ಭದ್ರಾವತಿ ಕ್ಷೇತ್ರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಗುರುವಾರ ಸರ್ಕಾರದ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ತುರ್ತು ಸಭೆ ನಡೆಸಿದರು.
ಭದ್ರಾವತಿ, ಜು. ೧೪: ಕ್ಷೇತ್ರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಗುರುವಾರ ಸರ್ಕಾರದ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ತುರ್ತು ಸಭೆ ನಡೆಸಿದರು.
ಕಂದಾಯ ಇಲಾಖೆ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ತಕ್ಷಣ ಸ್ಪಂದಿಸುವ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತಕ್ಷಣ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದರು.
ಮೆಸ್ಕಾಂ ಇಲಾಖೆಯವರು ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕು. ಲೋಕೋಪಯೋಗಿ ಇಲಾಖೆಯವರು ಮಳೆಯಿಂದ ಹಾನಿಯಾದ ರಸ್ತೆಗಳನ್ನು ತಕ್ಷಣ ದುರಸ್ತಿಪಡಿಸುವ ಮೂಲಕ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಇದೆ ರೀತಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಂಗನವಾಡಿ, ಶಾಲಾ ಕಟ್ಟಡಗಳ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಮಕ್ಕಳಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕೆಂದರು. ಉಳಿದಂತೆ ನೀರಾವರಿ, ಕೃಷಿ ಇಲಾಖೆ, ತೋಟಗಾರಿಕೆ ಹಾಗು ನಗರಸಭೆ ಅಧಿಕಾರಿಗಳು ಸಹ ಜಾಗೃತರಾಗಿರುವಂತೆ ಎಚ್ಚರಿಸಿದರು.
ಸಭೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್, ಸೂಡಾ ಸದಸ್ಯ ವಿ. ಕದಿರೇಶ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ತಾಲೂಕು ಬಗರ್‌ಹುಕುಂ ಸಮಿತಿ ಅಧ್ಯಕ್ಷ ನಾಗೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕೃಷಿ ಅಧಿಕಾರಿ ಶಶಿಧರ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕಾಂತರಾಜ್, ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment