Tuesday, December 27, 2022

ಅಭ್ಯರ್ಥಿ ಗೆಲ್ಲಿಸಲು ಜೆಡಿಎಸ್ ತಂತ್ರಗಾರಿಕೆ : ಯುವ ಮತದಾರರನ್ನು ಸೆಳೆಯಲು ಹೆಚ್ಚಿನ ಆಸಕ್ತಿ

ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹಾಗು ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂರವರಿಗೆ ಭದ್ರಾವತಿ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ನೇತೃತ್ವದ ನಿಯೋಗ ಖುದ್ದಾಗಿ ಭೇಟಿ ಮಾಡಿ ಪಕ್ಷ ಸಂಘಟನೆ ಕುರಿತು ಮಾಹಿತಿ ನೀಡಿತು.
    ಭದ್ರಾವತಿ, ಡಿ. ೨೮: ವಿಧಾನಸಭಾ ಚುನಾವಣೆಗೆ ಈಗಾಗಲೇ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಘೋಷಿಸಿರುವ ಜಾತ್ಯತೀತ ಜನತಾದಳ ಇದೀಗ ತನ್ನ ಅಭ್ಯರ್ಥಿ ಗೆಲುವಿಗಾಗಿ ಹಲವು ತಂತ್ರಗಾರಿಕೆಗಳಿಗೆ ಮೊರೆ ಹೋಗಿದ್ದು, ಈ ನಿಟ್ಟಿನಲ್ಲಿ ಪಕ್ಷದ ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್ ನೇತೃತ್ವದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ.
    ಕಳೆದ ಸುಮಾರು ೨ ವರ್ಷಗಳಿಂದ ನಿರಂತರವಾಗಿ ಕ್ಷೇತ್ರದಾದ್ಯಂತ ಸಂಚರಿಸಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ಅಭಿಮಾನಿಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಮುಂದಾಗಿದ್ದಾರೆ. ವಿಶೇಷ ಎಂದರೆ ಯುವ ಸಮೂಹ ಸೆಳೆಯಲು ಹಲವು ರೀತಿಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಅಪ್ಪಾಜಿ ವರ್ಚಸ್ಸಿನ ಮತ ಹೊರತುಪಡಿಸಿ ಹೊಸ ಮತದಾರರನ್ನು ಸೆಳೆಯಲು ಹೆಚ್ಚಿನ ಗಮನ ಹರಿಸಲಾಗಿದೆ. ಈಗಾಗಲೇ ಗ್ರಾಮಾಂತರ ಭಾಗದಲ್ಲಿ ಯುವ ಮುಖಂಡರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ. ಅದರಲ್ಲೂ ವಿಶೇಷ ಎಂದರೆ ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಅಲ್ಪ ಸಮುದಾಯದ ಮತಗಳ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ.
    ಮಧುಕುಮಾರ್‌ರವರು ಅಭ್ಯರ್ಥಿ ಶಾರದ ಅಪ್ಪಾಜಿಯವರನ್ನು ಗೆಲ್ಲಿಸುವ ನಿಟ್ಟಿನ ಹೆಚ್ಚಿನ ಆಸಕ್ತಿವಹಿಸಿದ್ದು, ಈಗಾಗಲೇ ಹಲವು ಕಾರ್ಯಕ್ರಮಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಆಯೋಜಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚುನಾವಣೆ ಘೋಷಣೆಯಾಗುವಷ್ಟರಲ್ಲಿ ಪಕ್ಷವನ್ನು ಹೆಚ್ಚಿನ ರೀತಿಯಲ್ಲಿ ಸಂಘಟಿಸಲು ಹಗಲಿರುಳು ಶ್ರಮಿಸುತ್ತಿದ್ದು, ಈ ಬೆಳವಣಿಗೆಗಳ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹಾಗು ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂರವರಿಗೆ ಅಭ್ಯರ್ಥಿ ಶಾರದ ಅಪ್ಪಾಜಿ ನೇತೃತ್ವದ ನಿಯೋಗ ಖುದ್ದಾಗಿ ಭೇಟಿ ಮಾಡಿ ಮಾಹಿತಿ ನೀಡಿದೆ.
    ನಿಯೋಗದಲ್ಲಿ ವಿಧಾನಪರಿಷತ್ ಸದಸ್ಯ ಭೋಜೇಗೌಡ, ಪಕ್ಷದ ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ತಾಲೂಕು ನಗರ ಅಧ್ಯಕ್ಷ ಆರ್. ಕರುಣಾಮೂರ್ತಿ, ಪಕ್ಷದ ನೂತನ ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್, ಭಾಗ್ಯಮ್ಮ, ಸೈಯದ್ ಅಜ್ಮಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

No comments:

Post a Comment