ಭದ್ರಾವತಿ ರೋಟರಿಕ್ಲಬ್ ಸಭಾಂಗಣದಲ್ಲಿ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟ ಹಾಗು ರೋಟರಿ ಕ್ಲಬ್ ಸಹಯೋಗದೊಂದಿಗೆ ಕಾರ್ಮಿಕ ಇಲಾಖೆ ವತಿಯಿಂದ ನಗರದ ಬ್ಯೂಟಿಷಿಯನ್ ಮಾಲೀಕರು ಹಾಗು ಕೆಲಸಗಾರರಿಗೆ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಸೆ. ೨೧: ಅಸಂಘಟಿತ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಘಟಿತರಾಗಬೇಕೆಂದು ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಹೇಳಿದರು.
ಅವರು ರೋಟರಿಕ್ಲಬ್ ಸಭಾಂಗಣದಲ್ಲಿ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟ ಹಾಗು ರೋಟರಿ ಕ್ಲಬ್ ಸಹಯೋಗದೊಂದಿಗೆ ಕಾರ್ಮಿಕ ಇಲಾಖೆ ವತಿಯಿಂದ ನಗರದ ಬ್ಯೂಟಿಷಿಯನ್ ಮಾಲೀಕರು ಹಾಗು ಕೆಲಸಗಾರರಿಗೆ ಹಮ್ಮಿಕೊಳ್ಳಲಾಗಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.
ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಘಟಿತರಾಗುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಂಸದ ಬಿ.ವೈ ರಾಘವೇಂದ್ರ ಮತ್ತು ಶಾಸಕ ಬಿ.ಕೆ ಸಂಗಮೇಶ್ವರ್ ಅವರು ಅಸಂಘಟಿತ ಕಾರ್ಮಿಕರು ಸಂಘಟಿತರಾಗಲು ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಬ್ಯೂಟಿಷಿಯನ್ ಕೆಲಸಗಾರರನ್ನು ಸಹ ಸರ್ಕಾರ ಅಸಂಘಟಿತ ಕಾರ್ಮಿಕರೆಂದು ಗುರುತಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಬಲವಾದ ಸಂಘಟನೆ ರೂಪುಗೊಳ್ಳಬೇಕೆಂದರು.
ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು, ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ರೋಟರಿ ಕ್ಲಬ್ ಅಧ್ಯಕ್ಷ ಅಡವೀಶಯ್ಯ, ಕಾರ್ಯದರ್ಶಿ ಶಿವಕುಮಾರ್, ಪ್ರಮುಖರಾದ ಪದ್ಮಾವತಿ, ಕವಿತ ಸುರೇಶ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳಾದ ಕವಿತ, ಸುಮಿತ್ರ, ಶಾರದ, ಶಶಿ, ನೇತ್ರ, ಸವಿತಾ, ಆರತಿ, ವಿಜಯ್ ಸೇರಿದಂತೆ ಬ್ಯೂಟಿಷಿಯನ್ ಮಾಲೀಕರು, ಕೆಲಸಗಾರರು ಪಾಲ್ಗೊಂಡಿದ್ದರು.
No comments:
Post a Comment