Monday, July 25, 2022

ಜು.೨೬ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ, ಜು. ೨೫: ಮೆಸ್ಕಾಂ ನಗರ ಉಪವಿಭಾಗ ಘಟಕ-೨ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜು.೨೬ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬.೩೦ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
    ಹಳೇನಗರ, ಬಸವೇಶ್ವರ ವೃತ್ತ, ಖಾಜಿ ಮೊಹಲ್ಲಾ, ಭೂತನಗುಡಿ, ನಗರಸಭೆ ಕಛೇರಿ ಸುತ್ತಮುತ್ತಲ ಪ್ರದೇಶ, ಸಿ.ಎನ್ ರಸ್ತೆ, ಗಾಂಧಿನಗರ, ಕೋಡಿಹಳ್ಳಿ, ಮಾಧವಚಾರ್ ವೃತ್ತ, ಸರ್ಕಾರಿ ಅಸ್ಪತ್ರೆ, ಮಾಧವ ನಗರ, ಗೌರಾಪುರ, ಎನ್.ಎಸ್.ಟಿ ರಸ್ತೆ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

ಸಮಾಜದ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರ ಪ್ರಮುಖ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಅಡಿಯಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆಯಲ್ಲಿ ಹಿರಿಯ ಪತ್ರಕರ್ತ ಶೈಲೇಶ್ ಕೋಠಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜು. ೨೫: ಸಮಾಜವನ್ನು ಎಚ್ಚರಿಸುವ ಕೆಲಸ ಪತ್ರಕರ್ತರು ಮಾಡುತ್ತಿದ್ದು, ಅಲ್ಲದೆ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಸೋಮವಾರ ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಅಡಿಯಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
    ೪ನೇ ಅಂಗವಾಗಿ ಗುರುತಿಸಿಕೊಂಡಿರುವ ಪತ್ರಿಕಾರಂಗ ತನ್ನದೇ ಆದ ಮೌಲ್ಯಗಳನ್ನು ಹೊಂದುವ ಜೊತೆಗೆ ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ಬದ್ದತೆ ಕಾಯ್ದುಕೊಂಡು ಬಂದಿದೆ ಎಂದರು.
    ಸಂಘದ ಜಿಲ್ಲಾಧ್ಯಕ್ಷ ಕೆ.ವಿ ಶಿವಕುಮಾರ್ ಮಾತನಾಡಿ, ದೇಶದಲ್ಲಿ ಮುದ್ರಣ ಮಾದ್ಯಮದ ಕೊಡುಗೆ ಅಪಾರವಾಗಿದೆ. ಪ್ರಸ್ತುತ ದೃಶ್ಯ ಮಾಧ್ಯಮ ಹಾಗು ಸಾಮಾಜಿಕ ಜಾಲತಾಣಗಳ ಪೈಪೋಟಿ ನಡುವೆಯೂ ಮುದ್ರಣ ಮಾದ್ಯಮ ತನ್ನ ತನವನ್ನು ಉಳಿಸಿಕೊಂಡು ಮುನ್ನಡೆಯುತ್ತಿದೆ. ಇಂದಿನ ಯುವ ಪೀಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯವಾಗಿ ಕಾಲ ಕಳೆಯುವ ಬದಲು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.
    ಕಾಲೇಜಿನ ಪ್ರಾಂಶುಪಾಲ ಡಾ. ಧನಂಜಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ತಾಲೂಕು ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹಿರಿಯ ಪತ್ರಕರ್ತ ಶೈಲೇಶ್ ಕೋಠಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಜಿಲ್ಲಾ ಉಪಾಧ್ಯಕ್ಷ ಆರ್.ಎಸ್ ಹಾಲಸ್ವಾಮಿ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ, ಉಪನ್ಯಾಸಕ ಮಹಮದ್ ನಜೀಬ್, ಉದ್ಯಮಿ ಬಿ.ಕೆ ಜಗನ್ನಾಥ್, ಎಸ್.ಎಸ್ ಭೈರಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಪತ್ರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸ್ಪರ್ಧೆಯಲ್ಲಿ ಸುಮಾರು ೪೦ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ತೋಹಿದ್ ಅಹಮದ್ ಭಾಷಣ, ಐಶ್ವಯ್ಯ ವೀಣಾವಾದನ ಮತ್ತು ಮಂಜುನಾಥ ಕಮಲಕರ್ ನಾಯ್ಕ ಗೀತಾ ಗಾಯನ ನಡೆಸಿಕೊಟ್ಟರು.
    ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ. ವರದರಾಜ ಮತ್ತು ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಖಜಾಂಚಿ ಅನಂತಕುಮಾರ್ ವಂದಿಸಿದರು. ಪತ್ರಕರ್ತರು, ಕಾಲೇಜಿನ ಅಧ್ಯಾಪಕ, ಅಧ್ಯಾಪಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಗ್ರಾಮಠಾಣಾ ಜಾಗ ನಿಯಮಬಾಹಿರವಾಗಿ ಖಾಸಗಿ ವ್ಯಕ್ತಿಗಳಿಗೆ ಹಂಚಿಕೆ : ಅಭಿವೃದ್ಧಿ ಅಧಿಕಾರಿ ಕೆ. ಮಧುಸೂಧನ್ ಅಮಾನತ್ತು

ಕೆ. ಮಧುಸೂಧನ್
    ಭದ್ರಾವತಿ, ಜು. ೨೫ : ತಾಲೂಕಿನ ಹಿರಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇ ಹಿರಿಯೂರು ಗ್ರಾಮದ ಗ್ರಾಮಠಾಣಾ ಜಾಗವನ್ನು ನಿಯಮಬಾಹಿರವಾಗಿ ಖಾಸಗಿ ವ್ಯಕ್ತಿಗಳಿಗೆ ಹಂಚಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿವೃದ್ಧಿ ಅಧಿಕಾರಿ ಕೆ. ಮಧುಸೂಧನ್ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ಆದೇಶ ಹೊರಡಿಸಿದ್ದಾರೆ.
    ಪ್ರಸ್ತುತ ತಾಲೂಕಿನ ಸೈದರಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಕೆ. ಮಧುಸೂಧನ್ ಹಿರಿಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ಹಳೇ ಹಿರಿಯೂರು ಗ್ರಾಮದ ಗ್ರಾಮ ಠಾಣಾ ಜಾಗವನ್ನು ನಿಯಮಬಾಹಿರವಾಗಿ ಒಟ್ಟು ೧೪ ಜನ ಖಾಸಗಿ ವ್ಯಕ್ತಿಗಳಿಗೆ ಸ್ವತ್ತಿನ ಸೃಜನೆ ಮಾಡಿ ಕೈ ಬರಹದಲ್ಲಿ ನಮೂನೆ ೯ ಮತ್ತು ೧೧ ಎಗಳನ್ನು ವಿತರಿಸಿ, ಖಾತೆಗಳಿಗೆ ಕಂದಾಯ ರಶೀದಿಗಳನ್ನು ನೀಡಿದ್ದರು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ೧೯೯೩ರ ಪ್ರಕರಣ ೨೦೦೯ ಮತ್ತು ೨೧೦ಗಳನ್ನು ಉಲ್ಲಂಘಿಸಿರುವ ಕುರಿತು ದೂರುಗಳು ಸಲ್ಲಿಕೆಯಾಗಿದ್ದವು. ಅಲ್ಲದೆ ಈ ಸಂಬಂಧ ಕರ್ನಾಟಕ ದಲಿತ ಸಂಘರ್ಷ ಸಮಿತಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿತ್ತು.
    ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್‌ರವರು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ಅವರಿಗೆ ಪರಿಶೀಲನಾ ವರದಿ ಸಲ್ಲಿಸಿದ್ದರು.