Tuesday, December 6, 2022

ಮತದಾನ ಕುರಿತು ಜಾಗೃತಿ ಜಾಥಾ

ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾನ ಕುರಿತು ಜಾಗೃತಿ ಮೂಡಿಸಲು ಮಂಗಳವಾರ ಭದ್ರಾವತಿ ನಗರದಲ್ಲಿ ಜಾಥಾ ನಡೆಸಲಾಯಿತು.
    ಭದ್ರಾವತಿ, ಡಿ. ೬ : ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾನ ಕುರಿತು ಜಾಗೃತಿ ಮೂಡಿಸಲು ಮಂಗಳವಾರ ನಗರದಲ್ಲಿ ಜಾಥಾ ನಡೆಸಲಾಯಿತು.
    ನಗರಸಭೆ ವತಿಯಿಂದ ನಗರದ ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತ ದಿಂದ ಮಾಧವಚಾರ್ ವೃತ್ತದವರೆಗೆ ಆಯೋಜಿಸಲಾಗಿದ್ದ ಜಾಥಾದಲ್ಲಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಮತ್ತು ಬೊಮ್ಮನಕಟ್ಟೆ ಸರ್.ಎಂ.ವಿ ಸರ್ಕಾರಿ ವಿಜ್ಞಾನ ಕಾಲೇಜು ಸೇರಿದಂತೆ ಇನ್ನಿತರ ಕಾಲೇಜುಗಳ ವಿದ್ಯಾರ್ಥಿಗಳು, ತಾಲೂಕು ಕಛೇರಿ ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಕಾಲೇಜುಗಳ ಅಧ್ಯಾಪಕರು ಹಾಗು ನಗರಸಭೆ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
    ೧೮ ವರ್ಷ ಪೂರೈಸಿರುವ ಪ್ರತಿಯೊಬ್ಬರು ಸಹ ಮತದಾನ ಹಕ್ಕು ಹೊಂದುವುದು, ಕಡ್ಡಾಯವಾಗಿ ಮತ ಚಲಾಯಿಸುವುದು ಸೇರಿದಂತೆ ಚುನಾವಣಾ ಸಂಬಂಧ ಅರಿವು ಮೂಡಿಸುವ ಜಾಗೃತಿ ಫಲಕಗಳನ್ನು ಹಿಡಿದು ಜಾಥಾ ನಡೆಸಲಾಯಿತು.
    ಚುನಾವಣಾ ಸಾಕ್ಷರತಾ ಸಂಘ ಜಿಲ್ಲಾ ಉಪ ನೋಡಲ್ ಅಧಿಕಾರಿ ನವೀದ್ ಪರ್ವೀಜ್ ಅಹಮದ್ ರಂಗಪ್ಪ ವೃತ್ತದಲ್ಲಿ ಚುನಾವಣಾ ಮಾದರಿಗಳೊಂದಿಗೆ, ವಿಶಿಷ್ಟ ಆಟದೊಂದಿಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಿ ಗಮನ ಸೆಳೆದರು.
    ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಉಪತಹಸೀಲ್ದಾರ್ ಮಂಜಾನಾಯ್ಕ, ನಗರಸಭೆ ಪೌರಾಯುಕ್ತ ಮನುಕುಮಾರ್, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಪಂಚಾಕ್ಷರಿ, ಕವಿತಾ, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ ಧನಂಜಯ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.      


ಚುನಾವಣಾ ಸಾಕ್ಷರತಾ ಸಂಘ ಜಿಲ್ಲಾ ಉಪ ನೋಡಲ್ ಅಧಿಕಾರಿ ನವೀದ್ ಪರ್ವೀಜ್ ಅಹಮದ್ ಭದ್ರಾವತಿ ರಂಗಪ್ಪ ವೃತ್ತದಲ್ಲಿ ಚುನಾವಣಾ ಮಾದರಿಗಳೊಂದಿಗೆ, ವಿಶಿಷ್ಟ ಆಟದೊಂದಿಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಿ ಗಮನ ಸೆಳೆದರು.

