ಭದ್ರಾವತಿ ತಾಲೂಕಿನ ಕಾಡಂಚಿನ ಗ್ರಾಮಗಳಾದ ದೊಡ್ಡೇರಿ, ಬಾಳೇಕಟ್ಟೆ, ಬಿಸಿಲುಮನೆ, ಉಕ್ಕುಂದ ಮತ್ತು ವರವಿನಕೆರೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಿವಾಸಿಗಳು ಸೋಮವಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯರವರಿಗೆ ಮನವಿ ಸಲ್ಲಿಸಿದರು.
ಭದ್ರಾವತಿ, ಡಿ. ೨೬ : ತಾಲೂಕಿನ ಕಾಡಂಚಿನ ಗ್ರಾಮಗಳಾದ ದೊಡ್ಡೇರಿ, ಬಾಳೇಕಟ್ಟೆ, ಬಿಸಿಲುಮನೆ, ಉಕ್ಕುಂದ ಮತ್ತು ವರವಿನಕೆರೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಿವಾಸಿಗಳು ಸೋಮವಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯರವರಿಗೆ ಮನವಿ ಸಲ್ಲಿಸಿದರು.
ನಮ್ಮ ಬಳಿ ಇರುವ ಅಲ್ಪಸ್ವಲ್ಪ ಜಮೀನಿನಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಜೀವನ ಸಾಗಿಸುತ್ತಿದ್ದು, ತೆಂಗು, ಅಡಕೆ, ಭತ್ತ, ರಾಗಿ, ಜೋಳ, ಕಬ್ಬು ಸೇರಿದಂತೆ ಇನ್ನಿತರ ಬೆಳೆಗಳನ್ನು ಬೆಳೆಯುತ್ತಿದ್ದು, ಇತ್ತೀಚೆಗೆ ಈ ಗ್ರಾಮಗಳ ವ್ಯಾಪ್ತಿಯಲ್ಲಿ ಒಂಟಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ರಾತ್ರಿ ವೇಳೆ ಈ ಭಾಗದಲ್ಲಿ ಸಂಚರಿಸುವುದು ಅಸಾಧ್ಯವಾಗಿದೆ. ಅಲ್ಲದೆ ಕಾಡಾನೆಗಳಿಂದ ಬೆಳೆ ಹಾನಿಯಾಗುತ್ತಿದ್ದು, ಸಂಕಷ್ಟಕ್ಕೆ ಒಳಗಾಗುವಂತಾಗಿದೆ ಎಂದು ಅಳಲು ತೋರ್ಪಡಿಸಿಕೊಂಡರು.
ಕೇವಲ ಜಮೀನುಗಳಿಗೆ ಮಾತ್ರವಲ್ಲದೆ ಮನೆಗಳ ಬಳಿ ಸಹ ಕಾಡಾನೆಗಳು ಬರುತ್ತಿದ್ದು, ಇದರಿಂದಾಗಿ ಮನೆಯಿಂದ ಹೊರಬರಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ವಯೋವೃದ್ಧರು, ಮಕ್ಕಳು ಭಯಭೀತರಾಗಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಬೆಳೆ ಹಾನಿಗೆ ಪರಿಹಾರ ನೀಡಬೇಕೆಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ, ಕಾಡಾನೆಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಮುಂದಾಗಲಿದೆ ಎಂದು ಭರವಸೆ ನೀಡಿ, ಕಾಡು ಪ್ರಾಣಿಗಳಿಂದ ಉಂಟಾದ ಬೆಳೆ ಹಾನಿಗೆ ಇಲಾಖೆವತಿಯಿಂದ ಪರಿಹಾರ ಸಹ ನೀಡಲಾಗುತ್ತಿದೆ ಎಂದರು.
ಸಾಮಾಜಿಕ ಹೋರಾಟಗಾರ, ಉಕ್ಕುಂದ ಗ್ರಾಮದ ಶಿವಕುಮಾರ್, ಬಿ.ಎ ಕುಮಾರ್, ಕಾಶಿ, ಚಂದ್ರಶೇಖರ್, ರಘು, ಶಿವಯ್ಯ, ಕೃಷ್ಣಪ್ಪ, ಚಿನ್ನರಾಜು ಮತ್ತು ನಟರಾಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment