ಭದ್ರಾವತಿ ಬಿ.ಎಚ್ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ ಉದ್ಘಾಟಿಸಿದರು.
ಭದ್ರಾವತಿ, ಸೆ. ೨೪ : ಪೌರಕಾರ್ಮಿಕರಲ್ಲಿ ಬಹಳಷ್ಟು ಮಂದಿ ಇಂದಿಗೂ ದುಶ್ಚಟಗಳಿಂದ ಹೊರಬಂದಿಲ್ಲ. ಇದರಿಂದಾಗಿ ಅವರ ಕುಟುಂಬಗಳಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ವಿಷಾದ ವ್ಯಕ್ತಪಡಿಸಿದರು.
ಅವರು ನಗರದ ಬಿ.ಎಚ್ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಶ್ರಮಜೀವಿಗಳಾಗಿರುವ ಪೌರಕಾರ್ಮಿಕರು ಇಂದಿಗೂ ನ್ಯಾಯಯುತವಾದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಅವರಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು.
ಬಹಳಷ್ಟು ಪೌರಕಾರ್ಮಿಕರು ಇಂದಿಗೂ ಬದಲಾಗಿಲ್ಲ. ದುಶ್ಚಟಗಳಿಂದ ದೂರವಿದ್ದು, ಒಳ್ಳೆಯ ಗುಣಗಳನ್ನು ಮೈಗೂಡಿಸಿಕೊಳ್ಳುವ ಜೊತೆಗೆ ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು. ಕುಟುಂಬದಲ್ಲಿ ಶಾಂತಿ, ನೆಮ್ಮದಿ ಕಂಡುಕೊಳ್ಳಬೇಕು. ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನಿಸಲಾಗುತ್ತಿದೆ. ಪೌರಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇವುಗಳ ಸದುಪಯೋಗಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ನಗರಸಭೆ ಉಪಾಧ್ಯಕ್ಷ ಚನ್ನಪ್ಪ ಮಾತನಾಡಿ, ಪೌರಕಾರ್ಮಿಕರು ತಮ್ಮ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕು. ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಈ ದೇಶಕ್ಕೆ ನೀಡಿರುವ ಸಂವಿಧಾನದ ಫಲವಾಗಿ ಪೌರಕಾರ್ಮಿಕರು ಸಹ ನೆಮ್ಮದಿಯಾಗಿ ಬದಕಲು ಸಾಧ್ಯವಾಗಿದೆ. ಅಂಬೇಡ್ಕರ್‌ರವರ ಆಶಯದಂತೆ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಹೋರಾಟ, ಸಂಘಟನೆ ಮತ್ತು ಶಿಕ್ಷಣ ಅಗತ್ಯವಾಗಿದೆ. ಇದನ್ನು ಪೌರಕಾರ್ಮಿಕರು ಅರಿತುಕೊಂಡು ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಬೇಕೆಂದರು.
ಪೌರಾಯುಕ್ತ ಮನುಕುಮಾರ್ ಮಾತನಾಡಿ, ನಾವುಗಳು ಸಮಾಜದಲ್ಲಿ ಹೆಚ್ಚಿನ ಶ್ರಮ ಜೀವಿಗಳಾಗಿದ್ದೇವೆ. ಆದರೆ ಶ್ರಮಕ್ಕೆ ತಕ್ಕಂತೆ ಗೌರವ ಲಭಿಸುತ್ತಿಲ್ಲ. ನಮ್ಮ ವೃತ್ತಿ ಗೌರವ, ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ನಡೆದುಕೊಳ್ಳಬೇಕಾಗಿದೆ. ಕಾಲಘಟ್ಟಗಳು ಬದಲಾದಂತೆ ನಾವುಗಳು ಸಹ ಬದಲಾಗಬೇಕಾಗಿದೆ. ನಮ್ಮ ಮಕ್ಕಳನ್ನು ಸಹ ವಿದ್ಯಾವಂತರನ್ನಾಗಿ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಬೇಕು. ಆಗ ಮಾತ್ರ ನಮ್ಮ ವೃತ್ತಿ ಬದುಕು ಸಾರ್ಥಕವಾಗುತ್ತದೆ ಎಂದರು.
ನಗರಸಭೆ ಸದಸ್ಯರಾದ ಬಿ.ಕೆ ಮೋಹನ್, ಜಾರ್ಜ್ ಸೇರಿದಂತೆ ಇನ್ನಿತರರು ಮಾತನಾಡಿದರು. ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಜಾರ್ಜ್, ಆರ್. ಮೋಹನ್‌ಕುಮಾರ್, ಉದಯ್‌ಕುಮಾರ್, ಲತಾ ಚಂದ್ರಶೇಖರ್, ಟಿಪ್ಪು ಸುಲ್ತಾನ್, ಕೋಟೇಶ್ವರರಾವ್, ಬಸವರಾಜ ಬಿ. ಆನೇಕೊಪ್ಪ, ಮಣಿ ಎಎನ್‌ಎಸ್, ಮಂಜುಳ ಸುಬ್ಬಣ್ಣ, ಅನುಪಮ ಚನ್ನೇಶ್, ಶಶಿಕಲಾ ನಾರಾಯಣಪ್ಪ, ಶೃತಿ ವಸಂತ್, ನಾಗರತ್ನ, ಬಿ.ಎಂ ಮಂಜುನಾಥ್, ರಿಯಾಜ್ ಅಹಮದ್ ಸೇರಿದಂತೆ ನಗರಸಭೆ ಬಹುತೇಕ ಸದಸ್ಯರು, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್ ಹಾಗು ಪದಾಧಿಕಾರಿಗಳು ಉಪಸ್ಥಿತರಿದ್ದರು. ಪೌರಕಾರ್ಮಿಕರಿಂದ ನಾಟಕ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ನೂತನ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಅಧ್ಯಕ್ಷತೆ ವಹಿಸಿದ್ದರು. ಪರಿಸರ ಅಭಿಯಂತರ ಪ್ರಭಾಕರ್ ಸ್ವಾಗತಿಸಿದರು. ನರಸಿಂಹಮೂರ್ತಿ ಕಾರ್ಯಕ್ರಮ ನಿರೂಪಿಸಿದರು.
No comments:
Post a Comment