ಕುವೆಂಪು ವಿ.ವಿ ಅಧ್ಯಾಪಕೇತರ ನೌಕರರ ಸಂಘ ಉನ್ನತ ಶಿಕ್ಷಣ ಖಾತೆ ಸಚಿವ, ಸಂಸದರಿಗೆ ಕೃತಜ್ಞತೆ
ಭದ್ರಾವತಿ, ಜ. ೧೦: ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಜಿ. ಅನುರಾಧ ಹಾಗೂ ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಸಂಘ ಉನ್ನತ ಶಿಕ್ಷಣ ಖಾತೆ ಸಚಿವ ಸಿ.ಎನ್ ಅಶ್ವಥ್ ನಾರಾಯಣ, ಸಂಸದ ಬಿ.ವೈ ರಾಘವೇಂದ್ರ ಮತ್ತು ಆರ್‌ಎಸ್‌ಎಸ್ ದಕ್ಷಿಣ ಪ್ರಾಂತ್ಯ ಕಾರ್ಯ ನಿರ್ವಾಹ ಪಟ್ಟಾಭಿರಾಮ್‌ರವರಿಗೆ ಕೃತಜ್ಞತೆ ಸಲ್ಲಿಸಿದೆ.
ಹಲವು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಿದರೂ ಸಹ ವಿಶ್ವವಿದ್ಯಾಲಯದ ನೌಕರರ ಸಮಸ್ಯೆಗಳಿಗೆ ಕುಲಸಚಿವೆ ಜಿ. ಅನುರಾಧ ಅವರು ಪೂರಕವಾಗಿ ಸ್ಪಂದಿಸದೆ ಆಡಳಿತದಲ್ಲಿ ವಿಮುಖ ನೀತಿ ಅನುಸರಿಸುತ್ತಿದ್ದಾರೆ. ನೌಕರ ವರ್ಗಕ್ಕೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಖುದ್ದಾಗಿ ಭೇಟಿಯಾಗಿ ಸಮಸ್ಯೆ ವಿವರಿಸಿದರೂ ಸಹ ಸಂಘದ ಪದಾಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಇದರಿಂದಾಗಿ ನೌಕರರ ಯಾವುದೇ ಸಮಸ್ಯೆಗಳು ಬಗೆಹರಿಯದೆ ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ವಿಶ್ವವಿದ್ಯಾಲಯದಿಂದ ವರ್ಗಾವಣೆಗೊಳಿಸುವಂತೆ ಇತ್ತೀಚೆಗೆ ಸಂಘದ ವತಿಯಿಂದ ಸಂಸದರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಹಾಗು ಉನ್ನತ ಶಿಕ್ಷಣ ಖಾತೆ ಸಚಿವ ಸಿ.ಎನ್ ಅಶ್ವಥ್ ನಾರಾಯಣ ಅವರಿಗೆ ಮನವಿ ಸಲ್ಲಿಸಲಾಗಿತ್ತು.
ಇದೀಗ ಮನವಿಗೆ ಪೂರಕವಾಗಿ ಸ್ಪಂದಿಸಿ ಜಿ. ಅನುರಾಧ ಹಾಗು ಎಸ್. ರಾಮಕೃಷ್ಣ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಸಂಘದ ಅಧ್ಯಕ್ಷ ಶ್ರೀನಿವಾಸ, ಉಪಾಧ್ಯಕ್ಷ ಎಂ.ಎಂ ಸ್ವಾಮಿ ಸೇರಿದಂತೆ ಪದಾಧಿಕಾರಿಗಳು ನೌಕರರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
No comments:
Post a Comment