ಭದ್ರಾವತಿ ತಾಲೂಕಿನ ಕುವೆಂಪು ವಿಶ್ವವಿದ್ಯಾಲಯ ಬಿಇಡಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಪ್ರಸ್ತುತ ಹೆಚ್ಚಿನ ಪರೀಕ್ಷಾ ಶುಲ್ಕ ನಿಗದಿಪಡಿಸಿರುವುದನ್ನು ವಿರೋಧಿಸಿ ಗುರುವಾರ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಬಿ.ಇಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಭದ್ರಾವತಿ, ಆ. ೧೮: ತಾಲೂಕಿನ ಕುವೆಂಪು ವಿಶ್ವವಿದ್ಯಾಲಯ ಬಿಇಡಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಪ್ರಸ್ತುತ ಹೆಚ್ಚಿನ ಪರೀಕ್ಷಾ ಶುಲ್ಕ ನಿಗದಿಪಡಿಸಿದ್ದು, ಇದರಿಂದ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಈ ಹಿಂದಿನ ಶುಲ್ಕ ನಿಗದಿಪಡಿಸಬೇಕೆಂದು ಆಗ್ರಹಿಸಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ವಿಶ್ವವಿದ್ಯಾಲಯ ವ್ಯಾಪ್ತಿಯ ಪರಿಶಿಷ್ಟ ಜಾತಿ ಪಂಗಡದ ವಿದ್ಯಾರ್ಥಿಗಳಿಗೆ ಏಕಾಏಕಿ ಪರೀಕ್ಷಾ ಶುಲ್ಕ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಸರ್ಕಾರದ ಆದೇಶದಂತೆ ರು. ೨೨೦ ನಿಗದಿಪಡಿಸಲಾಗಿದೆ. ಆದರೆ ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಮಾತ್ರ ಹೆಚ್ಚುವರಿ ಶುಲ್ಕ ಭರಿಸಲು ಕುಲಸಚಿವರು(ಮೌಲ್ಯಮಾಪನ) ವಿಶೇಷ ಸೂಚನೆ ಮೂಲಕ ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಬಡ ವಿದ್ಯಾರ್ಥಿಗಳು ತೊಂದರೆ ಎದುರಿಸುವಂತಾಗಿದೆ. ಈಗಾಗಲೇ ಹಲವಾರು ಬಾರಿ ಈ ಸಂಬಂಧ ಮನವಿ ಮಾಡಲಾಗಿದೆ. ಆದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈಗಾಗಲೇ ಪರೀಕ್ಷಾ ದಿನಾಂಕ ಸಹ ನಿಗದಿಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ಈ ಹಿಂದಿನ ಪರೀಕ್ಷಾ ಶುಲ್ಕವನ್ನು ಪಾವತಿಸಲು ಆದೇಶ ಹೊರಡಿಸಬೇಕು. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಪ್ರಮುಖರು ಎಚ್ಚರಿಸಿದರು.
No comments:
Post a Comment