Thursday, October 13, 2022

ವಿಐಎಸ್‌ಎಲ್ ಖಾಸಗೀಕರಣ ಕೈಬಿಟ್ಟಿರುವುದು ಒಳ್ಳೆಯ ಬೆಳವಣಿಗೆ, ಅಗತ್ಯವಿರುವ ಬಂಡವಾಳ ತೊಡಗಿಸಿ

ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಆಗ್ರಹ

ಜೆ. ಜಗದೀಶ್
    ಭದ್ರಾವತಿ, ಅ. ೧೩ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಖಾಸಗೀಕರಣಗೊಳಿಸುವ ಪ್ರಕ್ರಿಯೆ ಕೈಬಿಟ್ಟಿರುವುದು ಒಳ್ಳೆಯ ಬೆಳವಣಿಯಾಗಿದ್ದು, ಉಕ್ಕು ಪ್ರಾಧಿಕಾರ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಆಗ್ರಹಿಸಿದ್ದಾರೆ.
    ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿ, ಕಾರ್ಖಾನೆಯನ್ನು ಮುನ್ನಡೆಸಿಕೊಂಡು ಹೋಗಲು ಬಂಡವಾಳದಾರರು ಆಸಕ್ತಿ ತೋರಿಸದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಖಾಸಗೀಕರಣಗೊಳಿಸುವ ಪ್ರಕ್ರಿಯೆ ಕೈಬಿಟ್ಟಿದೆ. ಇದರಿಂದ ಈ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣಗೊಳಿಸಲು ಸಾಧ್ಯವಿಲ್ಲ ಎಂಬುದು ಇದರಿಂದ ಮನವರಿಕೆಯಾಗಿದೆ ಎಂದರು.


    ಕಾರ್ಖಾನೆಯನ್ನು ಅಭಿವೃದ್ಧಿಗೊಳಿಸಬೇಕೆಂದು ಕಳೆದ ಸುಮಾರು ೨೦ ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಯಲಿದೆ. ಖಾಸಗೀಕರಣ ಪ್ರಕ್ರಿಯೆ ಕೈಬಿಟ್ಟಿರುವ ಹಿನ್ನಲೆಯಲ್ಲಿ ಈಗಲಾದರೂ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸಬೇಕು. ಕಳೆದ ಸುಮಾರು ೩೦ ವರ್ಷಗಳಿಂದ ಅಗತ್ಯವಿರುವ ಬಂಡವಾಳ ತೊಡಗಿಸದೆ ಉಕ್ಕು ಪ್ರಾಧಿಕಾರ ಮಲತಾಯಿ ಧೋರಣೆ ಅನುಸರಿಸಿಕೊಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರಾಧಿಕಾರಕ್ಕೆ ಬಂಡವಾಳ ತೊಡಗಿಸಲು ನಿರ್ದೇಶಿಸಬೇಕೆಂದು ಆಗ್ರಹಿಸಿದರು.
    ರಾಜ್ಯ ಸರ್ಕಾರ ಈಗಾಗಲೇ ಅಗತ್ಯವಿರುವ ಗಣಿ ಮಂಜೂರಾತಿ ಮಾಡಿದ್ದು, ಗಣಿಗಾರಿಕೆಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಮುಂದಿನ ಒಂದೂವರೆ ವರ್ಷದಲ್ಲಿ ಗಣಿಗಾರಿಕೆ ಆರಂಭಗೊಳ್ಳುವ ನಿರೀಕ್ಷೆ ಇದೆ. ಅಷ್ಟರಲ್ಲಿ ಸರ್ಕಾರ ಅಗತ್ಯವಿರುವ ಬಂಡವಾಳ ತೊಡಗಿಸಿದ್ದಲ್ಲಿ ಕಾರ್ಖಾನೆಯನ್ನು ಸಂಪೂರ್ಣವಾಗಿ ಅಭಿವೃದ್ಧಿಗೊಳಿಸಲು ಸಾಧ್ಯ. ಪ್ರಸ್ತುತ ಬೆಳವಣಿಗೆ ಹಿನ್ನಲೆಯಲ್ಲಿ ಶೀಘ್ರದಲ್ಲಿಯೇ ಜನಪ್ರತಿನಿಧಿಗಳ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲಾಗುವುದು ಎಂದರು.

No comments:

Post a Comment