರು. ಕಳೆದ ಕೆಲವು ವರ್ಷಗಳಿಂದ ಭದ್ರಾ ಜಲಾಶಯ ಭರ್ತಿಯಾಗುತ್ತಿರುವುದು ಈ ಭಾಗದ ರೈತರಲ್ಲಿ ಸಂತಸವನ್ನುಂಟು ಮಾಡುತ್ತಿದೆ. ಅಲ್ಲದೆ ಭದ್ರಾ ಜಲಾಶಯ ಭರ್ತಿಯಾಗುತ್ತಿರುವುದು ಇಡೀ ರಾಜ್ಯದ ಸಮೃದ್ಧಿಯ ಸಂಕೇತವಾಗಿದೆ. ಈ ಭಾಗದ ರೈತರು ಹೆಚ್ಚಿನ ಬೆಳೆಗಳನ್ನು ಬೆಳೆಯಲು ಅನುಕೂಲವಾಗುವಂತೆ ಸಕಾಲದಲ್ಲಿ ಜಲಾಶಯದಿಂದ ನೀರೊದಗಿಸಲಾಗುವುದು. ಜಲಾಶಯ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಅನುದಾನ ಸರ್ಕಾರ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿಗೆ ಬಿಡುಗಡೆಗೊಳಿಸಲಿದೆ ಎಂದರು.
    ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿನ ಎಲ್ಲಾ ರೈತರಿಗೂ ಜಲಾಶಯದಿಂದ ನೀರೊದಗಿಸಲಾಗುವುದು. ಜಲಾಶಯ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರ್ಥಿಕ ನೆರವನ್ನು ನೀಡಲಿವೆ. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಸಹ ರೈತರ ಸಂಕಷ್ಟಗಳಿಗೆ ಪೂರಕವಾಗಿ ಸ್ಪಂದಿಸುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ.ಎಸ್ ಅರುಣ್, ಗ್ರಾಮಾಂತರ ಶಾಸಕ ಕೆ.ಬಿ ಅಶೋಕ್ ನಾಯ್ಕ್ , ಭದ್ರಾ ಅಚ್ಚು ಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ, ಜಿಲ್ಲಾಧಿಕಾರಿ ಆರ್. ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್, ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಪಿ ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ,  ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಎಲ್ ವೈಶಾಲಿ, ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ನೀರಾವರಿ ಇಲಾಖೆ ಹಾಗೂ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧಿಕಾರಿಗಳು, ಸಿಂಗನಮನೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು  ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

No comments:

Post a Comment