ಮಕ್ಕಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿರುವ ದುಡಿಯುವ ವರ್ಗದ ಕಡೆಗಣನೆ


೯ನೇ ತಾಲೂಕು ಮಟ್ಟದ ಸಮಾವೇಶದಲ್ಲಿ ರಾಜ್ಯಾಧ್ಯಕ್ಷ ಅಮ್ಜದ್ ವಿಷಾದ

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ರಾಜ್ಯ  ಸಮಿತಿ(ಎಐಟಿಯುಸಿ) ತಾಲೂಕು ಘಟಕದ ವತಿಯಿಂದ ಮಂಗಳವಾರ ಭದ್ರಾವತಿ ಹಳೇನಗರದ  ವೀರಶೈವ ಸಭಾಭವನದಲ್ಲಿ  ಹಮ್ಮಿಕೊಳ್ಳಲಾಗಿದ್ದ ೯ನೇ ತಾಲೂಕು ಮಟ್ಟದ ಸಮಾವೇಶವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ, ಡಿ. ೬: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ರಾಜ್ಯ  ಸಮಿತಿ(ಎಐಟಿಯುಸಿ) ತಾಲೂಕು ಘಟಕದ ವತಿಯಿಂದ ಮಂಗಳವಾರ ಹಳೇನಗರದ  ವೀರಶೈವ ಸಭಾಭವನದಲ್ಲಿ  ಹಮ್ಮಿಕೊಳ್ಳಲಾಗಿದ್ದ ೯ನೇ ತಾಲೂಕು ಮಟ್ಟದ ಸಮಾವೇಶವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ನಂತರ ಅವರು ಕಾಮ್ರೇಡ್ ಎಚ್.ಕೆ ರಾಮಚಂದ್ರಪ್ಪ ಮತ್ತು ಎನ್ ಶಿವಣ್ಣನವರ ವೇದಿಕೆಯಲ್ಲಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವ ಜೊತೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
   ಫೆಡರೇಷನ್ ರಾಜ್ಯಾಧ್ಯಕ್ಷ ಕಾಮ್ರೇಡ್ ಅಮ್ಜದ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.  ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನಿರಂತರ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ. ಆದರೂ ಸಹ ಅವರ ಬಹಳಷ್ಟು ಬೇಡಿಕೆಗಳನ್ನು ಈಡೇರಿಸುವಲ್ಲಿ  ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಮೀನಾಮೇಷ ಮಾಡುತ್ತಿವೆ.  ಹೋರಾಟದಿಂದ ಮಾತ್ರ ನಮ್ಮ  ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯ. ಈ ಹಿನ್ನೆಲೆಯಲ್ಲಿ ನಮ್ಮ ಮುಂದಿನ ಹೋರಾಟದ ಬಗ್ಗೆ ರೂಪರೇಷೆ ಸಿದ್ದಪಡಿಸಲು ಮತ್ತು ಕಾರ್ಯಕರ್ತರು ಹಾಗೂ ಸಹಾಯಕಿಯರು ತಮ್ಮ ಭಾವನೆಗಳನ್ನುಅಭಿವ್ಯಕ್ತಗೊಳಿಸಲು ಸಮ್ಮೇಳನ ಸಹಕಾರಿಯಾಗಿದೆ ಎಂದರು.
    ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ, ಫೆಡರೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಜಯಮ್ಮ, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಪೌರಾಯುಕ್ತ ಮನುಕುಮಾರ್, ತಹಸೀಲ್ದಾರ್ ಆರ್. ಪ್ರದೀಪ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ. ಸುರೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
  ಫೆಡರೇಷನ್ ತಾಲೂಕು ಅಧ್ಯಕ್ಷೆ ಸುಶೀಲಬಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ವೇದಾವತಿ ಸ್ವಾಗತಿಸಿದರು. ಫೆಡರೇಷನ್ ತಾಲೂಕು ಘಟಕದ ಪದಾಧಿಕಾರಿಗಳು ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆಯಾಗಿ ಪದೋನ್ನತಿಗೊಂಡ ಮೇಲ್ವಿಚಾರಕರು ಹಾಗು ನಿವೃತ್ತಿ ಹೊಂದುವವರೆಗೂ ಸಂಘಟನೆಯಲ್ಲಿ ತೊಡಗಿಸಿಕೊಂಡು ನಾಯಕತ್ವದೊಂದಿಗೆ ಹಲವಾರು ಹೋರಾಟಗಳಲ್ಲಿ ಪಾಲ್ಗೊಂಡವರನ್ನು ಸನ್ಮಾನಿಸಿ ಗೌರವಿಸಲಾಯಿತು.