Wednesday, March 2, 2022

ಭದ್ರಾವತಿ ವಿವಿಧೆಡೆ ಈಶ್ವರ ದೇವಾಲಯಗಳಲ್ಲಿ ವಿಜೃಂಭಣೆಯಿಂದ ಜರುಗಿದ ಮಹಾಶಿವರಾತ್ರಿ

ಭದ್ರಾವತಿ ಹೊಸಮನೆ ಎನ್.ಎಂ.ಸಿ ಎಡಭಾಗದಲ್ಲಿರುವ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು.
    ಭದ್ರಾವತಿ, ಮಾ. ೨: ನಗರದ ವಿವಿಧೆಡೆ ಈಶ್ವರ ದೇವಾಲಯಗಳಲ್ಲಿ ಮಹಾಶಿವರಾತ್ರಿ ಹಬ್ಬ ಈ ಬಾರಿ ವಿಜೃಂಭಣೆಯಿಂದ ಆಚರಿಸಲಾಯಿತು. ಮಹಾಮಾರಿ ಕೋವಿಡ್ ಹಿನ್ನಲೆಯಲ್ಲಿ ಕಳೆದ ೩ ವರ್ಷಗಳಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡ ಹಾಗು ಮಧ್ಯಮ ವರ್ಗದ ಶ್ರೀಸಾಮಾನ್ಯರು ಸಹ ಹಬ್ಬದ ಆಚರಣೆಯಲ್ಲಿ ತೊಡಗುವ ಮೂಲಕ ಸಂಭ್ರಮಿಸಿದರು. 
    ಬಹುತೇಕ ದೇವಾಲಯಗಳಲ್ಲಿ ಭಕ್ತ ಸಮೂಹವೇ ಕಂಡು ಬಂದಿತು.  ದೇವಾಲಯಗಳು ಹಸಿರು ತೋರುಣಗಳಿಂದ, ವಿದ್ಯುತ್ ಹಾಗು ಪುಷ್ಪಾಂಲಕಾರಗಳಿಂದ ಆಕರ್ಷಕವಾಗಿ ಕಂಗೊಳಿಸಿದವು. ಹಗಲು-ರಾತ್ರಿ ಬಿಡುವಿಲ್ಲದೆ ಧಾರ್ಮಿಕ ಆಚರಣೆಗಳು ಜರುಗಿದವು. ಇದಕ್ಕೆ ಪೂರಕವೆಂಬಂತೆ ಭಕ್ತರು ಸಹ ಪಾಲ್ಗೊಂಡು ಭಕ್ತಿ ಮೆರೆದರು.
    ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ :
ಹೊಸಮನೆ ಎನ್.ಎಂ.ಸಿ ಎಡಭಾಗದಲ್ಲಿರುವ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಗೆ ರುದ್ರಾಭಿಷೇಕ, ರುದ್ರಹೋಮ, ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಅಲ್ಲದೆ ಕೇಶವಪುರ ಬಡಾವಣೆಯ ಶ್ರೀ ಕೃಷ್ಣ ಸತ್ಸಂಗ ತಂದದಿಮದ ಭಜನೆ, ಹರಿಪ್ರಿಯ ಭಜನ ಮಂಡಳಿಯಿಂದ ಭಜನೆ, ಮನೋಜ್ ಕಿಶನ್ ನೃತ್ಯ ತಂಡದಿಂದ ನೃತ್ಯ ಹಾಗು ಧರ್ಮಶಾಸ್ರ್ತ ಭಜನ ಮಂಡಳಿಯ ಸುಬ್ಬಣ್ಣ ಮತ್ತು ತಂಡದಿಂದ ಭಜನೆ ಹಾಗು ತೀರ್ಥಹಳ್ಳಿ ಶ್ರೀ ಕ್ಷೇತ್ರ ಅಲಸೆಯ ಶ್ರೀ ಚಂಡಿಕೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿಯಿಂದ ಯಕ್ಷಗಾನ ಕಾರ್ಯಕ್ರಮಗಳು ಜರುಗಿದವು. ಶ್ರೀ ಭದ್ರಾ ಶಿವಾಲಯ ಸಮಿತಿ ಅಧ್ಯಕ್ಷ ಜಿ. ಆನಂದಕುಮಾರ್ ನೇತೃತ್ವ ವಹಿಸಿದ್ದರು. ಸಮಿತಿ ಪದಾಧಿಕಾರಿಗಳು ಹಾಗು ಸದಸ್ಯರು, ಸ್ಥಳೀಯ ಮುಖಂಡರು, ಗಣ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ನಗರದ ವಿವಿಧ ಭಾಗಗಳಿಂದ ಭಕ್ತಾಧಿಗಳು ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾದರು.


