Tuesday, November 1, 2022

ಅಧಿಕಾರ ಶಾಶ್ವತವಲ್ಲ, ಸೇವೆ ಮುಖ್ಯ : ಬಿ.ವೈ ರಾಘವೇಂದ್ರ

ಭದ್ರಾವತಿಯಲ್ಲಿ ಬಿಜೆಪಿ ಯುವ ಮುಖಂಡ, ನ್ಯಾಯವಾದಿ ಮಂಗೋಟೆ ರುದ್ರೇಶ್‌ರವರ ಹುಟ್ಟುಹಬ್ಬ ಆಚರಣೆಯಲ್ಲಿ ಸಂಸದ ಬಿ.ವೈ ರಾಘವೇಂದ್‌ರ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ನ. ೧ ; ಅಧಿಕಾರ ಯಾರಿಗೂ ಶಾಶ್ವತವಲ್ಲ. ನಾವು ಮಾಡುವ ಸೇವೆ ಬಹಳ ಮುಖ್ಯ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ಮಂಗಳವಾರ ಬಿಜೆಪಿ ಯುವ ಮುಖಂಡ, ನ್ಯಾಯವಾದಿ ಮಂಗೋಟೆ ರುದ್ರೇಶ್‌ರವರ ಹುಟ್ಟುಹಬ್ಬ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರತಿಯೊಬ್ಬರಲ್ಲೂ ಸೇವೆ ಮಾಡುವ ಮನೋಭಾವವಿರಬೇಕು. ರಾಜಕೀಯ ಕ್ಷೇತ್ರವನ್ನೂ ಸಹ ಸೇವೆಗಾಗಿ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಸೇವೆಯನ್ನು ಪ್ರಾಮಾಣಿಕವಾಗಿ ಕೈಗೊಂಡಲ್ಲಿ ಸೂಕ್ತ ಸಮಯದಲ್ಲಿ ಲಭಿಸಬೇಕಾದ ಸ್ಥಾನಮಾನಗಳು ತಾನಾಗಿಯೇ ಬರಲಿವೆ ಎಂದರು.
    ಮಂಗೋಟೆ ರುದ್ರೇಶ್‌ರವರು ಆರಂಭದಿಂದಲೂ ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷ ಸಂಘಟನೆ ಜೊತೆಗೆ ಸಾಮಾಜಿಕ ಸೇವಾ ಕಾರ್ಯಗಳಲ್ಲೂ ತೊಡಗಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ ಎಂಬ ವಿಶ್ವಾಸ ಹೊಂದಿದ್ದೇನೆ ಎಂದರು.
    ಶಿವಮೊಗ್ಗ ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಎಸ್ ಜ್ಯೋತಿ ಪ್ರಕಾಶ್, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಪ್ರಮುಖರಾದ ನಗರಸಭೆ ಸದಸ್ಯೆ ಅನುಪಮ ಚನ್ನೇಶ್, ಅನಿತಾ ಮಲ್ಲೇಶ್, ಮಾಜಿ ಸದಸ್ಯ ಜಿ. ಆನಂದಕುಮಾರ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ ಸಂತೋಷ್, ಜಿಲ್ಲಾ ಸಹಕಾರಿ ಯೂನಿಯನ್ ಮಾಜಿ ಅಧ್ಯಕ್ಷ ದುಗ್ಗೇಶ್ ತೇಲ್ಕರ್, ಪ್ರಮುಖರಾದ ಬಿ.ಎಸ್ ಶ್ರೀನಾಥ್, ಗೋಕುಲ್ ಕೃಷ್ಣ ಸೇರಿದಂತೆ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಬೂತ್‌ಮಟ್ಟದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕನ್ನಡ ಭಾಷೆಗೆ ಸಮೃದ್ಧ ಸಾಹಿತ್ಯವಿದೆ : ಡಾ. ವಿಜಯದೇವಿ

