Monday, April 11, 2022

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯ : ಕೊನೆಯ ದಿನ ೧೩೨ ವಿದ್ಯಾರ್ಥಿಗಳು ಗೈರು


ಎ.ಕೆ ನಾಗೇಂದ್ರಪ್ಪ
    ಭದ್ರಾವತಿ, ಏ. ೧೧: ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸೋಮವಾರ ಮುಕ್ತಾಯಗೊಂಡಿದ್ದು, ಯಶಸ್ವಿಯಾಗಿ ನಡೆಯಲು ಸಹಕರಿಸಿದ ಎಲ್ಲರಿಗೂ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.
    ಕೊನೆಯ ದಿನ ೪೫೧೫ ವಿದ್ಯಾರ್ಥಿಗಳ ಪೈಕಿ ೪೩೮೩ ವಿದ್ಯಾರ್ಥಿಗಳು ೧೩೨ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಈ ಪೈಕಿ ೪ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿನಿಯರಾಗಿದ್ದಾರೆ.  ರಾಜ್ಯ ಉಚ್ಛ ನ್ಯಾಯಾಲಯದ ತೀರ್ಪಿನ ನಂತರವೂ ಉಂಟಾದ ಹಿಜಾಬ್ ಸಮಸ್ಯೆ ನಡೆವೆಯೂ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ನಾಗೇಂದ್ರಪ್ಪ  ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕಡಿಮೆ ಅವಧಿಯಲ್ಲಿ ಹೆಚ್ಚಿನ ಶ್ರಮವಹಿಸಿ ಮೊದಲ ಬಾರಿಗೆ ತಾಲೂಕಿನಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಸಹಕರಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕಡಿವಾಣ

