ಭದ್ರಾವತಿ ಸಿದ್ದರೂಢನಗರದ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಶ್ವತಿ ಮಹಿಳಾ ಸಮಾಜದ ವಾರ್ಷಿಕೋತ್ಸವ ಸಮಾರಂಭದಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮ ಘಟಕ ವ್ಯವಸ್ಥಾಪಕಿ ಅಂಬಿಕ ಸುಧೀರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಫೆ. ೪: ಮಹಿಳೆಯರು ಮತ್ತು ಪುರುಷರು ಸಮಾನತೆ ಕಾಯ್ದುಕೊಂಡಾಗ ಯಾವುದೇ ಕೆಲಸದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮ ಘಟಕ ವ್ಯವಸ್ಥಾಪಕಿ ಅಂಬಿಕ ಸುಧೀರ್ ಹೇಳಿದರು.
ಅವರು ಶನಿವಾರ ಸಿದ್ದರೂಢನಗರದ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಶ್ವತಿ ಮಹಿಳಾ ಸಮಾಜದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ನಮ್ಮ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ದೇವತೆ ಸ್ಥಾನವನ್ನು ನೀಡಲಾಗಿದೆ. ಯಾವುದೇ ಸಂಘಟನೆಯಾಗಲಿ, ವೃತ್ತಿ ಮಾಡುವ ಸ್ಥಳವಿರಲಿ, ಕುಟುಂಬವಿರಲಿ ಸಮಾಜದಲ್ಲಿ ಮಹಿಳೆಯರು ಮತ್ತು ಪುರುಷರು ಸಮಾನತೆ ಕಾಯ್ದುಕೊಂಡು ಮುನ್ನಡೆಯಬೇಕು. ಆಗ ಮಾತ್ರ ನಾವುಗಳು ಯಶಸ್ಸು ಕಾಣಲು ಸಾಧ್ಯ. ಶಾಶ್ವತಿ ಮಹಿಳಾ ಸಮಾಜ ಇನ್ನೂ ಹೆಚ್ಚಿನ ಸೇವೆಯನ್ನು ನೀಡುವ ಮೂಲಕ ಶಾಶ್ವತವಾಗಿ ತನ್ನ ಅಸ್ತಿತ್ವ ಕಾಯ್ದುಕೊಳ್ಳುವಂತಾಗಲಿ ಎಂದರು.
ಸಮಾಜದ ಗೌರವಾಧ್ಯಕ್ಷೆ ಯಶೋಧ ವೀರಭದ್ರಪ್ಪ ಮಾತನಾಡಿ, ಸಮಾಜದ ಮೇಲೆ ಹೆಚ್ಚಿನ ಅಭಿಮಾನವಿದೆ. ಇದು ನಗರದ ವಿವಿಧ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿದ್ದು, ವಿವಿಧ ಕ್ಷೇತ್ರದಲ್ಲಿನ ಮಹಿಳೆಯರು ಸದಸ್ಯರಾಗಿರುವುದು ಹೆಮ್ಮೆಯ ವಿಚಾರವಾಗಿದೆ. ಸಾಹಿತ್ಯ, ಕಲೆ, ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕ್ರಿಯಾಶೀಲ ಚಟುವಟಿಕೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಸಮಾಜದ ಅಧ್ಯಕ್ಷೆ ರೂಪರಾವ್ ಅಧ್ಯಕ್ಷತೆ ವಹಿಸಿದ್ದರು. ಕಲಾವಿದೆ ನಂದಿ ಮಲ್ಲಿಕಾರ್ಜುನ ಉಪಸ್ಥಿತರಿದ್ದರು. ಕಾರ್ಯದರ್ಶಿ ಮಮತ ಗಿರೀಶ್ ವರದಿ ಮಂಡಿಸಿದರು. ಶಾರದ ಶ್ರೀನಿವಾಸ್ ಕಾರ್ಯಕ್ರಮ ನಿರೂಪಿಸಿದರು. ಪ್ರತಿವರ್ಷದಂತೆ ಈ ಬಾರಿ ಸಹ ಲಾಟರಿ ಮೂಲಕ ವಿಜೇತರಾದ ವರ್ಷದ ಅದೃಷ್ಟ ಮಹಿಳೆಗೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
No comments:
Post a Comment