ಭದ್ರಾವತಿ ನ್ಯೂಟೌನ್ ತಾಲೂಕು ಕನ್ನಡ ಪರಿಷತ್ ಕಛೇರಿಯಲ್ಲಿ ಮಂಗಳವಾರ ೬೭ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
    ಭದ್ರಾವತಿ, ನ. ೧ : ಕನ್ನಡ ಭಾಷೆ ತನ್ನದೇ ಆದ ಪರಂಪರೆಯನ್ನು ಹೊಂದಿದ್ದು, ಈ ಭಾಷೆಗೆ ಸಮೃದ್ಧ ಸಾಹಿತ್ಯವಿದೆ. ಆದರೆ ನಾವು ಅದರ ಕಡೆ ಗಮನ ಹರಿಸುತ್ತಿಲ್ಲ ಎಂದು ಎಮರೆಟಸ್ ಪ್ರಾಧ್ಯಾಪಕಿ ಡಾ. ವಿಜಯಾದೇವಿ ವಿಷಾದ ವ್ಯಕ್ತಪಡಿಸಿದರು.  
    ಅವರು ಮಂಗಳವಾರ ನ್ಯೂಟೌನ್ ತಾಲೂಕು ಕನ್ನಡ ಪರಿಷತ್ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ೬೭ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕನ್ನಡ ಭಾಷೆ, ಸಾಹಿತ್ಯ ಕುರಿತು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಈ ಮೂಲಕ ಭಾಷೆ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕೆಂದರು.
    ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಪರಿಷತ್ ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಮಾತನಾಡಿ, ಕನ್ನಡ ಸಮೃದ್ಧ ಭಾಷೆಯಾಗಿದ್ದರೂ ಸಹ ಪ್ರಸ್ತುತ ಕನ್ನಡ ಭಾಷೆಗೆ ಎದುರಾಗಿರುವ ಆತಂಕಗಳ ಬಗ್ಗೆ ಎಚ್ಚರಿಸಿದರು.
    ಶಿಕ್ಷಕಿ, ಸಾಹಿತಿ ಇಂದಿರಾ ಪ್ರಾರ್ಥಿಸಿ, ಕಾರ್ಯದರ್ಶಿ ತಿಮ್ಮಪ್ಪ ಸ್ವಾಗತಿಸಿದರು. ನಾಗೋಜಿರಾವ್ ನಿರೂಪಿಸಿ, ಕೆ.ಟಿ ಪ್ರಸನ್ನ ವಂದಿಸಿದರು. ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಸಹಕಾರಿ ಧುರೀಣ ಗೊಂದಿಜಯರಾಂ, ಹಳೇನಗರ ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್, ಅನ್ನಪೂರ್ಣ, ಕವಿತಾ ರಾವ್, ಭಾಗ್ಯಮ್ಮ, ಕಾಂತಪ್ಪ, ಬಿ.ಗುರು, ಡಾ. ಹರೀಶ್, ಜಯಂತಿಶೇಟ್, ಪೀಟರ್, ಮೋಹನ್, ಮಂಜುನಾಥ್, ಕಮಲಾಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಮಾತೃ ಭಾಷೆ ಸಹಕಾರಿ : ಡಿ. ಮಂಜುನಾಥ್

ಭದ್ರಾವತಿ ಅಪ್ಪರ್‌ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಮತ್ತು ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ನ. ೧:  ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪರಿಸರದ ಭಾಷೆ, ಮಾತೃ ಭಾಷೆ ಹೆಚ್ಚು ಸಹಕಾರಿಯಾಗಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು.
      ಅವರು ಮಂಗಳವಾರ ನಗರದ ಅಪ್ಪರ್‌ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಮತ್ತು ಸರ್ವ ಸದಸ್ಯರ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದರು.
      ಮಕ್ಕಳ ಕಲಿಕೆ ಮಾತೃ ಭಾಷೆಯಲ್ಲಿಯೇ ಆರಂಭವಾಗಬೇಕು. ಪರಿಸರದ ಭಾಷೆಯಲ್ಲಿ ಬೆಳೆದ ಅನೇಕರು ಮಹಾನ್ ವ್ಯಕ್ತಿಗಳಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಗಳು ಇಂದು ಸಮಾಜದಲ್ಲಿ ನಮ್ಮಲ್ಲರಿಗೂ ಮಾದರಿಯಾಗಿದ್ದಾರೆ. ಪೋಷಕರು ಮಾತೃ ಭಾಷೆ ಮೇಲಿನ ಅಭಿಮಾನ ಬೆಳೆಸಿಕೊಳ್ಳಬೇಕೆಂದರು.
      ಪ್ರಪಂಚದ ಪ್ರಮುಖ ಭಾಷೆಗಳಲ್ಲಿ ಕನ್ನಡ ಸಹ ಒಂದಾಗಿದ್ದು, ಅದರಲ್ಲೂ ದೇಶದಲ್ಲಿರುವ ಭಾಷೆಗಳಲ್ಲಿ ತನ್ನದೇ ಆದ ವಿಶಿಷ್ಟತೆಯನ್ನು ಕಾಯ್ದುಕೊಂಡಿದೆ. ಇಂತಹ ಭಾಷೆ ಮೇಲೆ ನಮ್ಮ ಅಭಿಮಾನ ಹೆಚ್ಚಾಗಬೇಕು. ಆಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆ ಸಾರ್ಥಕಗೊಳ್ಳುತ್ತದೆ ಎಂದರು.
      ವೇದಿಕೆ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್ ಮಾತನಾಡಿ, ವೇದಿಕೆ ಸಮಾಜಮುಖಿಯಾಗಿ ಮುನ್ನಡೆಯುತ್ತಿದೆ. ಸದಸ್ಯರು ಸರ್ವತೋಮುಖವಾಗಿ ಬೆಳವಣಿಗೆ ಹೊಂದಲು ವೇದಿಕೆ ಸಹಕಾರಿಯಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ವೇದಿಕೆಯಲ್ಲಿ ಮುನ್ನಡೆಯಬೇಕೆಂದರು.
      ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಲುವೇಗೌಡರು ಸೇರಿದಂತೆ ಇನ್ನಿತರರು ವೇದಿಕೆಯಲ್ಲಿದ್ದರು. ವೇದಿಕೆ ಅಧ್ಯಕ್ಷೆ ಸುಧಾಮಣಿ ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು.  ಕಾರ್ಯದರ್ಶಿ ಲತಾ ಪ್ರಭಾಕರ್ ವಾರ್ಷಿಕ ವರದಿ ಹಾಗು ಖಜಾಂಚಿ ಭಾರತಿ ಕುಮಾರ್ ಲೆಕ್ಕಪತ್ರ ಮಂಡಿಸಿದರು.  

