Friday, July 1, 2022

ಜು.೨ರಂದು ಮೆಸ್ಕಾಂ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

    ಭದ್ರಾವತಿ, ಜು. ೧: ಮೆಸ್ಕಾಂ ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಕೂಡ್ಲಿಗೆರೆ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜು.೨ರಂದು ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
    ಬದನೆಹಾಳ್, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ಅರಳಿಹಳ್ಳಿ, ಗುಡ್ಡದನೇರಲಕೆರೆ, ಕಲ್ಲಾಪುರ, ದಾನವಾಡಿ, ಡಿ.ಬಿ ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಕೆರೆ, ಅರಬಿಳಚಿ, ತಿಮ್ಲಾಪುರ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

ಜು.೨ರಂದು ಮೆಸ್ಕಾಂ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

    ಭದ್ರಾವತಿ, ಜು. ೧: ಮೆಸ್ಕಾಂ ನಗರ ಉಪವಿಭಾಗ ವ್ಯಾಪ್ತಿಯ ಸೀಗೆಬಾಗಿಯ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜು.೨ರಂದು ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೨ ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
    ಹಳೇನಗರ, ತಾಲೂಕು ಕಚೇರಿ ರಸ್ತೆ, ರಂಗಪ್ಪ ವೃತ್ತ, ಕೋಟೆ ಕಂಚಿಬಾಗಿಲು, ಶ್ರೀ ಹಳದಮ್ಮ ದೇವಸ್ಥಾನ ಬೀದಿ, ಖಾಜಿಮೊಹಲ್ಲಾ, ಭೂತನಗುಡಿ, ಹೊಸಮನೆ, ಸೀಗೆಬಾಗಿ, ಹಳೇಸೀಗೆಬಾಗಿ, ಅಶ್ವತ್ಥನಗರ, ಕಬಳಿಕಟ್ಟೆ, ಭದ್ರಾ ಕಾಲೋನಿ, ಸಿ.ಎನ್ ರಸ್ತೆ, ಎಪಿಎಂಸಿ, ತರೀಕೆರೆ ರಸ್ತೆ, ಗಾಂಧಿ ವೃತ್ತ, ಕೋಡಿಹಳ್ಳಿ, ಮಾರುತಿ ನಗರ, ಸುಣ್ಣದಹಳ್ಳಿ, ಚನ್ನಗಿರಿ ರಸ್ತೆ, ಹೊಸ ಸೇತುವೆ ರಸ್ತೆ, ಸಿದ್ದಾರೂಢನಗರ, ಶಂಕರಮಠ, ಕನಕನಗರ, ಸ್ಮಶಾನ ಪ್ರದೇಶ, ಕ.ರಾ.ರ.ಸಾ.ನಿ ಘಟಕ, ಹೊಳೆ ಹೊನ್ನೂರು ರಸ್ತೆ, ಖಲಂದರ ನಗರ, ಜಟ್‌ಪಟ್ ನಗರ, ಅನ್ವರ್ ಕಾಲೋನಿ, ಮೊಮಿನ್ ಮೊಹಲ್ಲಾ, ಅಮೀರ್‌ಜಾನ್ ಕಾಲೋನಿ, ಮಜ್ಜಿಗೇನಹಳ್ಳಿ, ಗೌಡ್ರಹಳ್ಳಿ, ಬಾಬಳ್ಳಿ, ವೀರಾಪುರ, ಶ್ರೀರಾಮನಗರ, ಲಕ್ಷ್ಮೀಪುರ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

