ಭದ್ರಾವತಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಂಗಳವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ೬೭ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ, ನ. ೧ : ನೆಲ-ಜಲ-ಭಾಷೆ ಮೇಲಿನ ಅಭಿಮಾನ ಬೆಳೆಸಿಕೊಳ್ಳುವ ಮೂಲಕ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ೬೭ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ನಾಡಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕನ್ನಡ ಭಾಷೆ ತನ್ನದೇ ಆದ ಪರಂಪರೆ ಹೊಂದಿದ್ದು, ಪ್ರತಿಯೊಬ್ಬರಲ್ಲೂ ಭಾಷಾಭಿಮಾನ ಬಹಳ ಮುಖ್ಯವಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಕನ್ನಡ ಭಾಷೆ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದರು.
ತಹಸೀಲ್ದಾರ್ ಆರ್. ಪ್ರದೀಪ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್, ಸದಸ್ಯರಾದ ಗೀತಾರಾಜ್‌ಕುಮಾರ್, ಕಾಂತರಾಜ್, ಮಣಿ ಎಎನ್‌ಎಸ್, ಸರ್ವಮಂಗಳ ಭೈರಪ್ಪ, ಶೃತಿ ವಸಂತ್, ರಿಯಾಜ್ ಅಹಮದ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ವಲಯ ಅರಣ್ಯಾಧಿಕಾರಿ ರಾಜೇಶ್, ಉಪವಲಯ ಅರಣ್ಯಾಧಿಕಾರಿ ಬಿ.ಆರ್. ದಿನೇಶ್‌ಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿದರು. ಅಪೇಕ್ಷ ಮಂಜುನಾಥ್ ನಿರೂಪಿಸಿದರು. ಸುಮತಿ ಕಾರಂತ್ ತಂಡದವರು ನಾಡಗೀತೆ ಹಾಗು ಜಾನಪದ ಕಲಾವಿದ ರೇವಣಪ್ಪ ತಂಡದವರು ರೈತಗೀತೆ ಹಾಡಿದರು. ತಾಲೂಕು ದೈಹಿಕ ಶಿಕ್ಷಣ ಸಂಯೋಜಕ ಪ್ರಭು, ದೈಹಿಕ ನಿರ್ದೇಶಕರಾದ ಶಿವಲಿಂಗೇಗೌಡ, ಕರಣ್‌ಸಿಂಗ್, ತಾಲೂಕು ಕಛೇರಿ, ನಗರಸಭೆ ಹಾಗು ತಾಲೂಕು ಪಂಚಾಯಿತಿ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು.
ಇದಕ್ಕೂ ಮೊದಲು ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಅಂಬೇಡ್ಕರ್ ವೃತ್ತದಿಂದ ತಾಯಿ ರಾಜರಾಜೇಶ್ವರಿ ಭಾವಚಿತ್ರದೊಂದಿಗೆ ಕನಕಮಂಟಪ ಮೈದಾನದವರೆಗೂ ಮೆರವಣಿಗೆ ನಡೆಸಲಾಯಿತು.
No comments:
Post a Comment