Wednesday, June 29, 2022

ಏಕಾಏಕಿ ಸರ್ಕಾರಿ ಜಮೀನಿನಲ್ಲಿ ಅಕ್ರಮ ನಿವೇಶನ, ಮನೆ

ತಹಸೀಲ್ದಾರ್ ನೇತೃತ್ವದ ತಂಡದಿಂದ ತೆರವು ಕಾರ್ಯಾಚರಣೆ

ಭದ್ರಾವತಿ ತಾಲೂಕಿನ ತಾವರೆಘಟ್ಟ ಗ್ರಾಮದ ಸರ್ವೆ ನಂ.೧೪ರ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿಕೊಳ್ಳಲಾಗಿದ್ದ ನಿವೇಶನ ಹಾಗು ಮನೆ ತೆರವುಗೊಳಿಸುವಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದ ತಂಡ ಬುಧವಾರ ಯಶಸ್ವಿಯಾಗಿದೆ.
    ಭದ್ರಾವತಿ, ಜೂ. ೨೯: ತಾಲೂಕಿನ ತಾವರೆಘಟ್ಟ ಗ್ರಾಮದ ಸರ್ವೆ ನಂ.೧೪ರ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿಕೊಳ್ಳಲಾಗಿದ್ದ ನಿವೇಶನ ಹಾಗು ಮನೆ ತೆರವುಗೊಳಿಸುವಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದ ತಂಡ ಬುಧವಾರ ಯಶಸ್ವಿಯಾಗಿದೆ.
    ಕಳೆದ ಕೆಲವು ದಿನಗಳ ಹಿಂದೆ ಸರ್ಕಾರಿ ಜಮೀನಿನಲ್ಲಿ ಏಕಾಕಿ ನಿವೇಶನ ಹಾಗು ಮನೆ ನಿರ್ಮಿಸಿಕೊಂಡಿದ್ದು, ಈ ಮಾಹಿತಿ ತಿಳಿದ ತಕ್ಷಣ ಸೂಕ್ತ ದಾಖಲೆ ಪತ್ರಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದ ತಂಡ ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ಕೈಗೊಂಡು ಜಮೀನನ್ನು ಸರ್ಕಾರದ ವಶಕ್ಕೆ ಪಡೆಯಲಾಯಿತು.


    ಕಾರ್ಯಾಚರಣೆಯಲ್ಲಿ ತಾವರಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರು, ಕಂದಾಯ ನಿರೀಕ್ಷಕ ಸತೀಶ್, ರಘು ಹಾಗು ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಕನ್ನಯ್ಯಾ ಲಾಲ್ ಟೈಲರ್ ಕಗ್ಗೊಲೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ರಾಜಸ್ತಾನದ ಉದಯಪುರದಲ್ಲಿ ನಡೆದ ಕನ್ನಯ್ಯಾ ಲಾಲ್ ಟೈಲರ್ ಕಗ್ಗೊಲೆ ಖಂಡಿಸಿ ಬುಧವಾರ ಭದ್ರಾವತಿ ಮಾಧವಚಾರ್ ವೃತ್ತದಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜೂ. ೨೯ : ರಾಜಸ್ತಾನದ ಉದಯಪುರದಲ್ಲಿ ನಡೆದ ಕನ್ನಯ್ಯಾ ಲಾಲ್ ಟೈಲರ್ ಕಗ್ಗೊಲೆ ಖಂಡಿಸಿ ಬುಧವಾರ ನಗರದ ಮಾಧವಚಾರ್ ವೃತ್ತದಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.
    ಪಕ್ಷದ ಪ್ರಮುಖರು ಮಾತನಾಡಿ, ರಾಜಸ್ತಾನದ ಉದಯಪುರದಲ್ಲಿ ನೂಪುರ್ ಶರ್ಮಾ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬೆಂಬಲಿಸಿ ಪೋಸ್ಟ್ ಮಾಡಿದ ಕಾರಣಕ್ಕೆ ಕನ್ನಯ್ಯಾ ಲಾಲ್ ಅವರನ್ನು ಹತ್ಯೆ ಮಾಡಿರುವುದು ಖಂಡನೀಯ, ದೇಶದಲ್ಲಿ ಹಿಂದುಗಳು ನೆಮ್ಮದಿಯಾಗಿ ಬದುಕಲು ಸಾಧ್ಯವಾಗುತ್ತಿಲ್ಲ. ತಕ್ಷಣ ಕೊಲೆ ಆರೋಪಿಗಳನ್ನು ಬಂಧಿಸಿ ಸೂಕ್ತ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
    ಪ್ರಮುಖರಾದ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ತಾಲೂಕು ಪ್ರಧಾನ ಕಾರ್ಯದರ್ಶಿ ಚನ್ನೇಶ್, ಯುವ ಘಟಕದ ಅಧ್ಯಕ್ಷ ವಿಜಯ್ ಸಿದ್ದಾಥ್, ಎಸ್.ಸಿ ಮೋರ್ಚಾ ಅಧ್ಯಕ್ಷ ಪಿ. ಗಣೇಶ್‌ರಾವ್, ವಿ. ಕದಿರೇಶ್, ಎಸ್. ಕುಮಾರ್, ಎಂ. ಮಂಜುನಾಥ್, ಎಂ.ಎಸ್ ಸುರೇಶಪ್ಪ, ನಕುಲ್, ಗೋಕುಲ್ ಕೃಷ್ಣ, ಧನುಷ್ ಬೋಸ್ಲೆ, ಮಹಿಳಾ ಪ್ರಮುಖರಾದ ಶೋಭಾ ಪಾಟೀಲ್, ಗೌರಮ್ಮ, ಮಂಜುಳಾ, ಶಕುಂತಲಾ, ಅನುಷಾ, ಕವಿತಾ ಸುರೇಶ್, ರೇಖಾ ಪದ್ಮಾವತಿ, ಅನ್ನಪೂರ್ಣ, ಹೇಮಾವತಿ ವಿಶ್ವನಾಥ್, ಕವಿತಾರಾವ್, ಲೋಲಾಕ್ಷಿ, ಭಾಗಿರತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಹಿರಿಯೂರು ಗ್ರಾಮ ಪಂಚಾಯಿತಿ ಪಿಡಿಓ ವಿರುದ್ಧ ಪ್ರತಿಭಟನೆ