ನೇರಪಾವತಿ, ಹೊರ ಗುತ್ತಿಗೆ ಪೌರಕಾರ್ಮಿಕರನ್ನು ತಕ್ಷಣ ಕಾಯಂಗೊಳಿಸಿ

ಭದ್ರಾವತಿ ನಗರಸಭೆಯಲ್ಲಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ನೇರಪಾವತಿ ಹಾಗು ಹೊರಗುತ್ತಿಗೆ ಪೌರಕಾರ್ಮಿಕರನ್ನು ತಕ್ಷಣ ಕಾಯಂಗೊಳಿಸುವಂತೆ ಆಗ್ರಹಿಸಿ ಶುಕ್ರವಾರ ಮುಷ್ಕರ ನಡೆಸಲಾಯಿತು.
    ಭದ್ರಾವತಿ, ಜು. ೧: ನಗರಸಭೆಯಲ್ಲಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ನೇರಪಾವತಿ ಹಾಗು ಹೊರಗುತ್ತಿಗೆ ಪೌರಕಾರ್ಮಿಕರನ್ನು ತಕ್ಷಣ ಕಾಯಂಗೊಳಿಸುವಂತೆ ಆಗ್ರಹಿಸಿ ಶುಕ್ರವಾರ ಮುಷ್ಕರ ನಡೆಸಲಾಯಿತು.
    ನಗರಸಭೆ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಮುಷ್ಕರದಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಮಾತನಾಡಿ, ಈ ಹಿಂದೆ ಹಲವು ಬಾರಿ ಸರ್ಕಾರಕ್ಕೆ ಉದ್ಯೋಗ ಕಾಯಂಗೊಳಿಸುವಂತೆ ಮನವಿ ಮಾಡಿದ್ದು, ಆದರೆ ಇದಕ್ಕೆ ಸರ್ಕಾರ ಇದುವರೆಗೂ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಪ್ರಸ್ತುತ ನೀಡಲಾಗುತ್ತಿರುವ ವೇತನದಲ್ಲಿ ಜೀವನ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ. ಉದ್ಯೋಗದ ಭದ್ರತೆ ಜೊತೆಗೆ ಜೀವನದ ಭದ್ರತೆ ಸಹ ಇಲ್ಲದಂತಾಗಿದೆ ಎಂದು ಅಳಲು ವ್ಯಕ್ತಪಡಿಸಿದರು.
    ನಮ್ಮ ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರೆಸುವುದಾಗಿ ಎಚ್ಚರಿಸಿ ತಕ್ಷಣ ಬೇಡಿಕೆ ಈಡೇರಿಸಲು ಸರ್ಕಾರ ಮುಂದಾಗುವಂತೆ ಆಗ್ರಹಿಸಿದರು. ತಹಸೀಲ್ದಾರ್ ಹಾಗು ಪೌರಾಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ, ಪೌರಾಡಳಿತ ಸಚಿವರಿಗೆ ಹಾಗು ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಮನವಿ ಸಲ್ಲಿಸಿದರು. ಇದಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ನಗರಸಭೆವರೆಗೂ ಮೆರವಣಿಗೆ ನಡೆಸಲಾಯಿತು.
    ಮುಷ್ಕರಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಸದಸ್ಯರು ಪಕ್ಷ-ಬೇಧ ಮರೆತು ಬೆಂಬಲ ಸೂಚಿಸಿದರು. ಅಲ್ಲದೆ ಕಾಂಗ್ರೆಸ್, ಜಾತ್ಯತೀತ ಜನತಾದಳ, ಆಮ್ ಆದ್ಮಿ ಪಾರ್ಟಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಪೌರ ಸೇವಾ ನೌಕರರ ಸೇವಾ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿದ್ದವು.
    ಹೊರ ಗುತ್ತಿಗೆ ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಮದ್ ಗೌಸ್, ತಾಲೂಕು ಅಧ್ಯಕ್ಷ ಪ್ರಭಾಕರ್, ನೇರಪಾವತಿ ಪೌರ ಕಾರ್ಮಿಕರ ಸಂಘದ ಸತ್ಯ, ನಾಗರಾಜ್, ಶಿವಮೊಗ್ಗ ಮಹಾನಗರ ಪಾಲಿಕೆ ನೇರಪಾವತಿ ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಖಜಾಂಚಿ ನರಸಿಂಹಮೂರ್ತಿ ಹಾಗು ಪದಾಧಿಕಾರಿಗಳು ಸೇರಿದಂತೆ ಇನ್ನಿತರ ಪ್ರಮುಖರು, ನಗರಸಭೆ ನೇರಪಾವತಿ ಪೌರ ಕಾರ್ಮಿಕರು, ಲೋಡರ್‍ಸ್, ಕಸದ ವಾಹನ ಚಾಲಕರು ಹಾಗು ಹೆಲ್ಪರ್‍ಸ್, ಶೌಚಾಲಯ ನೌಕರರು ಹಾಗು ನೇರಪಾವತಿ ಹೊರಗುತ್ತಿಗೆಯಲ್ಲಿರುವ ಎಲ್ಲಾ ವಿಭಾಗದ ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
    ರಾಜ್ಯ ಸಂಘದ ಕರೆಯ ಮೇರೆಗೆ ಮುಷ್ಕರವನ್ನು ಸಂಜೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಕೈಗೊಳ್ಳಲಾಗುವ ತಿರ್ಮಾನ ಮುಂದಿನ ಹೋರಾಟ ನಿರ್ಧರಿಸಿದೆ ಎನ್ನಲಾಗಿದೆ.