ದಿನಕ್ಕೆ ೨೦ ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ


ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದೀಗ ಬೀದಿ ನಾಯಿಗಳ ನಿಯಂತ್ರಣಕ್ಕೆ ನಗರಸಭೆ ಆಡಳಿತ ಮುಂದಾಗಿದೆ. ಕಳೆದ ೩ ದಿನಗಳಿಂದ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಭದ್ರಾವತಿ, ಏ. ೧೧: ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದೀಗ ಬೀದಿ ನಾಯಿಗಳ ನಿಯಂತ್ರಣಕ್ಕೆ ನಗರಸಭೆ ಆಡಳಿತ ಮುಂದಾಗಿದೆ. ಕಳೆದ ೩ ದಿನಗಳಿಂದ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ.
    ನಗರಸಭೆ  ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇತ್ತೀಚೆಗೆ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ಸಂಬಂಧ ಸದಸ್ಯರು ನಗರಸಭೆ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
    ಬಹುತೇಕ ವಾರ್ಡ್‌ಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೆಲವು ವಾರ್ಡ್‌ಗಳಲ್ಲಿ ಬೀದಿ ನಾಯಿಗಳು ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿರುವ ಘಟನೆಗಳು ನಡೆದಿವೆ. ಈ ಹಿನ್ನಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಈ ಹಿನ್ನಲೆಯಲ್ಲಿ ಪರಿಸರ ಅಭಿಯಂತರ ಪ್ರಭಾಕರ್‌ರವರು ಬೀದಿ ನಾಯಿಗಳಿಗೆ ಸಂತಾನೋತ್ಪತ್ತಿಯಾಗದಂತೆ ಶಸ್ತ್ರ ಚಿಕಿತ್ಸೆ ನಡೆಸುವ ಹಾಗು ಆಂಟಿರೇಬಿಸ್ ಚುಚ್ಚು ಮದ್ದು ನೀಡುವ ಕಾರ್ಯ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
    ದಿನಕ್ಕೆ ೨೦ ನಾಯಿಗಳಿಗೆ ಶಸ್ತ್ರ ಚಿಕಿತ್ಸೆ :
    ಮಹಾರಾಷ್ಟ್ರದ ಅನಿಮಲ್ ಪ್ರೊಟೆಕ್ಷನ್ ಅಂಡ್ ವೆಲೇರ್ ಸೊಸೈಟಿ' ಪೂರ್ಣಾ ಸಂಸ್ಥೆ ವತಿಯಿಂದ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಮತ್ತು ಆಂಟಿರೇಬಿಸ್ ಚುಚ್ಚು ಮದ್ದು ನೀಡುವ ಕಾರ್ಯ ನಡೆಯುತ್ತಿದೆ. ಹೊಸಮನೆ ಸಂತಮೈದಾನದ ಪಂಪ್‌ಹೌಸ್ ಪಕ್ಕದಲ್ಲಿರುವ ನಗರಸಭೆ ಕಟ್ಟಡದಲ್ಲಿ ಶಸ್ತ್ರ ಚಿಕಿತ್ಸೆ ನಡೆಯುತ್ತಿದ್ದು, ಪ್ರತಿ ದಿನ ೨೦ ನಾಯಿಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ಶಸ್ತ್ರ ಚಿಕಿತ್ಸೆಗೆ ಒಳಗಾದ ನಾಯಿಗಳನ್ನು ೩ ದಿನಗಳವರೆಗೆ ಆರೈಕೆ ಮಾಡಿ ಶಸ್ತ್ರ ಚಿಕಿತ್ಸೆ ನಡೆಸಿರುವ ಬಗ್ಗೆ ಗುರುತು ಮಾಡಿ ನಂತರ ಅವುಗಳ ಮೂಲ ಸ್ಥಳಗಳಿಗೆ ಬಿಡಲಾಗುತ್ತದೆ. ಇದುವರೆಗೂ ೬೦ ಬೀದಿ ನಾಯಿಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಶಸ್ತ್ರ ಚಿಕಿತ್ಸೆಗೆ ತಲಾ ರು. ೧,೫೦೦ ವೆಚ್ಚವಾಗುತ್ತಿದ್ದು, ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೧,೦೦೦ ಬೀದಿನಾಯಿಗಳಿವೆ ಎಂದು ಅಂದಾಜಿಸಲಾಗಿದೆ. ಪ್ರತಿ ದಿನ ಬೀದಿನಾಯಿಗಳನ್ನು ಹಿಡಿಯುವ ಕಾರ್ಯ ನಡೆಯುತ್ತಿದೆ.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಪೌರಾಯುಕ್ತ ಕೆ. ಪರಮೇಶ್, ಪರಿಸರ ಅಭಿಯಂತರ ಪ್ರಭಾಕರ್, ಸದಸ್ಯರಾದ ಕಾಂತರಾಜ್, ಆರ್. ಶ್ರೇಯಸ್(ಚಿಟ್ಟೆ), ಜಾರ್ಜ್, ಆರ್. ಮೋಹನ್‌ಕುಮಾರ್, ಬಿ.ಎಂ ಮಂಜುನಾಥ್, ಎಸ್.ಎಸ್ ಭೈರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ರಾಜ್ಯದ ಗಮನ ಸೆಳೆದಿದ್ದ ಜೀವಂತ ನಾಯಿಗಳನ್ನು ಹೂತಿಟ್ಟ ಪ್ರಕರಣ..!

'ಕಳೆದ ವರ್ಷ ಸೆಪ್ಟಂಬರ್ ತಿಂಗಳಿನಲ್ಲಿ ತಾಲೂಕಿನ ಕಂಬದಾಳ್-ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರಾರು ನಾಯಿಗಳನ್ನು ಜೀವಂತವಾಗಿ ಹೂತಿಟ್ಟು ಅವುಗಳ ಸಾವಿಗೆ ಕಾರಣವಾಗಿದ್ದ ಘಟನೆ ನಡೆದಿತ್ತು.
ಈ ಪ್ರಕರಣ ರಾಜ್ಯದ ಗಮನೆ ಸೆಳೆದಿದ್ದು, ಈ ಘಟನೆಯನ್ನು ಪ್ರಾಣಿ ದಯಾ ಸಂಸ್ಥೆಯವರು ತೀವ್ರವಾಗಿ ಖಂಡಿಸಿದ್ದರು. ಅಲ್ಲದೆ ಈ ಸಂಬಂಧ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಘಟನೆ ಇದೀಗ ನಗರಸಭೆ ಆಡಳಿತಕ್ಕೆ ಎಚ್ಚರಿಕೆ ಗಂಟೆಯಾಗಿದ್ದು, ಬೀದಿ ನಾಯಿಗಳ ನಿಯಂತ್ರಣಕ್ಕೆ ವ್ಯವಸ್ಥಿತ ಕ್ರಮಗಳನ್ನು ಬಹಳ ಮುನ್ನಚ್ಚರಿಕೆಯಿಂದ ಕೈಗೊಳ್ಳಬೇಕಾಗಿದೆ.



ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದೀಗ ಬೀದಿ ನಾಯಿಗಳ ನಿಯಂತ್ರಣಕ್ಕೆ ನಗರಸಭೆ ಆಡಳಿತ ಮುಂದಾಗಿದೆ. ಕಳೆದ ೩ ದಿನಗಳಿಂದ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ವಿವಿಧ ವಾರ್ಡ್‌ಗಳಲ್ಲಿ ಬೀದಿ ನಾಯಿಗಳನ್ನು ಹಿಡಿದು ತಂದಿರುವುದು.

ಹಿರಿಯೂರು ಗ್ರಾಮ ಪಂಚಾಯಿತಿ ಸೂಪರ್ ಸೀಡ್ ಮಾಡಿ : ಡಿಎಸ್ಎಸ್ ಆಗ್ರಹ



 ಭದ್ರಾವತಿ : ಅವ್ಯವಹಾರ ಹಾಗೂ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ತಾಲೂಕಿನ ಹಿರಿಯೂರು ಗ್ರಾಮ ಪಂಚಾಯಿತಿಯನ್ನು ಸೂಪರ್ ಸೀಡ್ ಮಾಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಮುಂಭಾಗ  ಪ್ರತಿಭಟನೆ ನಡೆಸಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
       ಗ್ರಾಮ ಪಂಚಾಯಿತಿಯಲ್ಲಿ  ಈ ಹಿಂದೆ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುವ ಮಧುಸೂದನ್ ಅವರು ನಡೆಸಿರುವ ಭ್ರಷ್ಟಾಚಾರ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.  ತಕ್ಷಣ ತನಿಖೆ ಕೈಗೊಂಡು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
      ಕಳೆದ ಸುಮಾರು ಒಂದು ವರ್ಷದಿಂದ ಗ್ರಾಮ ಪಂಚಾಯಿತಿ ಆಡಳಿತ ವ್ಯಾಪಕ ಭ್ರಷ್ಟಾಚಾರಕ್ಕೆ ಇಳಿದಿದ್ದು, ಸಾಕಷ್ಟು ಅವ್ಯವಹಾರಗಳು ನಡೆದಿವೆ. ಈ ಕುರಿತು ಸಹ ತಮ್ಮ ಗಮನಕ್ಕೆ ತರಲಾಗಿದೆ ಆದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ತಕ್ಷಣ ಗ್ರಾಮ ಪಂಚಾಯಿತಿ ಆಡಳಿತವನ್ನು ಸೂಪರ್ ಸೀಡ್ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು. ಹೋರಾಟಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿ ಒಂದು ವೇಳೆ ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
    ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಏಳುಕೋಟಿ, ತಾಲೂಕು ಸಂಚಾಲಕ ರವಿ ನಾಯ್ಕ, ಹಿರಿಯೂರು ಹೋಬಳಿ ಘಟಕ ಸಂಚಾಲಕ ಕೆಟಿ ಪ್ರಸನ್ನ, ಗ್ರಾಮ ಘಟಕ ಸಂಚಾಲಕ ಬಿ ರವಿ, ತಾಲೂಕು ಸಂಘಟನಾ ಸಂಚಾಲಕ ಶಿವನಾಯ್ಕ, ಮಹಿಳಾ ಪ್ರಮುಖರಾದ ಜೀವ, ಶಶಿಕಲಾ, ಬೀರಣ್ಣ, ಸತ್ಯಣ್ಣ, ಕುಮಾರಣ್ಣ ಸೇರಿದಂತೆ ಗ್ರಾಮಸ್ಥರು ಇನ್ನಿತರರು ಪಾಲ್ಗೊಂಡಿದ್ದರು.