ಕರ್ತವ್ಯ ಲೋಪ, ಅಕ್ರಮವಾಗಿ ಎನ್‌ಓಸಿ ನೀಡಿದ ಆರೋಪ

ಭದ್ರಾವತಿ ಹಿರಿಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸರಿಯಾಗಿ ಕರ್ತವ್ಯ ನಿರ್ವಹಿಸದೆ, ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಬುಧವಾರ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜೂ. ೨೯ : ಹಿರಿಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸರಿಯಾಗಿ ಕರ್ತವ್ಯ ನಿರ್ವಹಿಸದೆ, ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಬುಧವಾರ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಳೆದ ಸುಮಾರು ೧೦ ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿರುವ ಪರಮೇಶ್ವರಪ್ಪ, ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಜೊತೆಗೆ  ಸಾರ್ವಜನಿಕರೊಂದಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಪಂಚಾಯಿತಿ ಕೆಲಸ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಅಲ್ಲದೆ ಹಳೇ ಹಿರಿಯೂರು ಭಾಗದ ಗ್ರಾಮ ಠಾಣಾ ಜಾಗದ ಒಂದೇ ನಿವೇಶನಕ್ಕೆ ಅಕ್ರಮವಾಗಿ ಪುನಃ ವಿದ್ಯುತ್ ಸಂಪರ್ಕ ಪಡೆಯಲು ಆಕ್ಷೇಪಣ ರಹಿತ ಪತ್ರ (ಎನ್‌ಓಸಿ) ನೀಡುವ ಮೂಲಕ ಅಕ್ರಮವೆಸಗಿದ್ದಾರೆಂದು ಆರೋಪಿಸಲಾಯಿತು.
    ತಕ್ಷಣ ಅಭಿವೃದ್ಧಿ ಅಧಿಕಾರಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್‌ರವರು ಈ ಸಂಬಂಧ ಸೂಕ್ತ ತನಿಖೆ ಕೈಗೊಂಡು ನ್ಯಾಯ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.
    ಪ್ರಮುಖರಾದ ಕೆ.ಟಿ ಪ್ರಸನ್ನ, ರವಿ, ಸತ್ಯನಾರಾಯಣರಾವ್, ಎಚ್.ವೈ ಕುಮಾರ್, ಸಂತೋಷ್ ಹಾಗು ಅಂಬೇಡ್ಕರ್ ಕಾಲೋನಿ ನಿವಾಸಿಗಳು ಪಾಲ್ಗೊಂಡಿದ್ದರು.

ಯುವ ಮೋರ್ಚಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎನ್ ಪ್ರಜ್ವಲ್ ನೇಮಕ


ಬಿ.ಎನ್ ಪ್ರಜ್ವಲ್
    ಭದ್ರಾವತಿ, ಜೂ. ೨೯ : ಬಿಜೆಪಿ ಯುವ ಮೋರ್ಚಾ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎನ್ ಪ್ರಜ್ವಲ್ ನೇಮಕಗೊಂಡಿದ್ದಾರೆ.
    ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಪ್ರಜ್ವಲ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಯುವ ಮುಖಂಡ ನಕುಲ್ ಅವರಿಂದ ತೆರವಾದ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಯುವ ಮೋರ್ಚಾ ಅಧ್ಯಕ್ಷ ವಿಜಯ್ ಸಿದ್ದಾರ್ಥ್ ಹಾಗು ಇನ್ನಿತರ ಮುಖಂಡರು ಪ್ರಜ್ವಲ್ ಅವರನ್ನು ಅಭಿನಂದಿಸಿದ್ದಾರೆ.