ಹಿಂದೂಪರ ಸಂಘಟನೆಗಳ ಹೋರಾಟಕ್ಕೆ ಸಂದ ಫಲ : ಬಿ.ವೈ ರಾಘವೇಂದ್ರ
![](https://blogger.googleusercontent.com/img/a/AVvXsEhoS9vQ5nHq7LQUDGpv7Tvc-L7hnfT-KaciLjAVYttUtOAdMl_FNhE6juIydwWvSSKb2qOlnHa_lkKivT2wkzmnpX6NMGzjEmyfS7MZzY5AbqUrs8ldnillop-VBJHEwcvVytVfBVWI-YVAdx0eDEmkaK0Pqx4ylxPLv_AB8CoHRgkiNcIHmUVJW-Cz-A=w400-h226-rw)
ವಿಶ್ವ ಹಿಂದೂ ಪರಿಷತ್ ವತಿಯಿಂದ ಭದ್ರಾವತಿಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ೩೮ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಹಾಗೂ ಧರ್ಮಶ್ರೀ ಸಭಾಭವನ ಮಹಡಿಗಳ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಬಿ.ವೈ ರಾಘವೇಂದ್ರ ಪಾಲ್ಗೊಂಡು ನೂತನ ದಂಪತಿಗೆ ಶುಭ ಹಾರೈಸಿದರು.
ಭದ್ರಾವತಿ, ಮೇ. ೨೯: ದೇಶದ ಇತಿಹಾಸದಲ್ಲಿ ಮರೆಯಾಗಿರುವ ಹಿಂದೂ ಧರ್ಮದ ಹಲವಾರು ಸಂಸ್ಕೃತಿ, ಪರಂಪರೆ ಇದೀಗ ಅನಾವರಣಗೊಳ್ಳುತ್ತಿದ್ದು, ವಿಶ್ವ ಹಿಂದು ಪರಿಷತ್ ಸೇರಿದಂತೆ ಹಲವಾರು ಹಿಂದೂ ಪರ ಸಂಘಟನೆಗಳ ಹೋರಾಟಕ್ಕೆ ಇದೀಗ ಫಲ ಲಭಿಸುತ್ತಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಅವರು ಭಾನುವಾರ ವಿಶ್ವ ಹಿಂದೂ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೩೮ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಹಾಗೂ ಧರ್ಮಶ್ರೀ ಸಭಾಭವನ ಮಹಡಿಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಹಿಂದಿನ ಇತಿಹಾಸ ಅರಿಯದವರು ಭವಿಷ್ಯದಲ್ಲಿ ಇತಿಹಾಸವನ್ನು ನಿರ್ಮಿಸಲಾರರು. ನಮ್ಮ ದೇಶದ, ನಾಡಿನ ಇತಿಹಾಸ, ಧರ್ಮ, ಸಂಸ್ಕೃತಿಯನ್ನು ನಾವುಗಳು ಅರಿತುಕೊಳ್ಳುವ ಜೊತೆಗೆ ನಮ್ಮ ಮುಂದಿನ ಪೀಳಿಗೆಯವರಿಗೆ ತಿಳಿಸಿಕೊಡಬೇಕು. ಈ ಕಾರ್ಯದಲ್ಲಿ ವಿಶ್ವ ಹಿಂದೂ ಪರಿಷತ್ ನಿರಂತರವಾಗಿ ತೊಡಗಿಸಿಕೊಂಡು ಬಂದಿರುವುದು ಶ್ಲಾಘನೀಯ. ವಿಶ್ವ ಹಿಂದೂ ಪರಿಷತ್ ಕಾರ್ಯ ಚಟುವಟಿಕೆಗಳಿಗೆ ಬೆನ್ನೆಲುಬಾಗಿರುವ ಹಿಂದೂ ಅಭಿಮಾನಿಗಳು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ದೇಶದಲ್ಲಿ ಮರೆಯಾಗಿರುವ ಹಿಂದೂ ಧರ್ಮದ ಹಲವಾರು ಸಂಸ್ಕೃತಿ, ಪರಂಪರೆ ಇದೀಗ ಅನಾವರಣಗೊಳ್ಳುತ್ತಿದ್ದು, ಜಮ್ಮು-ಕಾಶ್ಮೀರದ ೩೭೦ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಈ ದೇಶದಲ್ಲಿ ಹಿಂದೂ ಧರ್ಮದ ನೆಲೆಗಟ್ಟಿನಲ್ಲಿ ಬದುಕುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಎಲ್ಲಾ ಧರ್ಮದವರು ಸಹ ಒಂದೇ ಎಂಬ ಭಾವನೆಯನ್ನು ಮೂಡಿಸಲಾಗಿದೆ. ಇದೀಗ ಜಮ್ಮು-ಕಾಶ್ಮೀರದಲ್ಲಿ ಮರೆಯಾಗಿದ್ದ ಹಿಂದೂ ಧರ್ಮದ ಹಲವಾರು ಸಂಸ್ಕೃತಿ, ಪರಂಪರೆ ಅನಾವರಣಗೊಳ್ಳುತ್ತಿವೆ. ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ನಮ್ಮ ಹಿರಿಯರ ಬಹಳ ವರ್ಷಗಳ ಕನಸು ನನಸಾಗುತ್ತಿದೆ. ಈ ರೀತಿಯ ಕಾರ್ಯಗಳಲ್ಲಿ ಕೈಜೋಡಿಸಿಕೊಂಡು ಬರುತ್ತಿರುವ ವಿಶ್ವ ಹಿಂದೂ ಪರಿಷತ್ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನನ್ನು ಗುರುತಿಸಿಕೊಂಡಿದೆ ಎಂದರು.
ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಸ್ವಂತ ನಿವೇಶನ ಹೊಂದುವ ಮೂಲಕ ಸಮುದಾಯ ಭವನ ನಿರ್ಮಿಸಿರುವುದು ಹೆಮ್ಮೆಯ ವಿಚಾರವಾಗಿದೆ. ಸಮಾಜದ ಎಲ್ಲರ ಸಹಕಾರದೊಂದಿಗೆ ಭವನವನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸುವ ಕಾರ್ಯ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಭವನದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದರು.
ಶಾಸಕ ಬಿ.ಕೆ ಸಂಗಮೇಶ್ವರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ವಿಶ್ವ ಹಿಂದು ಪರಿಷತ್ ಕ್ಷೇತ್ರಿಯ ಕಾರ್ಯದರ್ಶಿ ಕೇಶವ ಹೆಗ್ಡೆ, ಪ್ರಾಂತ್ಯ ಉಪಾಧ್ಯಕ್ಷ ಹಾ ರಾಮಪ್ಪ, ಜಿಲ್ಲಾಧ್ಯಕ್ಷ ವಾಸುದೇವ ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಎಸ್. ಮುತ್ತುರಾಮಲಿಂಗಮ್, ಮಾತೃ ಮಂಡಳಿ ಅಧ್ಯಕ್ಷೆ ಯಶೋಧ ವೀರಭದ್ರಪ್ಪ, ಧರ್ಮಶ್ರೀ ಸಭಾ ಭವನ ಕಟ್ಟಡ ಸಮಿತಿ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ನಗರಸಭಾ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಪೌರಾಯುಕ್ತ ಮನುಕುಮಾರ್, ಸದಸ್ಯ ಆರ್. ಶ್ರೇಯಸ್, ದಾನಿ ವೇದಾವತಿ ಶಿವಮೂತಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಆರ್. ಪೂರ್ವಚಾರ್, ವೈದ್ಯ ಡಾ. ನರೇಂದ್ರ ಭಟ್, ಡಿ.ಆರ್ ಶಿವಕುಮಾರ್, ವೈ.ಎಸ್ ರಾಮಮೂರ್ತಿ, ಮಂಜುನಾಥ ಪವಾರ್, ಎನ್. ಎಸ್ ಮಹೇಶ್ವರಪ್ಪ, ಡಾ. ಬಿ.ಜಿ ಧನಂಜಯ, ಕೆ.ಆರ್ ಸತೀಶ್, ಮಂಜುನಾಥ್ ಕದಿರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಶಿವಮೊಗ್ಗ ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ವಿಶ್ವ ಹಿಂದೂ ಪರಿಷತ್, ಬಜರಂಗದಳ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು. ಒಂದು ಜೊತೆ ಸಾಮೂಹಿಕ ವಿವಾಹ ನಡೆಯಿತು. ವೇದಬ್ರಹ್ಮ ಕೃಷ್ಣಮೂರ್ತಿ ಸೋಮಯಾಜಿ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.
ದೇಶದಲ್ಲಿ ಹಿಂದೂ ಧರ್ಮದ ಸಂಸ್ಕೃತಿ, ಪರಂಪರೆಯನ್ನು ಮರೆಮಾಚುವ ಷಡ್ಯಂತ್ರಗಳು ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ನಾವುಗಳು ಎಚ್ಚೆತ್ತುಕೊಂಡು ನಮ್ಮ ಪೂರ್ವಿಜರ ಹಿಂದಿನ ಇತಿಹಾಸ, ಸಂಸ್ಕೃತಿ, ಪರಂಪರೆ ಅರಿತುಕೊಳ್ಳುವ ಅಗತ್ಯವಿದೆ. ಈ ಮೂಲಕ ನಮ್ಮ ಹೋರಾಟ ಮುಂದುವರೆಸಬೇಕಾದ ಅನಿರ್ವಾಯತೆ ಇದೀಗ ನಿರ್ಮಾಣಗೊಂಡಿದೆ.
- ಬಿ.ವೈ ರಾಘವೇಂದ್ರ, ಸಂಸದರು, ಶಿವಮೊಗ್ಗ