ಭದ್ರಾವತಿ ಡೈರಿ ಸಮೀಪದ ಜೇಡಿಕಟ್ಟೆಯಲ್ಲಿರುವ ಮರುಳಸಿದ್ದೇಶ್ವರಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ಬಿಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.

    ಮರುಳಸಿದ್ದೇಶ್ವರಸ್ವಾಮಿ ದೇವಸ್ಥಾನ :
ಡೈರಿ ಸಮೀಪದ ಜೇಡಿಕಟ್ಟೆಯಲ್ಲಿರುವ ಮರುಳಸಿದ್ದೇಶ್ವರಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ಬಿಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಇಷ್ಟಲಿಂಗ ಪೂಜೆ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗು ಅನ್ನ ದಾಸೋಹ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ದೇವಸ್ಥಾನದ ಮುಖ್ಯ ಅರ್ಚಕ ತಿಪ್ಪೇಸ್ವಾಮಿ, ಟಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಕಾರ್ಯದರ್ಶಿ ವಾಗೀಶ್, ಶಿವಣ್ಣ, ಪ್ರಕಾಶ್, ಧರ್ಮರಾಜ್, ಮೇಘರಾಜ್ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಗಣ್ಯರು ಉಪಸ್ಥಿತರಿದ್ದರು. ಜೇಡಿಕಟ್ಟೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಿಂದ ಭಕ್ತರು ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾದರು.
    ಕುಟುಂಬ ಸದಸ್ಯರೊಂದಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಶಿವರಾತ್ರಿ ಆಚರಣೆ :
    ಮೇಕೆದಾಟು ಪಾದಯಾತ್ರೆ ಹಿನ್ನಲೆಯಲ್ಲಿ ಕಳೆದ ಸುಮಾರು ಒಂದು ವಾರದಿಂದ ಕ್ಷೇತ್ರದಿಂದ ದೂರ ಉಳಿದಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ಮಹಾಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ನಗರಕ್ಕೆ ಆಗಮಿಸಿ ಕುಟುಂಬ ಸದಸ್ಯರೊಂದಿಗೆ ಹಬ್ಬದ ಸಂಭ್ರಮದಲ್ಲಿ ತೊಡಗಿದರು.
    ನಗರದ ಭದ್ರಾ ನದಿಯಲ್ಲಿರುವ ಶ್ರೀ ಸಂಗಮೇಶ್ವರ ಸ್ವಾಮಿ ದೇವಸ್ಥಾನ, ಲೋಯರ್ ಹುತ್ತಾ ಬಿ.ಎಚ್ ರಸ್ತೆಯಲ್ಲಿರುವ ಭದ್ರೇಶ್ವರ ದೇವಸ್ಥಾನ, ಅಪ್ಪರ್‌ಹುತ್ತಾದಲ್ಲಿರುವ ಶ್ರೀ ನಂದಿ, ಈಶ್ವರ, ಸಂಕಷ್ಟಹರ ಗಣಪತಿ ದೇವಸ್ಥಾನ ಸೇರಿದಂತೆ ವಿವಿಧ ಈಶ್ವರ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಇವರೊಂದಿಗೆ ಪುತ್ರ ಬಿ.ಎಸ್ ಗಣೇಶ್ ಹಾಗು ಬೆಂಬಲಿಗರು ಪಾಲ್ಗೊಂಡಿದ್ದರು.
    ನಗರದ ನ್ಯೂಟೌನ್ ಶಿವ ಸಾಯಿ ಕೃಪಾ ಧಾಮ, ಕಾಗದನಗರದ ಈಶ್ವರ ದೇವಸ್ಥಾನ, ಜನ್ನಾಪುರ ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ಕೆ.ಸಿ ಬಡಾವಣೆ ಹಾಲಪ್ಪ ಶೆಡ್‌ನಲ್ಲಿರುವ ನಾಗ ಬಣ, ವೀರಾಪುರ ಹುಲಿಬಂಡೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಮಹಾಶಿವರಾತ್ರಿ ವಿಜೃಂಭಣೆಯಿಂದ ಜರುಗಿತು.  


