Saturday, October 1, 2022

ನಗರದ ವಿವಿಧೆಡೆ ಮಹಾತ್ಮಗಾಂಧಿ ಜಯಂತಿ

    ಭದ್ರಾವತಿ, ಅ. ೧ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸೇರಿದಂತೆ ವಿವಿಧೆಡೆ ಅ.೨ರಂದು ಮಹಾತ್ಮಗಾಂಧಿ ಜಯಂತಿ ಹಮ್ಮಿಕೊಳ್ಳಲಾಗಿದೆ.
    ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ನ್ಯೂಟೌನ್ ಶಾರದ ಮಂದಿರದಲ್ಲಿ ಬೆಳಿಗ್ಗೆ ೯ ಗಂಟೆಗೆ ಮಹಾತ್ಮಗಾಂಧಿ ಜಯಂತಿ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಗಾಂಧಿ ನಮನ ಹಾಗು ಸರ್ವ ಧರ್ಮ ಗ್ರಂಥಗಳ ಸಂದೇಶ ಪಠಣ ಹಾಗು ದೇಶ ಭಕ್ತಿ ಗೀತೆ ಗಾಯನ ನಡೆಯಲಿದೆ.
    ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಹಾಗು ಕಾರ್ಮಿಕ ಮತ್ತು ಅಧಿಕಾರಿಗಳ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಖಾನೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ತರಂಗ ಕಿವುಡು ಮಕ್ಕಳ ಶಾಲೆ ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಎಲ್. ಪ್ರವೀಣ್‌ಕುಮಾರ್ ಕೋರಿದ್ದಾರೆ.
    ಜೆಡಿಎಸ್ ಪಕ್ಷದಿಂದ ಗಾಂಧಿ ಜಯಂತಿ:
    ಜಾತ್ಯತೀತ ಜನತಾದಳ ವತಿಯಿಂದ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ ನೇತೃತ್ವದಲ್ಲಿ ಅ.೨ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ತರೀಕೆರೆ ರಸ್ತೆಯ ಮಹಾತ್ಮಗಾಂಧಿ ವೃತ್ತದಲ್ಲಿ ಗಾಂಧಿ ಜಯಂತಿ ಹಮ್ಮಿಕೊಳ್ಳಲಾಗಿದೆ.
    ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಗಾಂಧಿ ಜಯಂತಿ ಆಚರಣೆ ನಡೆಯಲಿದ್ದು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಕೋರಲಾಗಿದೆ.

No comments:

Post a Comment