ಕೆಆರ್‌ಎಸ್ ಪಕ್ಷದಿಂದ ಬೆಂಬಲ, ಜ.೨೮ರಂದು ಪೂರ್ವಭಾವಿ, ಶ್ರೀಗಳಿಗೆ ಒಕ್ಕಲಿಗರ ಸಂಘ ಮನವಿ
ಭದ್ರಾವತಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿ, ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಭದ್ರಾವತಿ, ಜ. ೨೫ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರ ಸಂಘ ಕಾರ್ಖಾನೆ ಮುಂಭಾಗ ಕೈಗೊಂಡಿರುವ ಅನಿರ್ಧಿಷ್ಟಾವಧಿ ಹೋರಾಟ ಮಂಗಳವಾರ ೭ನೇ ದಿನಕ್ಕೆ ಕಾಲಿಟ್ಟಿತು.
ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರತೆ ಪಡೆದುಕೊಳ್ಳುತ್ತಿದೆ. ಹೋರಾಟ ಸ್ಥಳಕ್ಕೆ ಇದುವರೆಗೂ ಜಿಲ್ಲಾಮಟ್ಟದ ಜನಪ್ರತಿನಿಧಿಗಳಾಗಿ, ಸಂಸದರಾಗಲಿ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಜಿಲ್ಲಾಡಳಿತವಾಗಲಿ ತಿರುಗಿ ನೋಡಿಲ್ಲ. ಈ ನಡುವೆ ಬೃಹತ್ ಹೋರಾಟ ರೂಪಿಸುವ ಸಂಬಂಧ ಗುತ್ತಿಗೆ ಕಾರ್ಮಿಕರು ಹಿರಿಯ ಕಾರ್ಮಿಕ ಹೋರಾಟ ಡಿ.ಸಿ ಮಾಯಣ್ಣ ನೇತೃತ್ವದಲ್ಲಿ ಸಭೆ ನಡೆಸಿ ಎಲ್ಲಾ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಸಹಕಾರ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಹೋರಾಟ ಮತ್ತಷ್ಟು ತೀವ್ರತೆ ಪಡೆದುಕೊಳ್ಳುವ ಸಾಧ್ಯತೆ ಕಂಡು ಬರುತ್ತಿದೆ.
ಕೆಆರ್‌ಎಸ್ ಪಕ್ಷ ಬೆಂಬಲ:
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಈ ಸಂಬಂಧ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಪ್ರಮುಖರು, ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಿಗರ ಹೆಮ್ಮೆಯ ಪ್ರತೀಕ ವಿಐಎಸ್‌ಎಲ್ ಉಳಿಯಬೇಕು, ಕಾರ್ಮಿಕರ ಹಿತ ಕಾಯಬೇಕು. ರಾಜ್ಯದಲ್ಲಿ ಔದ್ಯೋಗಿಕ ಅಭಿವೃದ್ಧಿಗೆ ಚಾಲನೆ ನೀಡಿದ ನಾಡಿನ ಹೆಮ್ಮೆಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚಲು ನಿರ್ಧರಿಸಿರುವುದು ದುಃಖಕರ ವಿಚಾರ ಮತ್ತು ತಪ್ಪು ನಿರ್ಧಾರವಾಗಿದೆ. ಖಾಸಗಿ ಉದ್ಯಮಿಗಳಿಗೆ ಚಿನ್ನದ ಹರಿವಾಣದಲ್ಲಿ ಇಟ್ಟು ಭೂಮಿ, ಗಣಿ ಹಾಗೂ ಇತರ ಸವಲತ್ತುಗಳನ್ನು ನೀಡುವ ಸರ್ಕಾರಗಳು, ತನ್ನದೇ ಉದ್ಯಮಕ್ಕೆ ತೀರಾ ಅಗತ್ಯವಿರುವ ಸೌಕರ್ಯಗಳನ್ನು ಮತ್ತು ಆಧುನೀಕರಣಕ್ಕೆ ಬಂಡವಾಳ ಹೂಡಲು ನಿರಾಕರಿಸುತ್ತಾ ಬಂದಿವೆ. ವಿಐಎಸ್‌ಎಲ್ ವಿಚಾರದಲ್ಲೂ ಕೂಡ ಇದೇ ರೀತಿ ಆಗಿದ್ದು, ಇಂದಿನ ದುಸ್ಥಿತಿಗೆ ರಾಜ್ಯಮತ್ತು ಒಕ್ಕೂಟ ಸರ್ಕಾರಗಳು ನೇರವಾಗಿ ಕಾರಣವಾಗಿವೆ. ಇದು ಕೇವಲ ವಿಐಎಸ್‌ಎಲ್ ಒಂದರ ವಿಚಾರವಾಗಿರದೆ, ಮೈಸೂರು ಕಾಗದ ಮತ್ತು ಸಕ್ಕರೆ ಕಾರ್ಖಾನೆ ಮುಚ್ಚುವಲ್ಲಿಯೂ ಕೂಡ ಇದೇ ನಿರ್ಲಕ್ಷ್ಯ, ಭ್ರಷ್ಟಾಚಾರ, ಅಕ್ರಮ ಮತ್ತು ಅವ್ಯವಹಾರಗಳು ಕಾರಣವಾಗಿದೆ ಎಂದು ಆರೋಪಿಸಿದರು.
