Monday, November 28, 2022

ಸಂವಿಧಾನ ಗೌರವಿಸುವ ಜೊತೆಗೆ ಮಹತ್ವ ಅರಿತುಕೊಳ್ಳಿ : ನ್ಯಾ. ಉಜ್ವಲ ವೀರಣ್ಣ ಸಿದ್ದನ್ನವರ

ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ ಮತ್ತು ಲಯನ್ಸ್ ಕ್ಲಬ್ ಹಾಗು ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜಿನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ದಿನಾಚರಣೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷೆ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಉಜ್ವಲ ವೀರಣ್ಣ ಸಿದ್ದನ್ನವರ ಮಾತನಾಡಿದರು.   
    ಭದ್ರಾವತಿ, ನ. ೨೮: ಪ್ರತಿಯೊಬ್ಬರು ಸಂವಿಧಾನಕ್ಕೆ ಗೌರವ ನೀಡುವ ಜೊತೆಗೆ ಸಂವಿಧಾನದ ಮಹತ್ವ ಅರಿತುಕೊಳ್ಳಬೇಕೆಂದು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷೆ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಉಜ್ವಲ ವೀರಣ್ಣ ಸಿದ್ದನ್ನವರ ಹೇಳಿದರು.
    ಅವರು ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ ಮತ್ತು ಲಯನ್ಸ್ ಕ್ಲಬ್ ಹಾಗು ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜಿನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ನಮ್ಮ ದೇಶದ ಸಂವಿಧಾನಕ್ಕೆ ಗೌರವ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸಂವಿಧಾನದ ಆಶಯದಂತೆ ನಡೆದುಕೊಳ್ಳುವ ಮೂಲಕ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸುವಂತಾಗಬೇಕು. ಆಗ ಮಾತ್ರ ಸಂವಿಧಾನ ದಿನಾಚರಣೆಗೆ ಅರ್ಥ ಬರುತ್ತದೆ ಎಂದರು.
    ಲಯನ್ಸ್ ಕ್ಲಬ್ ಅಧ್ಯಕ್ಷ ಎ.ಎನ್ ಕಾರ್ತಿಕ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಪ್ರಾಸ್ತಾವಿಕ ನುಡಿಗಳನ್ನಾಡಿದರು.
    ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಯದರ್ಶಿ, ನ್ಯಾಯಾಧೀಶ ಆರ್. ಯತೀಶ್, ಸರ್ಕಾರಿ ಬಾಲಿಕಾ ಪದವಿ ಕಾಲೇಜಿನ ಪ್ರಾಂಶುಪಾಲ ಗುಡ್ಡಪ್ಪ ಕುಟ್ರೆ, ಸರ್ಕಾರಿ ಅಭಿಯೋಜಕ ಎಂ.ಜಿ ತ್ಯಾಗರಾಜ್, ವಕೀಲರ ಸಂಘದ ಉಪಾಧ್ಯಕ್ಷ ಡಿ.ಎಂ ವಿಶ್ವನಾಥ್, ಕಾರ್ಯದರ್ಶಿ ಉದಯ್‌ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಸಂವಿಧಾನ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಭಾಷಣ ಹಾಗು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.  

No comments:

Post a Comment