Saturday, August 27, 2022

ಪ್ರತಿಭೆ, ಸಾಧನೆ ಯಾರ ಸ್ವತ್ತು ಅಲ್ಲ : ವಿ.ಎಚ್ ಪಂಚಾಕ್ಷರಿ

ಭದ್ರಾವತಿ ಕಾಗದನಗರದ ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ಕಾಗದ ನಗರ ಕ್ಲಸ್ಟರ್ ವ್ಯಾಪ್ತಿಯ ಪ್ರತಿಭಾ ಕಾರಂಜಿ, ಸಾಂಸ್ಕೃತಿಕ ಕಾರ್ಯಕ್ರಮ ಶನಿವಾರ ಜರುಗಿತು.
ಭದ್ರಾವತಿ, ಆ. ೨೭: ಪ್ರತಿಭೆ, ಸಾಧನೆ ಎಂಬುದು ಯಾರ ಸ್ವತ್ತು ಅಲ್ಲ. ಕಲಿಯುವ ಛಲ ಇದ್ದಾಗ ಮಾತ್ರ ನಾವು ಸಹ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ ಹೇಳಿದರು. 
ಅವರು ಶನಿವಾರ ಕಾಗದನಗರದ ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ಕಾಗದ ನಗರ ಕ್ಲಸ್ಟರ್ ವ್ಯಾಪ್ತಿಯ ಪ್ರತಿಭಾ ಕಾರಂಜಿ, ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
ಏಕಲವ್ಯನಿಗೆ ಗುರುಗಳು ವಿದ್ಯೆ ಕಲಿಸಲು ನಿರಾಕರಿಸಿದರೂ ಸಹ ಅವನು ಕಲಿಯುವ ಛಲದೊಂದಿಗೆ ತನ್ನಲ್ಲಿನ ಪ್ರತಿಭೆ ಮೂಲಕ ಸಾಧನೆಯನ್ನು ಸಾಧಿಸಿದನು. ಇಂತಹ ಮನೋಭಾವನೆ ಪ್ರತಿಯೊಬ್ಬ ವಿದ್ಯಾರ್ಥಿ ಬೆಳೆಸಿಕೊಳ್ಳಬೇಕು. ತಮ್ಮಲ್ಲಿನ ಪ್ರತಿಭೆಗಳನ್ನು ಅನಾವರಣಗೊಳಿಸಲು ಸೂಕ್ತ ವೇದಿಕೆ ಕಲ್ಪಿಸಿಕೊಡಲಾಗಿದೆ. ಇದರ ಸದುಪಯೋಗಪಡೆದುಕೊಳ್ಳಬೇಕೆಂದರು. 
ನಗರಸಭಾ ಸದಸ್ಯ ಬಸವರಾಜ ಬಿ ಆನೆಕೊಪ್ಪ ಮಾತನಾಡಿ, ಮಕ್ಕಳ ಪ್ರತಿಭೆಗೆ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಡುವಲ್ಲಿ ಶಿಕ್ಷಣ ಇಲಾಖೆ ಹೆಚ್ಚಿನ ಗಮನ ನೀಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಮಕ್ಕಳು ತಮ್ಮ ಪ್ರತಿಭೆ ಅನಾವರಣಗೊಳಿಸುವ ಮೂಲಕ ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡುವಂತಾಗಬೇಕೆಂದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಿ. ನಟರಾಜ್ ಮಾತನಾಡಿ, ಪ್ರತಿ ಮಕ್ಕಳು ಉನ್ನತ ಹುದ್ದೆ ಅಲಂಕರಿಸಬೇಕೆಂಬ ಗುರಿಯೊಂದಿಗೆ ತಮ್ಮ ಪ್ರತಿಭೆಗಳನ್ನು ಸಹ ಅನಾವರಣಗೊಳಿಸುವ ಮೂಲಕ ಮುನ್ನಡೆಯಬೇಕು. ಕೆಲವು ಮಕ್ಕಳಿಗೆ ಪ್ರತಿಭೆ ಅನಾವರಣಗೊಳಿಸಲು ಇದು ವೇದಿಕೆಯಾದರೆ ಉಳಿದ ಮಕ್ಕಳಿಗೆ ನಾವು ಸಹ ಅವರ ದಾರಿಯಲ್ಲಿ ಸಾಗಲು ಪ್ರೇರೇಪಿಸುವ ವೇದಿಕೆಯಾಗಿದೆ ಎಂದರು. 
ಶಾಲೆಯ ಪ್ರಾಂಶುಪಾಲ ಆರ್. ಸತೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂಪಿಎಂ ನಗರಾಡಳಿತ ಇಲಾಖೆ ವ್ಯವಸ್ಥಾಪಕ ಸತೀಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕಿ ಸುಮತಿ ಕಾರಂತ್, ಶಿಕ್ಷಣ ಇಲಾಖೆಯ ಸಿ. ಚನ್ನಪ್ಪ, ಶಾಲೆಯ ಉಪಪ್ರಾಂಶುಪಾಲ ನಾಗರಾಜ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 
ಪ್ರೇರಣಾ ಮತ್ತು ಪರಿಣಿತ ಪ್ರಾರ್ಥಿಸಿದರು. ಕೆ.ಎಸ್ ರಾಘವೇಂದ್ರ ನಿರೂಪಿಸಿದರು. ಸಿಆರ್‌ಪಿ ಗಿರಿಜಮ್ಮ ವಂದಿಸಿದರು. ಕಾಗದ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಶಾಲೆಗಳ ಶಿಕ್ಷಕರು, ಮಕ್ಕಳು, ಪೋಷಕರು ಪಾಲ್ಗೊಂಡಿದ್ದರು. 
 



No comments:

Post a Comment