ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಹಿನ್ನಲೆಯಲ್ಲಿ ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿ ಅಂಗಡಿಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿರುವುದು.
ಭದ್ರಾವತಿ, ಆ. ೧೫: ಶಿವಮೊಗ್ಗ ನಗರದಲ್ಲಿ ಉಂಟಾಗಿರುವ ಅಹಿತಕರ ಘಟನೆ ಹಿನ್ನಲೆಯಲ್ಲಿ ತಾಲೂಕಿನ ನಗರಸಭೆ ವ್ಯಾಪ್ತಿ ಹಾಗು ಕೆಲವು ಗ್ರಾಮಾಂತರ ಭಾಗದಲ್ಲಿ ಸೋಮವಾರ ಕಲಂ ೧೪೪ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ತಹಸೀಲ್ದಾರ್ ಆರ್. ಪ್ರದೀಪ್ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಅಹಿತಕರ ಘಟನೆಯನ್ನು ಬೆಂಬಲಿಸಿ ಅಥವಾ ವಿರೋಧಿಸಿ ಪ್ರತಿಭಟನೆ ಅಥವಾ ಮೆರವಣಿಗೆಗಳು ನಡೆಯುವ ಸಾಧ್ಯತೆ ಕಂಡು ಬಂದಿರುವ ಹಿನ್ನಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಗರಸಭೆ ೩೫ ವಾರ್ಡ್‌ಗಳ ವ್ಯಾಪ್ತಿಯಲ್ಲಿ, ಪೇಪರ್‌ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಗು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹುಣಸೇಕಟ್ಟೆ ಜಂಕ್ಷನ್(ಎಚ್.ಕೆ ಜಂಕ್ಷನ್), ವೀರಾಪುರ, ಅರಳಿಹಳ್ಳಿ, ಸೀತಾರಾಮಪುರ, ಕಾಗೇಕೋಡಮಗ್ಗೆ ಮತ್ತು ದೊಣಬಘಟ್ಟ ಗ್ರಾಮದಲ್ಲಿ ಸಂಜೆ ೫ ಗಂಟೆಯಿಂದ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಅಂಗಡಿಮುಂಗಟ್ಟುಗಳು ಬಂದ್:
ಸಂಜೆ ನಿಷೇಧಾಜ್ಞೆ ಜಾರಿಯಾಗುತ್ತಿದ್ದಂತೆ ಪೊಲೀಸರು ನಗರ ಪ್ರದೇಶ ವ್ಯಾಪ್ತಿಯಲ್ಲಿನ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಗೇಡ್‌ಗಳನ್ನು ಅಳವಡಿಸಿ ಸಂಚಾರ ನಿಯಂತ್ರಿಸುವ ಕಾರ್ಯಕ್ಕೆ ಮುಂದಾದರು. ವಾಣಿಜ್ಯ ರಸ್ತೆಗಳಲ್ಲಿನ ಅಂಗಡಿಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದು, ಆಯಾ ಕಟ್ಟುನಿಟ್ಟಿನ ಸ್ಥಳಗಳಲ್ಲಿ ಬಿಗಿಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ರಾತ್ರಿ ೭ರ ನಂತರ ಬಹುತೇಕ ಕಡೆ ಬಂದ್ ವಾತಾವರಣ ಕಂಡು ಬಂದಿದ್ದು, ಪಾದಚಾರಿ, ವಾಹನಗಳ ಸಂಚಾರ ವಿರಳವಾಗಿತ್ತು.
ಶಾಲಾ-ಕಾಲೇಜುಗಳಿಗೆ ರಜೆ :
ಮತ್ತೊಂದೆಡೆ ಮುನ್ನಚ್ಚರಿಕೆ ಕ್ರಮವಾಗಿ ತಾಲೂಕಿನಾದ್ಯಂತ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಈ ನಡುವೆ ಕುವೆಂಪು ವಿಶ್ವವಿದ್ಯಾಲಯ ಸಹ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿದೆ.