ಭದ್ರಾವತಿಯಲ್ಲಿ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ್ ರಾಮ್, ಕೈವಾರ ತಾತಯ್ಯ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಜನ್ಮ ದಿನಾಚರಣೆ ಅಂಗವಾಗಿ ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಭದ್ರಾವತಿ, ಮಾ. ೨೬: ಹಳೇನಗರದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ(ಬಿಆರ್‌ಸಿ) ಸಮೀಪ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನ ಕಾಮಗಾರಿ ತಕ್ಷಣ ಪೂರ್ಣಗೊಳಿಸುವಂತೆ ದಲಿತ ಸಂಘಟನೆಗಳು ತಾಲೂಕು ಆಡಳಿತಕ್ಕೆ ಒತ್ತಾಯಿಸಿವೆ.
ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ್ ರಾಮ್, ಕೈವಾರ ತಾತಯ್ಯ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಜನ್ಮ ದಿನಾಚರಣೆ ಅಂಗವಾಗಿ ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ದಲಿತ ಸಂಘಟನೆಗಳ ಪ್ರಮುಖರು ಮಾತನಾಡಿ, ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ಕಾಮಗಾರಿಗೆ ಅಗತ್ಯವಿರುವ ೧.೫ ಕೋಟಿ ರು. ಹೊಂದಿಸಿಕೊಂಡು ತಕ್ಷಣ ಮುಕ್ತಾಯಗೊಳಿಸುವುದು. ಜೊತೆಗೆ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ನೂತನ ಅಂಬೇಡ್ಕರ್ ಪ್ರತಿಮೆ ತಕ್ಷಣ ಪ್ರತಿಷ್ಠಾಪಿಸಬೇಕೆಂದು ಆಗ್ರಹಿಸಿದರು.
ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಕೆ. ಪರಮೇಶ್, ಸದಸ್ಯ ಬಿ.ಕೆ ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್, ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ, ದಲಿತ ಸಂಘಟನೆಗಳ ಮುಖಂಡರಾದ ಶಿವಬಸಪ್ಪ, ಕೆ. ರಂಗನಾಥ್, ಈಶ್ವರಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.