ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಭದ್ರಾವತಿ ಹಳೇನಗರದ ವೀರಶೈವ ಸಭಾಭವನದಲ್ಲಿ ಶನಿವಾರ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆ ಉಳಿಸಲು ಸರ್ವ ಸಮಾಜದ ಮತ್ತು ಸಂಘ-ಸಂಸ್ಥೆಗಳ, ಕಾರ್ಮಿಕರ ಪೂರ್ವಭಾವಿ ಸಭೆ ಜರುಗಿತು.
ಭದ್ರಾವತಿ, ಜ. ೨೮ : ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ಬಹುತೇಕ ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಹಳೇನಗರದ ವೀರಶೈವ ಸಭಾಭವನದಲ್ಲಿ ಶನಿವಾರ ಜರುಗಿದ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆ ಉಳಿಸಲು ಸರ್ವ ಸಮಾಜದ ಮತ್ತು ಸಂಘ-ಸಂಸ್ಥೆಗಳ, ಕಾರ್ಮಿಕರ ಪೂರ್ವಭಾವಿ ಸಭೆಯಲ್ಲಿ ಪ್ರಮುಖರಾದ ಟಿ. ಚಂದ್ರೇಗೌಡ, ಶಿವಮಾಧು, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಸೇರಿದಂತೆ ಮಾತನಾಡಿ, ಪ್ರಸ್ತುತ ಉಕ್ಕು ಪ್ರಾಧಿಕಾರ ಕಾರ್ಖಾನೆ ಮುಚ್ಚುವ ಅಂತಿಮ ಸಿದ್ದತೆಗೆ ಮುಂದಾಗಿದೆ. ಈ ಹಿಂದೆ ಕಾರ್ಖಾನೆ ಉಳಿಸುವ ಸಂಬಂಧ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದರೂ ಸಹ ಕಾರ್ಖಾನೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಉಕ್ಕು ಪ್ರಾಧಿಕಾರ ನಿರ್ಲಕ್ಷ್ಯತನದಿಂದ ವರ್ತಿಸುತ್ತಿದ್ದು, ಅಲ್ಲದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಇದರ ಪರಿಣಾಮ ಪ್ರಸ್ತುತ ಕಾರ್ಖಾನೆ ಮುಚ್ಚುವ ಹಂತಕ್ಕೆ ತಲುಪಿದೆ ಎಂದರು.
ಇದೀಗ ಕಾರ್ಖಾನೆಯನ್ನು ಉಳಿಸಿಕೊಳ್ಳುವುದು ಅನಿವಾರ್ಯವಾಗಿದೆ. ಕಾರ್ಖಾನೆ ಕೇವಲ ಕಾರ್ಮಿಕರಿಗೆ ಮಾತ್ರ ಸೇರಿಲ್ಲ. ಎಲ್ಲರಿಗೂ ಸೇರಿದ್ದಾಗಿದೆ. ರಾಜಕೀಯ ಬದಿಗಿಟ್ಟು, ಪಕ್ಷ ಭೇದ ಮರೆತು ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು. ಯಾವುದೇ ರೀತಿಯ ಹೋರಾಟಕ್ಕೂ ಎಲ್ಲರೂ ಸಿದ್ದರಾಗಬೇಕೆಂದರು.
ಪ್ರಮುಖರಾದ ಹಿರಿಯ ಕಾರ್ಮಿಕ ಮುಖಂಡರಾದ ಡಿ.ಸಿ ಮಾಯಣ್ಣ, ಕಾಳೇಗೌಡ, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಸಾವಿರಾರು ಮಂದಿ ಪಾಲ್ಗೊಂಡಿದ್ದರು.
No comments:
Post a Comment