ಹೋರಾಟಗಾರ, ಭದ್ರಾವತಿ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜುರವರನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜ. ೨೫: ಹೋರಾಟಗಾರ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜುರವರನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸಮಿತಿ ಅಧ್ಯಕ್ಷ ಬಿ.ಎನ್ ರಾಜುರವರು ತಾಲೂಕಿನ ಸಾವಿರಾರು ಜನರ ಪಿಂಚಣಿ ಹಾಗು ಪಡಿತರ ಚೀಟಿ ರದ್ದು ಮಾಡಿರುವ ಹಿನ್ನಲೆಯಲ್ಲಿ ತಾಲೂಕು ಕಛೇರಿ ಅಧಿಕಾರಿಗಳೊಂದಿಗೆ ಚರ್ಚಿಸಲು ಜ.೧೩ರಂದು ಬೆಳಿಗ್ಗೆ ೧೧ ಗಂಟೆ ಸಮಯದಲ್ಲಿ ತೆರಳಿದ್ದು, ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವಿನಾಕಾರಣ ಗೈರು ಹಾಜರಿ ಇರುವುದನ್ನು ಕಂಡು ಅಲ್ಲಿನ ಸಿಬ್ಬಂದಿಗಳನ್ನು ಪ್ರಶ್ನಿಸಿದ್ದಾರೆ. ನ್ಯಾಯ ಕೇಳಲು ಹೋದ ಇವರ ಮೇಲೆಯೇ ದುರುದ್ದೇಶ ಪೂರ್ವಕವಾಗಿ ಪೊಲೀಸ್ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಲಾಗಿದೆ.
ಬಿ.ಎನ್ ರಾಜುರವರು ಕಳೆದ ೩೦ ವರ್ಷಗಳಿಂದ ಬಡವರು, ಶೋಷಿತರು, ಅನ್ಯಾಯದ ಪರವಾಗಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ. ಇವರ ಹೋರಾಟದಲ್ಲಿ ಯಾವುದೇ ರಾಜೀ ಇಲ್ಲವಾಗಿದೆ. ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ರಾಜುರವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವ ಹಿನ್ನಲೆಯಲ್ಲಿ ತಕ್ಷಣ ಈ ಸಂಬಂಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ನ್ಯಾಯಾಂಗ ಬಂಧನದಲ್ಲಿರುವ ರಾಜುರವರನ್ನು ತಕ್ಷಣ ಬಿಡುಗಡೆಗಡೆಗೊಳಿಸಬೇಕೆಂದು ಆಗ್ರಹಿಸಿದರು.
ಪ್ರಮುಖರಾದ ಸಮಿತಿಯ ಅಕ್ರಮ್‌ಖಾನ್, ಅರುಣ್‌ಕುಮಾರ್, ಎಎಪಿ ಎಚ್. ರವಿಕುಮಾರ್, ರವಿಕುಮಾರ್, ಬಸವರಾಜ, ಮಾರುತಿ, ಚಿನ್ನಪ್ಪ ಶ್ರೀನಿವಾಸ್, ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಆಮ್ ಆದ್ಮಿ ಪಾರ್ಟಿ ನೇತೃತ್ವದಲ್ಲಿ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.