ಪ್ರೊಫೆಸರ್ ಡಾ. ವಿಜಯದೇವಿ
ಭದ್ರಾವತಿ, ಜ. ೪ : ನಗರದ ನಿವಾಸಿ, ವಿಜಯಪುರ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕಿ, ಎಮೆರಿಟಸ್ ಪ್ರೊಫೆಸರ್ ಡಾ. ವಿಜಯದೇವಿ ಅವರಿಗೆ ಅಲ್ಲಮಪ್ರಭು ಪ್ರಶಸ್ತಿ ಲಭಿಸಿದೆ.
ಗುರುಬಸವ ಅಧ್ಯಯನ ಪೀಠ ವತಿಯಿಂದ ಶಿವಮೊಗ್ಗ ಶ್ರೀ ಬೆಕ್ಕಿನಕಲ್ಮಠ ಶ್ರೀ ಗುರುಬಸವ ಭವನದಲ್ಲಿ ಜ.೬ ಮತ್ತು ೭ರಂದು ಎರಡು ದಿನಗಳ ಕಾಲ ಶಿವಮೊಗ್ಗ ಆನಂದಪುರ, ಶ್ರೀ ಬೆಕ್ಕಿನಕಲ್ಮಠ, ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನ ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿರುವ ಪರಮ ತಪಸ್ವಿ ಲಿಂಗೈಕ್ಯ ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ ೧೧೧ನೇ ಪುಣ್ಯಸ್ಮರಣೋತ್ಸವ, ಶರಣ ಸಾಹಿತ್ಯ ಮತ್ತು ಭಾವೈಕ್ಯ ಸಮ್ಮೇಳನದಲ್ಲಿ ಡಾ. ವಿಜಯದೇವಿಯವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.
ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ ನಾರಾಯಣಗೌಡ, ಶಾಸಕರಾದ ಕೆ.ಎಸ್ ಈಶ್ವರಪ್ಪ, ಆಯನೂರು ಮಂಜುನಾಥ್, ಡಿ.ಎಸ್ ಅರುಣ್, ಶಿವಮೊಗ್ಗ ಮಹಾನಗರ ಪಾಲಿಕೆ ಮಹಾಪೌರ ಎಸ್. ಶಿವಕುಮಾರ್, ಸದಸ್ಯ ಪ್ರಭಾಕರ್ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಡಾ. ವಿಜಯದೇವಿಯವರು ಶಿಕ್ಷಣ ಹಾಗು ಸಾಹಿತ್ಯ ಕ್ಷೇತ್ರದಲ್ಲಿ ಅಪಾರವಾದ ಸೇವೆ ಸಲ್ಲಿಸಿದ್ದು, ತಾಲೂಕು ಹಾಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಾಗು ಶರಣ ಸಾಹಿತ್ಯ ಸಮ್ಮೇಳನಗಳ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಇವರಿಗೆ ಹಲವಾರು ಪ್ರಶಸ್ತಿಗಳು ಲಭಿಸಿವೆ. ಇದೀಗ ಅಲ್ಲಮಪ್ರಭು ಪ್ರಶಸ್ತಿ ಲಭಿಸಿದೆ. ಇವರಿಗೆ ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು, ಜನಪ್ರತಿನಿಧಿಗಳು ಅಭಿನಂದನೆ ಸಲ್ಲಿಸಿದ್ದಾರೆ.
No comments:
Post a Comment