ಮೇಕೆದಾಟು ಪಾದಯಾತ್ರೆ ಹಿನ್ನಲೆಯಲ್ಲಿ ಕಳೆದ ಸುಮಾರು ಒಂದು ವಾರದಿಂದ ಕ್ಷೇತ್ರದಿಂದ ದೂರ ಉಳಿದಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ಮಹಾಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ನಗರಕ್ಕೆ ಆಗಮಿಸಿ ಕುಟುಂಬ ಸದಸ್ಯರೊಂದಿಗೆ ಹಬ್ಬದ ಸಂಭ್ರಮದಲ್ಲಿ ತೊಡಗಿದರು.

ಕುವೆಂಪು ವಿ.ವಿ ಪರೀಕ್ಷಾ ಅಕ್ರಮ : ಕುಲಸಚಿವ ಎತ್ತಂಗಡಿ

ನೂತನ ಕುಲಸಚಿವರಾಗಿ ಮಂಗಳೂರಿನ ಪ್ರೊ. ಎಸ್.ಕೆ ನವೀನ್‌ಕುಮಾರ್ ನೇಮಕ

ಕುವೆಂಪು ವಿಶ್ವವಿದ್ಯಾನಿಲಯ
    ಭದ್ರಾವತಿ, ಮಾ. ೨: ಕುವೆಂಪು ವಿಶ್ವ ವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯದ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಕೊನೆಗೂ ಸರ್ಕಾರ ಎಚ್ಚೆತ್ತುಕೊಂಡಿದ್ದು, ಈ ವಿಭಾಗದ ಕುಲಸಚಿವ(ಮೌಲ್ಯಮಾಪನ)ರನ್ನು ಎತ್ತಂಗಡಿ ಮಾಡಿದೆ.
    ದೂರ ಶಿಕ್ಷಣ ನಿರ್ದೇಶನಾಲಯದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಫಲಿತಾಂಶ ಪ್ರಕಟಿಸಿರುವ ಸಂಬಂಧ ಸಿಂಡಿಕೇಟ್ ಹಾಗು ವಿದ್ಯಾವಿಷಯಕ ಪರಿಷತ್ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಸಬಂಧ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡಿದ್ದರು.  ಈ ನಡುವೆ ಪರೀಕ್ಷೆ ನಡೆಸಲು ಅವಕಾಶವಿದ್ದರೂ ಸಹ ವಿನಾಕಾರಣ ಪರೀಕ್ಷೆ ನಡೆಸದೆ ಫಲಿತಾಂಶ ಪ್ರಕಟಿಸಿರುವ ಹಿಂದೆ ಸಾಕಷ್ಟು ಅಕ್ರಮ, ಅವ್ಯವಹಾರಗಳು ನಡೆದಿರುವ ಬಗ್ಗೆ ಆರೋಪಿಸಿ ವಿಶ್ವ ವಿದ್ಯಾಲಯದ ಕುಲಾಧಿಪತಿಗಳಾದ ರಾಜ್ಯಪಾಲರಿಗೆ, ಮುಖ್ಯಮಂತ್ರಿಗಳಿಗೆ ಹಾಗು ಉನ್ನತ ಶಿಕ್ಷಣ ಸಚಿವರಿಗೆ ದೂರು ಸಲ್ಲಿಸಿದ್ದರು.
    ಈ ಹಿನ್ನಲೆಯಲ್ಲಿ ಬುಧವಾರ ಸರ್ಕಾರ ನಿರ್ಣಯ ಕೈಗೊಂಡು ದೂರ ಶಿಕ್ಷಣ ನಿರ್ದೇಶನಾಲಯದ ಕುಲಸಚಿವರು(ಮೌಲ್ಯಮಾಪನ) ಹುದ್ದೆಗೆ ಮಂಗಳೂರು ವಿಶ್ವ ವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಅಧ್ಯಯನ ವಿಭಾಗದ ಪ್ರೊ. ಎಸ್.ಕೆ ನವೀನ್‌ಕುಮಾರ್‌ರವರನ್ನು ನೇಮಕಗೊಳಿಸಿದೆ. ಅಲ್ಲದೆ ಪ್ರಸ್ತುತ ಈ ಹುದ್ದೆಯಲ್ಲಿರುವ ಪ್ರೊ. ಸಿ.