ಈ ಎರಡು ಕಾರ್ಖಾನೆಗಳು ರಾಜ್ಯದಲ್ಲಿ ಔದ್ಯೋಗಿಕ ಅಭಿವೃದ್ಧಿಗೆ ಮಹತ್ವದ ಕಾಣಿಕೆ ನೀಡಿದ್ದು, ರಾಜ್ಯಕ್ಕೆ ಹೆಮ್ಮೆಯ ವಿಚಾರವಾಗಿದೆ. ಈ ಕಾರ್ಖಾನೆಗಳು ಶಿವಮೊಗ್ಗ ಮತ್ತು ಸುತ್ತಲಿನ ಪ್ರದೇಶಗಳ ಆರ್ಥಿಕ ಅಭಿವೃದ್ಧಿಗೆ ಮತ್ತು ನಾಡಿನ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದು, ಇವನ್ನು ಅಭಿವೃದ್ಧಿಗೊಳಿಸದೆ ನಿರ್ಲಕ್ಷಿಸಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ತಕ್ಷಣ ವಿಐಎಸ್‌ಎಲ್ ಕಾರ್ಖಾನೆಯನ್ನು ಹಿಂಪಡೆದು ಅಗತ್ಯವಿರುವ ಬಂಡವಾಳ ತೊಡಗಿಸಿ ಅಭಿವೃದ್ಧಿಗೊಳಿಸಬೇಕು. ಈ ನಿಟ್ಟಿನಲ್ಲಿ ಪಕ್ಷ ಹೋರಾಟ ನಡೆಸುತ್ತಿದ್ದು, ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಬೆಂಗಳೂರು ಜಿಲ್ಲಾಧ್ಯಕ್ಷ ಎಸ್. ಮಂಜುನಾಥ್, ತಾಲೂಕು ಅಧ್ಯಕ್ಷ ನಾಗರಾಜರಾವ್ ಸಿಂಧೆ, ತಾಲೂಕು ಕಾರ್ಯದರ್ಶಿ ಶಬರೀಷ್, ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಜಿಲ್ಲಾಧ್ಯಕ್ಷ ಎಸ್.ಕೆ ಪ್ರಭು, ಸುಮಿತ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೃಹತ್ ಹೋರಾಟಕ್ಕೆ ಶಾಸಕರ ನೇತೃತ್ವದಲ್ಲಿ ಜ.೨೮ರಂದು ಪೂರ್ವಭಾವಿ ಸಭೆ:
ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಸರ್ವ ಸಮಾಜದ ಮತ್ತು ಸಂಘ-ಸಂಸ್ಥೆಗಳಿಂದ, ಕಾರ್ಮಿಕ ಬಂಧುಗಳಿಂದ ಜ.೨೮ರಂದು ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೧೧ ಗಂಟೆಗೆ ಹಳೇನಗರದ ವೀರಶೈವ ಸಭಾ ಭವನದಲ್ಲಿ ಸಭೆ ನಡೆಯಲಿದ್ದು, ಕ್ಷೇತ್ರದ ಸಮಸ್ತ ನಾಗರೀಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
ಶ್ರೀ ಪ್ರಸನ್ನನಾಥಸ್ವಾಮೀಜಿಗೆ ಒಕ್ಕಲಿಗರ ಸಂಘ ಮನವಿ :
ವಿಐಎಸ್‌ಎಲ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಾಲೂಕು ಒಕ್ಕಲಿಗರ ಸಂಘ ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ. ನಿರ್ಮಲನಂದನಾಥ ಸ್ವಾಮೀಜಿಯವರ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಒತ್ತಡ ತರಲು ಮುಂದಾಗಿದೆ.
ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರದ ಕಾರ್ಯದರ್ಶಿ, ಶಿವಮೊಗ್ಗ ಶಾಖಾ ಮಠದ ಪೀಠಾಧಿಪತಿಗಳಾದ ಶ್ರೀ ಪ್ರಸನ್ನನಾಥಸ್ವಾಮೀಜಿಯವರನ್ನು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಭೇಟಿ ಮಾಡಿ ಕಾರ್ಖಾನೆಯ ಸ್ಥಿತಿಗತಿಗಳ ಕುರಿತು ಸಂಪೂರ್ಣ ಮಾಹಿತಿ ನೀಡುವ ಮೂಲಕ ಮನವಿ ಸಲ್ಲಿಸಿದೆ
ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಾಲೂಕು ಒಕ್ಕಲಿಗರ ಸಂಘ ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ. ನಿರ್ಮಲನಂದನಾಥ ಸ್ವಾಮೀಜಿಯವರ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಒತ್ತಡ ತರಲು ಮುಂದಾಗಿದೆ. ಈ ಸಂಬಂಧ ಶ್ರೀ ಪ್ರಸನ್ನನಾಥಸ್ವಾಮೀಜಿಯವರಿಗೆ ಮನವಿ ಸಲ್ಲಿಸಿತು.
No comments:
Post a Comment