ಭದ್ರಾವತಿ ವಿಧಾನಸಭಾ ಕ್ಷೇತ್ರ ಮತದಾರರಪಟ್ಟಿ ಪರಿಷ್ಕರಣೆ ಸಂಬಂಧ ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದಲ್ಲಿ ಸಭೆ ನಡೆಯಿತು.
ಭದ್ರಾವತಿ, ಡಿ. ೨ : ಮತದಾರರ ನೋಂದಣಾಧಿಕಾರಿಗಳಾಗಿರುವ ಉಪವಿಭಾಗಾಧಿಕಾರಿಯವರ ನಿರ್ದೇಶನದ ಮೇರೆಗೆ ೧೧೨-ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಡಿ.೩ ಮತ್ತು ೪ ಎರಡು ದಿನ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಮನೆ ಮನೆ ಸಮೀಕ್ಷೆ ಕೈಗೊಳ್ಳಲು ತಹಸೀಲ್ದಾರ್ ಆರ್. ಪ್ರದೀಪ್ ಸೂಚಿಸಿದರು.
ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಸೀಲ್ದಾರ್‌ರವರು, ಡಿ.೨ರಂದು ಮತದಾರರ ನೋಂದಣಾಧಿಕಾರಿಗಳಾಗಿರುವ ಉಪವಿಭಾಗಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ತೀರ್ಮಾನದಂತೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ದಿನ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಮನೆ ಮನೆ ಸಮೀಕ್ಷೆ ನಡೆಸಬೇಕೆಂದರು. ಈಗಾಗಲೇ ಚುನಾವಣಾ ಆಯೋಗ ವೇಳಾಪಟ್ಟಿ ನಿಗದಿಪಡಿಸಿದಂತೆ ಮತದಾರರಪಟ್ಟಿ ಪರಿಷ್ಕರಣೆ ಕಾರ್ಯಗಳು ಪ್ರಗತಿಯಲ್ಲಿವೆ ಎಂದರು.
ಪರಿಷ್ಕರಣೆ ಕಾರ್ಯದಲ್ಲಿ ನಿರೀಕ್ಷೆಯಂತೆ ಹೆಚ್ಚಿನ ಸಾಧನೆ ಕಂಡು ಬಂದಿಲ್ಲ. ಎಲ್ಲಾ ಮತಗಟ್ಟೆಗಳಲ್ಲೂ ಶೇ.೧೦೦ರಷ್ಟು ಪ್ರಗತಿ ಸಾಧಿಸಬೇಕು. ಈ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕು. ಯಾವುದೇ ಕಾರಣಕ್ಕೂ ಸಮಯ ವ್ಯರ್ಥವಾಗಬಾರದು. ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.
ನಗರಸಭೆ ಪೌರಾಯುಕ್ತ ಮನುಕುಮಾರ್ ಮಾತನಾಡಿ, ಪರಿಷ್ಕರಣೆ ಕಾರ್ಯ ವಿಳಂಭವಾಗಿ ಸಾಗುತ್ತಿರುವುದು ನಿರಾಸಕ್ತಿಯನ್ನು ತೋರಿಸುತ್ತಿದೆ. ಕಳಪೆ ಸಾಧನೆ ಕಂಡು ಬಂದಿರುವ ಮತಗಟ್ಟೆಗಳಿಗೆ ಹೆಚ್ಚಿನ ಗಮನ ಹರಿಸಬೇಕು. ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಪರಿಷ್ಕರಣೆ ಕಾರ್ಯವನ್ನು ಖುದ್ದಾಗಿ ಪರಿಶೀಲಿಸಲು ಉಪವಿಭಾಗಾಧಿಕಾರಿಗಳು ಆಗಮಿಸುತ್ತಿದ್ದಾರೆ ಎಂದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಉಂಟಾಗುತ್ತಿರುವ ಗೊಂದಲಗಳನ್ನು ಸಭೆಯಲ್ಲಿ ಮತಗಟ್ಟೆ ಅಧಿಕಾರಿಗಳು ಚರ್ಚಿಸುವ ಮೂಲಕ ಬಗೆಹರಿಸಿಕೊಂಡರು. ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಧಿಕಾರಿ ಸುರೇಶ್‌ನಾಯ್ಕ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಕಾಂತರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮತಗಟ್ಟೆ ಅಧಿಕಾರಿಗಳು, ತಾಲೂಕು ಕಛೇರಿ ಹಾಗು ನಗರಸಭೆ ಸಭೆ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.
No comments:
Post a Comment