ಎಂ ತ್ಯಾಗರಾಜರವರನ್ನು ಪುನಃ ಅವರ ಹಿಂದಿನ ಹುದ್ದೆಯಾದ ರಾಣಿಚೆನ್ನಮ್ಮ ವಿಶ್ವ ವಿದ್ಯಾಲಯದ ವ್ಯವಹಾರ ನಿರ್ವಹಣೆ ವಿಭಾಗಕ್ಕೆ ವರ್ಗಾಹಿಸಿ ಆದೇಶಿಸಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಶೀತಲ್ ಎಂ. ಹಿರೇಮಠ ಸರ್ಕಾರ ಕೈಗೊಂಡಿರುವ ನಡವಳಿಗಳ ಪ್ರತಿಯಲ್ಲಿ ತಿಳಿಸಿದ್ದಾರೆ.
    ನಿರ್ದೇಶಕರಾಗಿ ಡಾ.ಬಿ.ಎಸ್ ಬಿರಾದಾರ ಮುಂದುವರಿಕೆ:
ದೂರ ಶಿಕ್ಷಣ ನಿರ್ದೇಶನಾಲಯದಿಂದ ವಿಶ್ವ ವಿದ್ಯಾಲಯಕ್ಕೆ ಬರಬೇಕಾದ ಕೋಟ್ಯಾಂತರ ರು. ಬಾಕಿ ವಸೂಲಿ ಮಾಡದೆ ನಿರ್ಲಕ್ಷ್ಯ ವಹಿಸಿರುವ ಸಂಬಂಧ ಹಾಗು ಇನ್ನಿತರ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಸಿಂಡಿಕೇಟ್ ಹಾಗು ವಿದ್ಯಾ ವಿಷಯಕ ಪರಿಷತ್ ಸದಸ್ಯರಿಂದ ಆರೋಪಗಳು ಕೇಳಿ ಬರುತ್ತಿದ್ದವು. ಅಲ್ಲದೆ ಈ ಸಂಬಂಧ ಸೂಕ್ತ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಈ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯದ ಕುಲಸಚಿವರು ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಎಸ್.ಎನ್ ಯೋಗೀಶ್‌ರವರನ್ನು ಬಿಡುಗೊಳಿಸಿ ಸ್ನಾತಕೋತ್ತರ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಬಿ.ಎಸ್ ಬಿರಾದಾರ ಅವರನ್ನು ನೇಮಕಗೊಳಿಸಿದ್ದರು. ಆದರೆ ಕುಲಸಚಿವರ ಆದೇಶವನ್ನು ತಡೆಯಲಾಗಿತ್ತು.
    ಈ ಹಿನ್ನಲೆಯಲ್ಲಿ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ ಸದಸ್ಯರು ಈ ಸಂಬಂಧ ಸಹ ವಿಶ್ವ ವಿದ್ಯಾಲಯದ ಕುಲಾಧಿಪತಿಗಳಾದ ರಾಜ್ಯಪಾಲರಿಗೆ, ಮುಖ್ಯಮಂತ್ರಿಗಳಿಗೆ ಹಾಗು ಉನ್ನತ ಶಿಕ್ಷಣ ಸಚಿವರಿಗೆ ದೂರು ಸಲ್ಲಿಸಿದ್ದರು.
    ಸರ್ಕಾರ ಬುಧವಾರ ಈ ದೂರಿನ ಬಗ್ಗೆ ಸಹ ನಿರ್ಣಯ ಕೈಗೊಂಡಿದ್ದು, ಕುಲಸಚಿವರ ಆದೇಶವನ್ನು ಎತ್ತಿ ಹಿಡಿದಿದೆ. ಡಾ. ಬಿ.ಎಸ್ ಬಿರಾದಾರ ಅವರನ್ನು ಮುಂದುವರೆಸುವಂತೆ ನಿರ್ದೇಶಿಸಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಶೀತಲ್ ಎಂ. ಹಿರೇಮಠ ಕುಲಸಚಿವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮಾದಪ್ಪನ ಸನ್ನಿಧಿಗೆ ಹರಿದ ಬಂದ ಭಕ್ತ ಸಮೂಹ : ವೈಭವದ ಶಿವರಾತ್ರಿ ಆಚರಣೆ