ವೈದ್ಯರ ದಿನಾಚರಣೆ : ತಾಲೂಕು ಆರೋಗ್ಯಾಧಿಕಾರಿಗೆ ಸನ್ಮಾನ

ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಭದ್ರಾವತಿಯಲ್ಲಿ ಶುಕ್ರವಾರ ವೈದ್ಯರ ದಿನಾಚರಣೆ ಅಂಗವಾಗಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜು. ೧: ಸಮಾಜಕ್ಕೆ ವೈದ್ಯರ ಸೇವೆ ಸ್ಮರಣೀಯವಾಗಿದ್ದು, ವೈದ್ಯ ವೃತ್ತಿಯನ್ನು ಗೌರವಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರ ಎಂಬ ಸಂದೇಶದೊಂದಿಗೆ ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಶುಕ್ರವಾರ ವೈದ್ಯರ ದಿನಾಚರಣೆ ಅಂಗವಾಗಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ತಾಲೂಕಿನ ವೈದ್ಯರ ಸಮೂಹದ ಪರವಾಗಿ ಡಾ. ಎಂ.ವಿ ಅಶೋಕ್ ಅವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಸಿಹಿ ಹಂಚಲಾಯಿತು. ಡಾ. ಎಂ.ವಿ ಅಶೋಕ್ ಮಾತನಾಡಿ, ವೈದ್ಯರ ವೃತ್ತಿ ಸೇವೆಯನ್ನು ಗುರುತಿಸಿ ಗೌರವಿಸುತ್ತಿರುವುದು ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ. ವೈದ್ಯರಿಗೆ ಸಮಾಜದಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
    ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಅಧ್ಯಕ್ಷ ಚಂದ್ರಶೇಖರ್, ಕಾರ್ಯಾಧ್ಯಕ್ಷ ಅಭಿಲಾಷ್, ಪ್ರಮುಖರಾದ ಮನೋಹರ್, ಶಿವಣ್ಣಗೌಡ, ನಗರಸಭಾ ಸದಸ್ಯರಾದ ಜಾರ್ಜ್, ಬಸವರಾಜ ಆನೇಕೊಪ್ಪ, ವೆಂಕಟೇಶ್ ಉಜ್ಜನಿಪುರ, ಹಿರಿಯ ಅರೋಗ್ಯ ಸಹಾಯಕ ಆನಂದ ಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಮೂಲಕ ಕರ್ತವ್ಯ ನಿರ್ವಹಿಸುವುದು ಒಳ್ಳೆಯ ಬೆಳವಣಿಗೆ

