ಸೋಮವಾರ, ಜನವರಿ 2, 2023

ಉಕ್ಕಿನ ನಗರದಲ್ಲಿ ವಿಜೃಂಭಣೆಯಿಂದ ಜರುಗಿದ ವೈಕುಂಠ ಏಕಾದಶಿ


ಭದ್ರಾವತಿ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಏಕಾದಶಿ ಪ್ರಯುಕ್ತ ಸೋಮವಾರ ಭವ್ಯ ವೇದಿಕೆಯಲ್ಲಿ ನಿರ್ಮಿಸಲಾಗಿದ್ದ ವೈಕುಂಠ ದರ್ಶನ ಭಕ್ತರ ಗಮನ ಸೆಳೆಯಿತು.
    ಭದ್ರಾವತಿ, ಜ. ೨: ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ, ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಶ್ರೀನಿವಾಸ ಸ್ವಾಮಿ ದೇವಸ್ಥಾನ, ಬಿ.ಎಚ್ ರಸ್ತೆ ಲೋಯರ್ ಹುತ್ತಾ, ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಹಾಗು ಕಾಗದನಗರ ೭ನೇ ವಾರ್ಡ್ ಶ್ರೀ ಕ್ಷೇತ್ರ ನಾಗಕಟ್ಟೆ ಹಾಗು ಬಾರಂದೂರು ಶ್ರೀ ಲಕ್ಷ್ಮೀ ವೆಂಕಟೇಶ್ವರ ಪದ್ಮಾವತಿ ದೇವಾಲಯ ಸೇರಿದಂತೆ ವಿವಿಧೆಡೆ ಸೋಮವಾರ ವೈಕುಂಠ ಏಕಾದಶಿ ವಿಜೃಂಭಣೆಯಿಂದ ನಡೆಯಿತು.
    ಬೆಳಿಗ್ಗೆಯಿಂದಲೇ ಭಕ್ತರು ಸರದಿ ಸಾಲಿನಲ್ಲಿ ನಿಂತು ವೈಕುಂಠ ದರ್ಶನ ಪಡೆಯುವ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾದರು. ಪ್ರತಿ ವರ್ಷದಂತೆ ಈ ಬಾರಿ ಸಹ ಭವ್ಯ ವೇದಿಕೆಯಲ್ಲಿ ನಿರ್ಮಿಸಲಾದ ವೈಕುಂಠ ದರ್ಶನ ಭಕ್ತರನ್ನು ಆಕರ್ಷಿಸಿದವು.
    ಹಳೇನಗರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ವೇದಬ್ರಹ್ಮ ಎಸ್. ರಂಗನಾಥಶರ್ಮ, ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಅರ್ಚಕ ಪ್ರಮೋದ್ ಕುಮಾರ್, ಕಾಗದನಗರ ೭ನೇ ವಾರ್ಡ್ ಶ್ರೀ ಕ್ಷೇತ್ರ ನಾಗಕಟ್ಟೆಯಲ್ಲಿ ಪ್ರಧಾನ ಅರ್ಚಕ ರಮೇಶ್ ಭಟ್ಟರು ತರಳಿಮಠ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.
    ಬೆಳಿಗ್ಗೆಯೇ ಗಣ್ಯರು, ಜನಪ್ರತಿನಿಧಿನಗಳು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು ನೂತನ ವರ್ಷದ ಆರಂಭದಲ್ಲಿಯೇ ಆಗಮಿಸಿರುವ ವೈಕುಂಠ ಏಕಾದಶಿ ಶುಭಾಶಯ ಕೋರುವ ಮೂಲಕ ದೇವಸ್ಥಾನಗಳಿಗೆ ತೆರಳಿ ವೈಕುಂಠ ದರ್ಶನ ಪಡೆದು ಪ್ರಾರ್ಥಿಸಿದರು.  
    ಬಹುತೇಕ ದೇವಾಲಯಗಳಲ್ಲಿ ಭಕ್ತರಿಗೆ ಕೇವಲ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ತೀರ್ಥಪ್ರಸಾದ ವಿನಿಯೋಗ ನಡೆಯಿತು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