ಬೆಳಿಗ್ಗೆಯಿಂದ ಸಂಜೆವರೆಗೂ ಸಾವಿರಾರು ಭಕ್ತರಿಗೆ ಅನ್ನದಾಸೋಹ

ಭದ್ರಾವತಿ ನಗರಸಭೆ ವಾರ್ಡ್ ೩೧ರ ಜಿಂಕ್‌ಲೈನ್ ವ್ಯಾಪ್ತಿಯ ವೀರಾಪುರ ರಸ್ತೆಯಲ್ಲಿರುವ ಶ್ರೀ ಮಲೆ ಮಾದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ ಹಿನ್ನಲೆಯಲ್ಲಿ ಬುಧವಾರ ಸಹ ಸ್ವಾಮಿಯ ದರ್ಶನ ಪಡೆಯಲು ಸಾಲುಗಟ್ಟಿ ನಿಂತಿರುವ ಭಕ್ತರು.
    ಭದ್ರಾವತಿ, ಫೆ. ೨: ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ವಾರ್ಡ್ ೩೧ರ ಜಿಂಕ್‌ಲೈನ್ ವ್ಯಾಪ್ತಿಯ ವೀರಾಪುರ ರಸ್ತೆಯಲ್ಲಿರುವ ಶ್ರೀ ಮಲೆ ಮಾದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ ವಿಜೃಂಭಣೆಯಿಂದ ಜರುಗಿತು.
    ಶ್ರೀ ಶಿವಶಂಕರ ಗುರೂಜಿಯವರ ದಿವ್ಯ ಸಾನಿಧ್ಯದಲ್ಲಿ  ಗಂಗಾ ಪೂಜೆ, ರುದ್ರಾಭಿಷೇಕ, ಬಿಲ್ವಾರ್ಚನೆ, ಹೋಮ-ಹವನ, ಹಾಲರವಿ ಉತ್ಸವ, ಕೆಂಡೋತ್ಸವ, ರಾಜಬೀದಿ ಉತ್ಸವ, ಜಾಗರಣೆ, ಭಜನೆ ಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗು ಅನ್ನದಾಸೋಹ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ಎರಡು ದಿನಗಳ ಕಾಲ ಜರುಗಿದ ಧಾರ್ಮಿಕ ಆಚರಣೆಗಳಲ್ಲಿ ನಗರ ಹಾಗು ಗ್ರಾಮಾಂತರ ಪ್ರದೇಶಗಳಿಂದ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು. ನಗರದ ಬೈಪಾಸ್ ರಸ್ತೆಯ ಸಮೀಪದಲ್ಲಿ ಅಡಕೆ, ತೆಂಗು ತೋಟ ಹಾಗು ಕಬ್ಬು, ಭತ್ತ ಜಮೀನುಗಳ ನಡುವೆ ಸುಂದರ ಪರಿಸರದಲ್ಲಿ ಈ ದೇವಸ್ಥಾನ ನೆಲೆ ನಿಂತಿದೆ. ಹಬ್ಬ ಹರಿದಿನಗಳಂದು ಸಾವಿರಾರು ಭಕ್ತಾಧಿಗಳು ಈ ದೇವಸ್ಥಾನಕ್ಕೆ ಬಂದು ಹೋಗುತ್ತಿದ್ದಾರೆ. ಅಲ್ಲದೆ ಸಣ್ಣ ಪ್ರಮಾಣದಲ್ಲಿ ಮದುವೆ ಸೇರಿದಂತೆ ಇನ್ನಿತರ ಶುಭ ಸಮಾರಂಭಗಳು ಸಹ ಜರುಗುತ್ತಿವೆ.
    ಮೈಸೂರು ಚಾಮರಾಜನಗರದ ಮಲೆ ಮಹಾದೇಶ್ವರ ಬೆಟ್ಟದಲ್ಲಿರುವ ದೇವಸ್ಥಾನಕ್ಕೆ ಹೋಗುವ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಯೇ ಬಂದು ಹೋಗುವುದು ವಾಡಿಕೆಯಾಗಿದೆ. ಈ ಹಿನ್ನಲೆಯಲ್ಲಿ ಈ ದೇವಸ್ಥಾನಕ್ಕೆ ಇನ್ನೂ ಹೆಚ್ಚಿನ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಅವಶ್ಯಕವಾಗಿದೆ ಎಂಬುದು ಭಕ್ತರ ಬೇಡಿಕೆಯಾಗಿದೆ.


ನಗರಸಭೆ ವಾರ್ಡ್ ೩೧ರ ಜಿಂಕ್‌ಲೈನ್ ವ್ಯಾಪ್ತಿಯ ವೀರಾಪುರ ರಸ್ತೆಯಲ್ಲಿರುವ ಶ್ರೀ ಮಲೆ ಮಾದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ ಹಿನ್ನಲೆಯಲ್ಲಿ ಬುಧವಾರ ಬೆಳಿಗ್ಗೆಯಿಂದ ಸಂಜೆವರೆಗೂ ಸಾವಿರಾರು ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿದೆ.