Tuesday, September 20, 2022

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸೆ.೨೩ರಂದು ಚುನಾವಣೆ :

ಅನುಸುಧಾ ಮೋಹನ್ ಪಳನಿ ಅಧ್ಯಕ್ಷೆ ಬಹುತೇಕ ಖಚಿತ

ಅನುಸುಧಾ ಮೋಹನ್
    ಭದ್ರಾವತಿ, ಸೆ. ೨೦: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸೆ. ೨೩ರಂದು ಚುನಾವಣೆ ನಡೆಯಲಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಸ್ಥಾನಕ್ಕೆ ವಾರ್ಡ್ ನಂ.೧೩ರ ಸದಸ್ಯೆ ಅನುಸುಧಾ ಮೋಹನ್ ಪಳನಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
    ನಗರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್  ಮೀಸಲಾತಿಯ ಮೊದಲ ೩೦ ತಿಂಗಳ ಅವಧಿಯನ್ನು ಆಂತರಿಕವಾಗಿ ಹಂಚಿಕೆ ಮಾಡಿಕೊಂಡಿದ್ದು, ಅದರಂತೆ ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನದ ಮೊದಲ ೧೦ ತಿಂಗಳು ವಾರ್ಡ್ ನಂ.೨ರ ಗೀತಾರಾಜ್‌ಕುಮಾರ್ ಅಧಿಕಾರ ನಡೆಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದೀಗ ೧೦ ತಿಂಗಳ ೨ನೇ ಅವಧಿಗೆ ಸೆ.೨೩ರಂದು ಚುನಾವಣೆ ನಡೆಯಲಿದೆ.
    ಅಧ್ಯಕ್ಷ ಸ್ಥಾನಕ್ಕೆ ವಾರ್ಡ್ ನಂ.೧೩ರ ಸದಸ್ಯೆ ಅನುಸುಧಾ ಮೋಹನ್ ಪಳನಿ, ವಾರ್ಡ್ ನಂ. ೩೪ರ ಲತಾ ಚಂದ್ರಶೇಖರ್ ಹಾಗು ವಾರ್ಡ್ ನಂ.೩೫ರ ಶೃತಿ ವಸಂತ್ ಮೂರು ಮಂದಿ ಪೈಪೋಟಿಗೆ ಮುಂದಾಗಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ನಿರ್ಧಾರವೇ ಅಂತಿಮವಾಗಿದ್ದು, ಅನುಸುಧಾ ಮೋಹನ್ ಪಳನಿ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.
ಪ್ರಸ್ತುತ ನಗರಸಭೆಯಲ್ಲಿ ಕಾಂಗ್ರೆಸ್-೧೮, ಜೆಡಿಎಸ್-೧೨, ಬಿಜೆಪಿ-೦೪ ಮತ್ತು ಪಕ್ಷೇತರ-೦೧ ಸ್ಥಾನ ಹೊಂದಿದೆ. ಉಳಿದಂತೆ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಚನ್ನಪ್ಪ ಮುಂದುವರೆಯಲಿದ್ದಾರೆ.
    ಸಾಮಾಜಿಕ ಜಾಲತಾಣಗಳಲ್ಲಿ ರಾಜೀನಾಮೆ ಪತ್ರ:
    ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ವಾರ್ಡ್ ನಂ.೩೫ರ ಸದಸ್ಯೆ ಶೃತಿ ವಸಂತ್ ಅವರು ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಶೃತಿ ವಸಂತ್ ಅವರು ಸೆ.೧೨ರಂದು ಜಿಲ್ಲಾಧಿಕಾರಿಗಳಿಗೆ ರಾಜೀನಾಮೆ ಸಲ್ಲಿಸಿರುವ ಪತ್ರ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ವ್ಯಕ್ತವಾಗಿಲ್ಲ.
    ಸೆ.೨೩ರಂದು ಚುನಾವಣೆ :
    ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸೆ.೨೩ರಂದು ಚುನಾವಣೆ ನಡೆಯಲಿದ್ದು, ಉಪವಿಭಾಗಾಧಿಕಾರಿ ಎಸ್.ಬಿ ದೊಡ್ಡಗೌಡರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
    ಬೆಳಿಗ್ಗೆ ೧೦ ರಿಂದ ೧೧ ಗಂಟೆವರೆಗೆ ನಾಮಪತ್ರ ಸಲ್ಲಿಕೆ, ಮಧ್ಯಾಹ್ನ ೧ ಗಂಟೆಗೆ ಪರಿಶೀಲನೆ, ೧.೧೫ರ ವರೆಗೆ ನಾಮಪತ್ರ ಹಿಂಪಡೆಯಲು ಕಾಲಾವಕಾಶ, ಚುನಾವಣೆ ಅಗತ್ಯವಿದ್ದಲ್ಲಿ ೧.೩೦ಕ್ಕೆ ನಡೆಯಲಿದೆ.

ಶತಮಾನ ಪೂರೈಸಿ ಮುನ್ನಡೆಯುತ್ತಿರುವ ವಿಐಎಸ್‌ಎಲ್ : ಕ್ರೀಡಾಪಟುಗಳಿಗೆ ಪ್ರೋತ್ಸಾಹ

ಶಾಲಾ ಮಕ್ಕಳ ಕ್ರೀಡಾ ಚಟುವಟಿಕೆಗಳಿಗೆ ಕ್ರೀಡಾಂಗಣ ಉಚಿತ : ಬಿ.ಎಲ್ ಚಂದ್ವಾನಿ

ಭದ್ರಾವತಿ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ಶ್ರೀ ಆದಿಚುಂಚನಗಿರಿ ಪ್ರೌಢಶಾಲೆ ಸಹಯೋಗದೊಂದಿಗೆ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ೧೭ ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳ ಕ್ರೀಡಾಕೂಟ ವಿಐಎಸ್‌ಎಲ್ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಉದ್ಘಾಟಿಸಿದರು.
    ಭದ್ರಾವತಿ, ಸೆ. ೨೦ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನ ಪೂರೈಸಿ ಮುನ್ನಡೆಯುತ್ತಿದ್ದು, ಇಂತಹ ಸಂದರ್ಭದಲ್ಲಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಜೊತೆಗೆ ಅವರು ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕಾರ್ಖಾನೆ ಆಡಳಿತ ಮಂಡಳಿ ಬಯಸುತ್ತದೆ ಎಂದು ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಹೇಳಿದರು.
    ಅವರು ಮಂಗಳವಾರ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ಶ್ರೀ ಆದಿಚುಂಚನಗಿರಿ ಪ್ರೌಢಶಾಲೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ೧೭ ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
    ವಿಐಎಸ್‌ಎಲ್ ಕ್ರೀಡಾಂಗಣದ ಮೂಲಕ ಅನೇಕ ಕ್ರೀಡಾಪಟುಗಳು ರಾಜ್ಯ ಹಾಗು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಶಾಲಾ ಮಕ್ಕಳ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ಲಭಿಸಬೇಕು. ಈ ನಿಟ್ಟಿನಲ್ಲಿ ಕ್ರೀಡಾಕೂಟಗಳ ಆಯೋಜನೆಗೆ ಕ್ರೀಡಾಂಗಣವನ್ನು ಉಚಿತವಾಗಿ ನೀಡಲಾಗುತ್ತಿದೆ. ಇನ್ನೂ ಹೆಚ್ಚಿನ ಕ್ರೀಡಾ ಚಟುವಟಿಕೆಗಳು ನಡೆಯುವಂತಾಗಬೇಕೆಂದರು.
    ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ ಮಾತನಾಡಿ, ಮಕ್ಕಳು ಎಲ್ಲಾ ರೀತಿಯಿಂದಲೂ ಬೆಳವಣಿಗೆ ಹೊಂದಲು ಕ್ರೀಡೆಗಳು ಸಹಕಾರಿಯಾಗಿವೆ. ಈ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಶಾಸಕರು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹ ಕಾರ್ಯ ನಿರ್ವಹಿಸುತ್ತಿದೆ. ವಿಐಎಸ್‌ಎಲ್ ಕಾರ್ಖಾನೆ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಪಂಚಾಕ್ಷರಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕೆ.ಬಿ ಬಸವರಾಜಪ್ಪ, ಪಾಲಾಕ್ಷಪ್ಪ, ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಜಗದೀಶ್, ಸಿದ್ದಾಪುರ ಪ್ರೌಢಶಾಲೆ ಮುಖ್ಯ ಶಿಕ್ಷಕ ಬಸವರಾಜಪ್ಪ, ಪಾಲಾಕ್ಷಪ್ಪ, ನವೀದ್ ಪರ್ವೀಜ್ ಅಹಮದ್, ತಾಲೂಕು ದೈಹಿಕ ಶಿಕ್ಷಕರ ಸಂಘದ ಪಾಲಾಕ್ಷಪ್ಪ, ಅಪೇಕ್ಷ ಮಂಜುನಾಥ್, ದೈಹಿಕ ಶಿಕ್ಷಕರಾದ ಕರಣ್‌ಸಿಂಗ್, ಶಿವಲಿಂಗೇಗೌಡ, ವಿಐಎಸ್‌ಎಲ್ ಕಾರ್ಖಾನೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್‌ಕುಮಾರ್, ಶ್ರೀ ಆದಿಚುಂಚುನಗಿರಿ ವಿದ್ಯಾಸಂಸ್ಥೆ ಪ್ರಾಂಶುಪಾಲರಾದ ಡಾ. ಹರಿಣಾಕ್ಷಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ತಾಲೂಕಿನ ೫ ವಲಯಗಳ ಸರ್ಕಾರಿ, ಅನುದಾನ ಮತ್ತು ಅನುದಾನ ರಹಿತ ಪ್ರೌಢಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಭು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕಿ ಪಿ ಗೀತಾ ಸ್ವಾಗತಿಸಿದರು. ಕ್ರೀಡಾಕೂಟ ೨ ದಿನಗಳ ಕಾಲ ನಡೆಯಲಿದೆ.


ಭದ್ರಾವತಿ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ಶ್ರೀ ಆದಿಚುಂಚನಗಿರಿ ಪ್ರೌಢಶಾಲೆ ಸಹಯೋಗದೊಂದಿಗೆ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ೧೭ ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ವಿಐಎಸ್‌ಎಲ್ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಕ್ರೀಡಾ ಜ್ಯೋತಿ ಸ್ವೀಕರಿಸಿದರು.