ಭದ್ರಾವತಿ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಗುರುವಾರ ಯುವಜನ ಜಾಗೃತಿ ಸಭೆ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಜ. ೧೯: ಅಪರಾಧ ಪ್ರಕರಣಗಳ ನಿಯಂತ್ರಣದಲ್ಲಿ ಯುವಕರ ಪಾತ್ರ ಪ್ರಮುಖವಾಗಿದ್ದು, ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಮನವಿ ಮಾಡಿದರು.
ಅವರು ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಯುವಜನ ಜಾಗೃತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಅಪರಾಧ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಇಲಾಖೆಗೆ ಮಾಹಿತಿ ನೀಡುವುದರಿಂದ ಹೆಚ್ಚಿನ ಅನುಕೂಲವಾಗಲಿದ್ದು, ತಪ್ಪಿತಸ್ಥರರಿಂದ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬಹುದಾಗಿದೆ. ಅಲ್ಲದೆ ಮುಂದೆ ನಡೆಯಬಹುದಾದ ಅಪರಾಧ ಪ್ರಕರಣಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದರು.
ಯುವ ಸಮುದಾಯ ದುಶ್ಚಟಗಳಿಗೆ ಬಲಿಯಾಗದೆ ಶಿಕ್ಷಣಕ್ಕೆ ಹೆಚ್ಚಿನ ಗಮನ ನೀಡುವ ಮೂಲಕ ಭವಿಷ್ಯ ರೂಪಿಸಿಕೊಳ್ಳಬೇಕು. ಯಾವುದೇ ರೀತಿಯ ಪ್ರಚೋದನೆಗಳಿಗೆ ಒಳಗಾಗದೆ ಅಡ್ಡದಾರಿ ಹಿಡಿಯದಂತೆ ಎಚ್ಚರವಹಿಸಬೇಕೆಂದರು.
ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ವಿದ್ಯಾರ್ಥಿ ಸಂಘಟನೆಗಳ, ಯುವ ಘಟಕಗಳ ಪ್ರಮುಖರಾದ ಮುಸ್ವೀರ್ ಬಾಷಾ, ಕೇಶವ ಮೂರ್ತಿ, ಅಫ್ತಾಬ್ ಅಹಮದ್, ಅರ್ಷದ್ ಖುರೇಶಿ, ಅಮೋಸ್, ನಕುಲ್ ಸೇರಿದಂತೆ ಇನ್ನಿತರರು ಮಾತನಾಡಿ, ಪೊಲೀಸ್ ಇಲಾಖೆ ಸಮಾಜದಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ. ಇದಕ್ಕೆ ಯುವ ಸಮುದಾಯ ಹೆಚ್ಚಿನ ಸಹಕಾರ ನೀಡಿದ್ದಲ್ಲಿ ಉತ್ತಮ ಸಮಾಜ ರೂಪಿಸಲು ಸಾಧ್ಯ ಎಂದರು.
ಸಭೆಯಲ್ಲಿ ಉಪ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಪೊಲೀಸ್ ಇನ್ಸ್ಪೆಕ್ಟರ್ ಇ.ಓ ಮಂಜುನಾಥ್, ಶಿಲ್ಪಾ ನಾಯನೇಗಲಿ, ಕವಿತಾ, ಸುರೇಶ್, ಶಾಂತಲಾ, ರಂಗನಾಥ ಅಂತರಗಟ್ಟಿ ಉಪಸ್ಥಿತರಿದ್ದರು.
No comments:
Post a Comment