ಭಾಷಾಭಿಮಾನ ಬೆಳೆಸಿಕೊಳ್ಳಿ, ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಂಗಳವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ೬೭ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ, ನ. ೧ : ನೆಲ-ಜಲ-ಭಾಷೆ ಮೇಲಿನ ಅಭಿಮಾನ ಬೆಳೆಸಿಕೊಳ್ಳುವ ಮೂಲಕ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
      ಅವರು ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ೬೭ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ನಾಡಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
       ಕನ್ನಡ ಭಾಷೆ ತನ್ನದೇ ಆದ ಪರಂಪರೆ ಹೊಂದಿದ್ದು, ಪ್ರತಿಯೊಬ್ಬರಲ್ಲೂ ಭಾಷಾಭಿಮಾನ ಬಹಳ ಮುಖ್ಯವಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಕನ್ನಡ ಭಾಷೆ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದರು.
      ತಹಸೀಲ್ದಾರ್ ಆರ್. ಪ್ರದೀಪ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್, ಸದಸ್ಯರಾದ ಗೀತಾರಾಜ್‌ಕುಮಾರ್, ಕಾಂತರಾಜ್, ಮಣಿ ಎಎನ್‌ಎಸ್, ಸರ್ವಮಂಗಳ ಭೈರಪ್ಪ, ಶೃತಿ ವಸಂತ್, ರಿಯಾಜ್ ಅಹಮದ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ವಲಯ ಅರಣ್ಯಾಧಿಕಾರಿ ರಾಜೇಶ್, ಉಪವಲಯ ಅರಣ್ಯಾಧಿಕಾರಿ ಬಿ.ಆರ್. ದಿನೇಶ್‌ಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
      ಕ್ಷೇತ್ರ ಶಿಕ್ಷಣಾಧಿಕಾರಿ  ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿದರು. ಅಪೇಕ್ಷ ಮಂಜುನಾಥ್ ನಿರೂಪಿಸಿದರು. ಸುಮತಿ ಕಾರಂತ್ ತಂಡದವರು ನಾಡಗೀತೆ ಹಾಗು ಜಾನಪದ ಕಲಾವಿದ ರೇವಣಪ್ಪ ತಂಡದವರು ರೈತಗೀತೆ ಹಾಡಿದರು. ತಾಲೂಕು ದೈಹಿಕ ಶಿಕ್ಷಣ ಸಂಯೋಜಕ ಪ್ರಭು, ದೈಹಿಕ ನಿರ್ದೇಶಕರಾದ ಶಿವಲಿಂಗೇಗೌಡ, ಕರಣ್‌ಸಿಂಗ್, ತಾಲೂಕು ಕಛೇರಿ, ನಗರಸಭೆ ಹಾಗು ತಾಲೂಕು ಪಂಚಾಯಿತಿ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು.
      ಇದಕ್ಕೂ ಮೊದಲು ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಅಂಬೇಡ್ಕರ್ ವೃತ್ತದಿಂದ ತಾಯಿ ರಾಜರಾಜೇಶ್ವರಿ ಭಾವಚಿತ್ರದೊಂದಿಗೆ ಕನಕಮಂಟಪ ಮೈದಾನದವರೆಗೂ ಮೆರವಣಿಗೆ ನಡೆಸಲಾಯಿತು.