ಶ್ರೀರಂಗರಾಜಪುರೆ ಮಾದರಿ ಅಧಿಕಾರಿ : ನಗರಸಭೆ ಆಡಳಿತ ಮೆಚ್ಚುಗೆ


ಭದ್ರಾವತಿ ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀರಂಗರಾಜಪುರೆ ಅವರು ವಯೋ ನಿವೃತ್ತಿ ಹೊಂದಿದ್ದ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಸನ್ಮಾನಿಸಿ ಅಭಿನಂದಿಸುವ ಮೂಲಕ ಬೀಳ್ಕೊಡುಗೆ ನೀಡಲಾಯಿತು.
    ಭದ್ರಾವತಿ, ಜು. ೧ : ಸರ್ಕಾರಿ ಅಧಿಕಾರಿಗಳು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಮೂಲಕ ತಮ್ಮ ಕರ್ತವ್ಯ ನಿರ್ವಹಿಸುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಈ ನಿಟ್ಟಿನಲ್ಲಿ ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀರಂಗರಾಜಪುರೆ ಅವರು ಮಾದರಿಯಾಗಿದ್ದಾರೆಂದು ನಗರಸಭೆ ಆಡಳಿತ ಮೆಚ್ಚುಗೆ ವ್ಯಕ್ತಪಡಿಸಿತು.
    ಶ್ರೀರಂಗರಾಜಪುರೆ ಅವರು ವಯೋ ನಿವೃತ್ತಿ ಹೊಂದಿದ್ದ ಹಿನ್ನಲೆಯಲ್ಲಿ ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್, ಹಿರಿಯ ಸದಸ್ಯರಾದ ಬಿ.ಕೆ ಮೋಹನ್, ವಿ. ಕದಿರೇಶ್, ಬಿ.ಟಿ ನಾಗರಾಜ್, ಬಸವರಾಜ ಬಿ ಆನೇಕೊಪ್ಪ, ಲತಾ ಚಂದ್ರಶೇಖರ್, ಪ್ರಮುಖರಾದ ಬಿ. ಗಂಗಾಧರ್, ಎಸ್.ಎಸ್ ಭೈರಪ್ಪ ಸೇರಿದಂತೆ ಇನ್ನಿತರರು ಮಾತನಾಡಿ, ಸರ್ಕಾರಿ ಅಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಯಾವ ರೀತಿ ಸ್ಪಂದಿಸುತ್ತಾರೆಂಬುದು ಅವರು ಮಾಡುವ ಕೆಲಸಗಳಿಂದ ತಿಳಿದುಕೊಳ್ಳಬಹುದಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಮ್ಮಲ್ಲಿನ ವೃತ್ತಿ ಅನುಭವ, ಬುದ್ಧಿವಂತಿಕೆಯಿಂದ ಕರ್ತವ್ಯ ನಿರ್ವಹಿಸುವವರು ಬಹಳ ವಿರಳ. ಇಂತಹ ವ್ಯಕ್ತಿಗಳಲ್ಲಿ ಶ್ರೀರಂಗರಾಜಪುರೆಯವರು ಸಹ ಒಬ್ಬರಾಗಿದ್ದಾರೆ. ಯಾವುದೇ ಕಳಂಕಕ್ಕೆ ಒಳಗಾಗದೆ ತಮ್ಮ ವೃತ್ತಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಇಂತಹ ಅಧಿಕಾರಿಗಳ ಅವಶ್ಯಕತೆ ಇದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
    ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀರಂಗರಾಜಪುರೆ ಅವರು ನನ್ನ ಕರ್ತವ್ಯದ ಅವಧಿಯಲ್ಲಿ ಎಲ್ಲರೂ ಉತ್ತಮವಾಗಿ ಸ್ಪಂದಿಸಿದ್ದು, ಕರ್ತವ್ಯವನ್ನು ಸಮರ್ಥವಾಗಿ ನಿಭಾಹಿಸಲು ಸಹಕರಿಸಿದ್ದಾರೆ. ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ನಗರಸಭೆ ಸದಸ್ಯರು, ಸಿಬ್ಬಂದಿಗಳು ಪೌರಕಾರ್ಮಿಕರು ಹಾಗು ವಿವಿಧ ಸಂಘ-ಸಂಸ್ಥೆಗಳು ಶ್ರೀರಂಗರಾಜಪುರೆ ದಂಪತಿಯನ್ನು ಸನ್ಮಾನಿಸಿ ಅಭಿನಂದಿಸಿದವು.