ಭದ್ರಾವತಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಮಾತನಾಡಿದರು.
ಭದ್ರಾವತಿ, ಆ. ೧೭: ಭಾರತೀಯ ಜನತಾ ಪಕ್ಷ ಪ್ರತಿಯೊಬ್ಬರ ಸಂಕಷ್ಟಕ್ಕೆ ಸ್ಪಂದಿಸುವ ಪಕ್ಷವಾಗಿದ್ದು, ಸಂದರ್ಭಗಳನ್ನು ದುರ್ಬಳಕೆ ಮಾಡಿಕೊಂಡು ರಾಜಕೀಯ ನಡೆಸುವುದಿಲ್ಲ. ಇದನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಅರ್ಥ ಮಾಡಿಕೊಳ್ಳಬೇಕೆಂದು ಪಕ್ಷದ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹೇಳಿದರು.
ಅವರು ಬುಧವಾರ ಪಕ್ಷದ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಾಸಕರು ಕ್ಷೇತ್ರದಲ್ಲಿ ಕಳೆದ ೨ ದಿನಗಳ ಹಿಂದೆ ಹಿಂದೂ ಸಮಾಜದ ಯುವಕನೋರ್ವನ ಮೇಲೆ ನಡೆದಿರುವ ಹಲ್ಲೆಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರನ್ನು ಓಲೈಸಿಕೊಳ್ಳುವ ನಿಟ್ಟಿನಲ್ಲಿ ಒಂದು ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರು ಬಿಜೆಪಿ ಪಕ್ಷ ಹಾಗು ನಾಯಕರ ವಿರುದ್ಧ ವಿನಾಕಾರಣ ಮಾತನಾಡುವುದು ಸರಿಯಲ್ಲ ಎಂದರು.
ಬಿಜೆಪಿ ಪಕ್ಷ ಎಂದಿಗೂ ಸಂದರ್ಭಗಳನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ. ಆದರೆ ಪಕ್ಷ ಹಾಗು ನಾಯಕರು ಎಂದಿಗೂ ಹಿಂದೂ ಸಮಾಜದ ಪರವಾಗಿ ಹಾಗು ಏಳಿಗಾಗಿ ಶ್ರಮಿಸುತ್ತಾರೆ. ಹಿಂದೂ ಸಮಾಜದಲ್ಲಿ ಯಾರೇ ಸಂಕಷ್ಟಕ್ಕೆ ಒಳಗಾದರೂ ಸಹ ಅವರ ಪರವಾಗಿ ಇರುತ್ತಾರೆ. ಪಕ್ಷದ ತತ್ವ ಸಿದ್ದಾಂತಗಳು ಪಕ್ಷದ ಪ್ರತಿಯೊಬ್ಬರಲ್ಲೂ ಯಾರೇ ಸಂಕಷ್ಟಕ್ಕೆ ಒಳಗಾದರೂ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳುವಂತೆ ಮಾಡಿವೆ. ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್ ಈಶ್ವರಪ್ಪ ಅವರು ಹಿಂದೂ ಸಮಾಜದ ಏಳಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಇಂತಹ ನಾಯಕರು ಮಂಗಳವಾರ ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಸುನಿಲ್ ಆರೋಗ್ಯ ವಿಚಾರಿಸಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಇಲ್ಲಿ ಯಾವುದೇ ರಾಜಕೀಯ ದುರುದ್ದೇಶವಿಲ್ಲ ಎಂದರು.
ಶಾಸಕರು ಈಶ್ವರಪ್ಪನವರ ಭೇಟಿಯನ್ನು ರಾಜಕೀಯ ದುರುದ್ದೇಶಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿನಾಕಾರಣ ಪಕ್ಷ ಹಾಗು ನಾಯಕರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಇಂತಹ ಆರೋಪಗಳಿಗೆ ಕ್ಷೇತ್ರದ ನಾಗರೀಕರು ಕಿವಿ ಕೊಡಬಾರದು. ಕ್ಷೇತ್ರದಲ್ಲಿ ಈ ರೀತಿಯ ಘಟನೆ ನಡೆದಿರುವುದು ನಮ್ಮ ಮನಸ್ಸಿಗೂ ನೋವಾಗಿದೆ. ಎಲ್ಲೆಡೆ ಶಾಂತಿ ನೆಲೆಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು.
ಒಂದು ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರು ಹಲ್ಲೆಗೊಳಗಾದವರು ಯಾರೇ ಇರಲಿ ಅವರು ಮೊದಲು ಆಸ್ಪತ್ರೆಗೆ ತೆರಳಿ ಸಾಂತ್ವನ ಹೇಳಬೇಕು. ಅದು ಬಿಟ್ಟು ಇಲ್ಲ ಸಲ್ಲದ ಆರೋಪ ಮಾಡುವುದು ಸರಿಯಲ್ಲ.
ಪತ್ರಿಕಾಗೋಷ್ಠಿಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಚನ್ನೇಶ್, ಜಿಲ್ಲಾ ಮುಖಂಡ ಎಂ. ಮಂಜುನಾಥ್, ಚಂದ್ರು ದೇವರನರಸೀಪುರ, ಅನ್ನಪೂರ್ಣ ಸಾವಂತ್, ಆನಂದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment