Wednesday, September 21, 2022

ಭದ್ರಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿಇಎಸ್ ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರು ಭದ್ರಾ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
    ಭದ್ರಾವತಿ, ಸೆ. ೨೧ : ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರು ಭದ್ರಾ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
    ಮೊಹಮ್ಮದ್ ಸೈಯದ್ ಅಲಿ ಹಾಗೂ ಭಾವನ ವೈಯಕ್ತಿಕ ಪ್ರಶಸ್ತಿ ಹಾಗು ಬಾಲಕ-ಬಾಲಕಿಯರು ವಿವಿಧ ಸ್ಪರ್ಧೆಗಳಲ್ಲಿ ತಂಡ ಪ್ರಶಸ್ತಿ ಹಾಗು ೨೦೨೨-೨೩ನೇ ಸಾಲಿನ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.
    ವಿದ್ಯಾ ಸಂಸ್ಥೆ ಅಧ್ಯಕ್ಷ ಬಿ. ಸಿದ್ದಬಸಪ್ಪ, ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಎಲ್ಲಾ ವಿಭಾಗಗಳ ಮುಖ್ಯಶಿಕ್ಷಕರು, ದೈಹಿಕ ಶಿಕ್ಷಕರಾದ ರವಿ, ರೇವತಿ ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಅಸಂಘಟಿತ ಕಾರ್ಮಿಕರು ಸರ್ಕಾರಿ ಸೌಲಭ್ಯ ಪಡೆಯಲು ಸಂಘಟಿತರಾಗಿ : ಸುಂದರ್ ಬಾಬು

ಭದ್ರಾವತಿ ರೋಟರಿಕ್ಲಬ್ ಸಭಾಂಗಣದಲ್ಲಿ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟ ಹಾಗು ರೋಟರಿ ಕ್ಲಬ್ ಸಹಯೋಗದೊಂದಿಗೆ ಕಾರ್ಮಿಕ ಇಲಾಖೆ ವತಿಯಿಂದ ನಗರದ ಬ್ಯೂಟಿಷಿಯನ್ ಮಾಲೀಕರು ಹಾಗು ಕೆಲಸಗಾರರಿಗೆ  ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಸೆ. ೨೧: ಅಸಂಘಟಿತ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಘಟಿತರಾಗಬೇಕೆಂದು ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಹೇಳಿದರು.
    ಅವರು ರೋಟರಿಕ್ಲಬ್ ಸಭಾಂಗಣದಲ್ಲಿ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟ ಹಾಗು ರೋಟರಿ ಕ್ಲಬ್ ಸಹಯೋಗದೊಂದಿಗೆ ಕಾರ್ಮಿಕ ಇಲಾಖೆ ವತಿಯಿಂದ ನಗರದ ಬ್ಯೂಟಿಷಿಯನ್ ಮಾಲೀಕರು ಹಾಗು ಕೆಲಸಗಾರರಿಗೆ ಹಮ್ಮಿಕೊಳ್ಳಲಾಗಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.
    ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಘಟಿತರಾಗುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಂಸದ ಬಿ.ವೈ ರಾಘವೇಂದ್ರ ಮತ್ತು ಶಾಸಕ ಬಿ.ಕೆ ಸಂಗಮೇಶ್ವರ್ ಅವರು ಅಸಂಘಟಿತ ಕಾರ್ಮಿಕರು ಸಂಘಟಿತರಾಗಲು ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಬ್ಯೂಟಿಷಿಯನ್ ಕೆಲಸಗಾರರನ್ನು ಸಹ ಸರ್ಕಾರ ಅಸಂಘಟಿತ ಕಾರ್ಮಿಕರೆಂದು ಗುರುತಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಬಲವಾದ ಸಂಘಟನೆ ರೂಪುಗೊಳ್ಳಬೇಕೆಂದರು.
    ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು, ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ರೋಟರಿ ಕ್ಲಬ್ ಅಧ್ಯಕ್ಷ ಅಡವೀಶಯ್ಯ, ಕಾರ್ಯದರ್ಶಿ ಶಿವಕುಮಾರ್, ಪ್ರಮುಖರಾದ ಪದ್ಮಾವತಿ, ಕವಿತ ಸುರೇಶ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳಾದ ಕವಿತ, ಸುಮಿತ್ರ, ಶಾರದ, ಶಶಿ, ನೇತ್ರ, ಸವಿತಾ, ಆರತಿ, ವಿಜಯ್ ಸೇರಿದಂತೆ ಬ್ಯೂಟಿಷಿಯನ್ ಮಾಲೀಕರು, ಕೆಲಸಗಾರರು ಪಾಲ್ಗೊಂಡಿದ್ದರು.  

ಕಬ್ಬು ಬೆಳೆಗಾರರು, ಕೃಷಿ ಪಂಪ್‌ಸೆಟ್ ರೈತರಿಂದ ಸೆ.೨೬ರಂದು ಬೆಂಗಳೂರು ವಿಧಾನಸೌಧ ಚಲೋ

ಭದ್ರಾವತಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಜಿಲ್ಲಾ ಸಂಚಾಲಕ ಎನ್.ಎಚ್ ದೇವಕುಮಾರ್ ಮಾತನಾಡಿದರು. 
    ಭದ್ರಾವತಿ, ಸೆ. ೨೧ : ಪ್ರಸಕ್ತ ಸಾಲಿನ ಕಬ್ಬಿನ ಎಫ್‌ಆರ್‌ಪಿ ದರ ನಿಗದಿಯಲ್ಲಿ ರೈತರಿಗೆ ದ್ರೋಹ ಬಗೆದಿರುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ, ದರ ಪುನರ್ ಪರಿಶೀಲನೆ ನಡೆಸಲು, ವಿದ್ಯುತ್ ಕಾಯ್ದೆ ಖಾಸಗಿಕರಣ ತಿದ್ದುಪಡಿ ಕೈಬಿಡಬೇಕು ಹಾಗು ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನಿಲ್ಲಿಸುವ ಹುನ್ನಾರ ಕೈಬಿಡಬೇಕೆಂದು ಒತ್ತಾಯಿಸಿ ಸೆ.೨೬ರಂದು ಬೆಂಗಳೂರು ವಿಧಾನಸೌಧ ಚಲೋ ನಡೆಸಲಾಗುತ್ತಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಜಿಲ್ಲಾ ಸಂಚಾಲಕ ಎನ್.ಎಚ್ ದೇವಕುಮಾರ್ ತಿಳಿಸಿದರು.
    ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಬ್ಬು ಬೆಳೆಗಾರರು ಹಾಗು ಕೃಷಿ ಪಂಪ್‌ಸೆಟ್ ರೈತರಿಂದ ಬೆಂಗಳೂರು ವಿಧಾನಸೌಧ ಚಲೋ ನಡೆಸಲಾಗುತ್ತಿದ್ದು, ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ರೈತ ಮುಖಂಡರು ಈ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದರು.
    ಕೇಂದ್ರ ಸರ್ಕಾರ ನವಂಬರ್, ೨೦೨೧ರಂದು ೩ ಕೃಷಿ ಕಾಯ್ದೆಗಳನ್ನು ರದ್ದುಮಾಡಿ ಹೋರಾಟದಲ್ಲಿ ಮಡಿದ ಸುಮಾರು ೭೫೦ ರೈತ ಕುಟುಂಬಗಳಿಗೆ ಪರಿಹಾರ ನೀಡುವ ಜೊತೆಗೆ ಹಲವು ಬೇಡಿಕೆ ಈಡೇರಿಸಿ ಕೊಡುವುದಾಗಿ ಭರವಸೆ ನೀಡಿತ್ತು. ಆದರೆ ಭರವಸೆ ಇದುವರೆಗೂ ಹುಸಿಯಾಗಿ ಉಳಿದು ಕೊಂಡಿದೆ. ಕನಿಷ್ಠ ಬೆಂಬಲ ಬೆಲೆ ನಿಗದಿ ಕಾನೂನು ಜಾರಿ ಮಾಡಲು ಸಮಿತಿ ರಚಿಸಿದ್ದೇವೆ ಎನ್ನುವ ಮೂಲಕ ಹೋರಾಟ ನಡೆಸಿದ ರೈತ ಮುಖಂಡರನ್ನು ಹೊರಗಿಟ್ಟು ಸಮಿತಿ ರಚಿಸಿ ನಾಟಕವಾಡುತ್ತಿದೆ ಎಂದು ಆರೋಪಿಸಿದರು.
    ದೇಶಾದ್ಯಂತ ರೈತ ಚಳುವಳಿಯನ್ನು ಮತ್ತಷ್ಟು ಪ್ರಬಲಗೊಳಿಸಲು ದಕ್ಷಿಣ ಭಾರತದ ಕೇಂದ್ರ ಸ್ಥಾನ ಬೆಂಗಳೂರಿನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ರೈತ ಮುಖಂಡರ ಅಧಿವೇಶನ ಸೆ.೨೫ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಎಂಎಸ್‌ಪಿ ಕಾತರಿ ಕಾನೂನು ಜಾರಿಗೊಳಿಸುವ ಮೂಲಕ ಡಾ. ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಗೊಳಿಸಬೇಕು. ಕೃಷಿ ಉತ್ಪನ್ನಗಳ ಹಾಗು ಉಪಕರಣಗಳ ಮೇಲಿನ ಜಿಎಸ್‌ಟಿ ರದ್ದುಪಡಿಸಬೇಕು. ದೇಶದಲ್ಲಿ ಸುಮಾರು ೩.೫ ಲಕ್ಷ ರೈತರು ಕೃಷಿ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊರೋನಾ ಲಾಕ್‌ಡೌನ್, ಅತಿವೃಷ್ಟಿ ಮಳೆ ಹಾನಿ ಸಂಕಷ್ಟದಿಂದ ನಲುಗಿದ್ದಾರೆ. ಈ ಹಿನ್ನಲೆಯಲ್ಲಿ ದೇಶದ ಉದ್ಯಮಿಗಳ ೧೦ ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ರೀತಿಯಲ್ಲಿ ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.  
    ರಾಜ್ಯದಲ್ಲಿ ಅಂದಾಜು ೧೦ ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಮಳೆ ಹಾನಿಯಿಂದ ರೈತರ ಬೆಳೆ ನಷ್ಟವಾಗಿದ್ದು, ಕೇಂದ್ರ ತಂಡ ನಾಟಕೀಯವಾಗಿ ನಾಮಕಾವಸ್ತೆ ಪರಿಶೀಲನೆ ನಡೆಸಿದೆ. ರೈತರ ಜಮೀನುಗಳಿಗೆ ನಷ್ಟ ಅಂದಾಜು ಮಾಡಲು ವಿಫಲವಾಗಿದೆ. ಕೆಲವು ಜಿಲ್ಲೆಗಳಲ್ಲಿ ಜಿಲ್ಲಾ ಮಂತ್ರಿಗಳು, ಅಧಿಕಾರಿಗಳು ಕಾಣೆಯಾಗಿದ್ದಾರೆ. ಈಗಾಗಲೇ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಳೆ ಹಾನಿಯಾಗಿರುವ ಹಳ್ಳಿಗಳಿಗೆ ಭೇಟಿ ನೀಡಿ ರೈತರ ನೈಜ ಬೆಳೆ ನಷ್ಟ ಸಮೀಕ್ಷೆ ನಡೆಸಿ ಅಂದಾಜಿನ ಸಂಪೂರ್ಣ ಪರಿಹಾರ ನೀಡಲು ಮುಂದಾಗಬೇಕು. ರೈತರಿಕೆ ಭಿಕ್ಷೆ ರೂಪದ ಪರಿಹಾರ ಬೇಡ, ನೈಜ ನಷ್ಟ ಪರಿಹಾರ ನೀಡಬೇಕು. ಒಂದು ವೇಳೆ ಅವೈಜ್ಞಾನಿಕವಾಗಿ ಸಣ್ಣಪುಟ್ಟ ಮೊತ್ತದ ಚೆಕ್ ನೀಡಿದರೆ ನೀಡಿದರೆ ತಹಸೀಲ್ದಾರ್, ಜಿಲ್ಲಾಧಿಕಾರಿ ಕಛೇರಿ ಮುಂದೆ ಚೆಕ್ ಸುಡುವ ಚಳುವಳಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
    ಪ್ರಸ್ತುತ ರೈತರು ಸಂಕಷ್ಟದಲ್ಲಿದ್ದು, ರೈತರ ಸಾಲ ವಸೂಲಾತಿ ನಿಲ್ಲಿಸಿ ಆರ್‌ಬಿಐ ನಿಯಮದಂತೆ ಸಾಲದ ಮೇಲೆ ಶೇ.೨೫ರಷ್ಟು ಹೆಚ್ಚುವರಿ ಸಾಲ ನೀಡಬೇಕು. ರಾಜ್ಯದಲ್ಲಿ ಜಾರಿಗೊಳಿಸಿರುವ ಎಪಿಎಂಸಿ ಕಾಯ್ದೆಯನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಜಿಲ್ಲಾಧ್ಯಕ್ಷ ಕೆ. ಈರಣ್ಣ, ಉಪಾಧ್ಯಕ್ಷ ನಾಗರಾಜ, ಪ್ರಧಾನ ಕಾರ್ಯದರ್ಶಿ ಸಣ್ಣಯ್ಯ, ಕಾರ್ಯದರ್ಶಿ ಬಿ.ಎಚ್ ವಸಂತ, ಖಜಾಂಚಿ ಆರ್. ಕೃಷ್ಣೋಜಿರಾವ್, ಗೊಂದಿ ಜಯರಾಂ, ದೇವೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.