ಭದ್ರೆಗೆ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಎಚ್.ಆರ್ ಬಸವರಾಜಪ್ಪ
ಭದ್ರಾವತಿ ತಾಲೂಕಿನ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ರಾಜ್ಯಾಧ್ಯಕ್ಷ ಎಚ್.ಆರ್ ಬಸವರಾಜಪ್ಪ ಸೇರಿದಂತೆ ರೈತರು ಭದ್ರೆಗೆ ಬಾಗಿನ ಸಮರ್ಪಿಸಿದರು.
ಭದ್ರಾವತಿ, ಜು. ೨೬: ಭದ್ರಾ ಜಲಾಶಯದ ನೀರು ಮಿತವಾಗಿ ಸಮರ್ಪಕವಾಗಿ ಬಳಕೆ ಮಾಡಿಕೊಂಡಲ್ಲಿ ರೈತರು ವಾರ್ಷಿಕ ೨ ಬೆಳೆಗಳನ್ನು ಬೆಳೆಯಲು ಸಾಧ್ಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ರಾಜ್ಯಾಧ್ಯಕ್ಷ ಎಚ್.ಆರ್ ಬಸವರಾಜಪ್ಪ ಹೇಳಿದರು.
ಅವರು ಮಂಗಳವಾರ ತಾಲೂಕಿನ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಭದ್ರೆಗೆ ಬಾಗಿನ ಸಮರ್ಪಿಸಿ ಮಾತನಾಡಿದರು. ಕೆಲವು ವರ್ಷಗಳಿಂದ ಜಲಾಶಯ ಪೂರ್ಣಪ್ರಮಾಣದಲ್ಲಿ ಭರ್ತಿಯಾಗುತ್ತಿದ್ದು, ಈ ಬಾರಿ ಇನ್ನೂ ಬೇಗನೆ ಪೂರ್ಣಗೊಂಡಿದೆ. ರೈತರು ಕಳೆದ ಬಾರಿ ೨ ಬೆಳೆಗಳನ್ನು ಬೆಳೆದಿದ್ದರು. ಈ ಬಾರಿ ಸಹ ನೀರನ್ನು ಮಿತವಾಗಿ ಬಳಸಿಕೊಂಡಲ್ಲಿ ೨ ಬೆಳೆಗಳನ್ನು ಬೆಳೆಯಲು ಸಾಧ್ಯ ಎಂದರು.
ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಗೊಳಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಇದಕ್ಕೆ ಯಾವುದೇ ವಿರೋಧವಿಲ್ಲ. ಆದರೆ ಇನ್ನೂ ಮುಖ್ಯ ಕಾಲುವೆಗಳ ಆಧುನೀಕರಣ ಪೂರ್ಣಗೊಂಡಿಲ್ಲ. ಉಪಕಾಲುವೆಗಳನ್ನು ನಿರ್ಮಾಣ ಮಾಡಿಲ್ಲ. ಇದರಿಂದಾಗಿ ನೀರು ವ್ಯರ್ಥವಾಗುತ್ತಿದೆ. ಈ ಹಿನ್ನಲೆಯಲ್ಲಿ ಸರ್ಕಾರ ತಕ್ಷಣ ಗಮನ ಹರಿಸಿ ಹೊಸದಾಗಿ ಕ್ರಿಯಾಯೋಜನೆ ರೂಪುರೇಷೆ ಸಿದ್ದಗೊಳಿಸಬೇಕೆಂದು ಆಗ್ರಹಿಸಿದರು.
ಪ್ರಸ್ತುತ ನೀರು ವ್ಯರ್ಥವಾಗುತ್ತಿರುವ ಹಿನ್ನಲೆಯಲ್ಲಿ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯಲ್ಲಿನ ರೈತರು ಸಂಕಷ್ಟ ಎದುರಿಸುವಂತಾಗುತ್ತಿದೆ. ಈ ಹಿನ್ನಲೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ೧೨.೫ ಟಿ.ಎಂ.ಸಿ ನೀರನ್ನು ತುಂಗಾ ನದಿ ಜಲಾಶಯದಿಂದಿ ಬಳಸಿಕೊಳ್ಳಲು ಹೊಸದಾಗಿ ಕ್ರಿಯಾಯೋಜನೆ ಸಿದ್ದಪಡಿಸಬೇಕೆಂದು ಒತ್ತಾಯಿಸಿದರು.
ಚಂದ್ರಪ್ಪ, ಈಶಣ್ಣ, ಇ.ಬಿ ಜಗದೀಶ್, ಎಸ್. ಶಿವಮೂರ್ತಿ, ರಾಘವೇಂದ್ರ, ಎಂ. ಮಹೇಶ್ವರಪ್ಪ, ನಾಗರಾಜ್, ಸಿ. ಚಂದ್ರಪ್ಪ ಮತ್ತು ಪಂಚಾಕ್ಷರಿ ಸೇರಿದಂತೆ ಇನ್ನಿತರ ರೈತ ಮುಖಂಡರು, ರೈತರು ಸೇರಿದಂತೆ ವಿವಿದ ಸಂಘ-ಸಂಸ್ಥೆಗಳ ಪ್ರಮುಖರು, ಮಹಿಳೆಯರು, ಮಕ್ಕಳು ಪಾಲ್ಗೊಂಡಿದ್ದರು.
No comments:
Post a Comment