ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಪ್ರತಿಭಟನೆ
ಭದ್ರಾವತಿ ಚನ್ನಗಿರಿ ರಸ್ತೆಯಲ್ಲಿರುವ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ ಬ್ಯಾಂಕ್) ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ರೈತ ಮುಖಂಡ ಎಚ್.ಆರ್ ಬಸವರಾಜಪ್ಪ ಮಾತನಾಡಿದರು.
ಭದ್ರಾವತಿ, ಮಾ. ೧ : ಯಾವುದೇ ಕಾರಣಕ್ಕೂ ರೈತರಿಂದ ಬಲವಂತವಾಗಿ ಸಾಲ ವಸೂಲಾತಿ ಮಾಡುವಂತಿಲ್ಲ ಎಂದು ಸರ್ವೋಚ್ಛ ನ್ಯಾಯಾಲಯ ಸಹ ಹೇಳಿದೆ. ಆದರೂ ರೈತರ ಸಾಲ ವಸೂಲಾತಿಗಾಗಿ ಮನೆ ಚರಾಸ್ತಿ ಜಪ್ತಿ ಮಾಡಲು ಮುಂದಾಗಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವರಿಷ್ಠ ಎಚ್.ಆರ್ ಬಸವರಾಜಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಅವರು ಬುಧವಾರ ನಗರದ ಚನ್ನಗಿರಿ ರಸ್ತೆಯಲ್ಲಿರುವ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ ಬ್ಯಾಂಕ್) ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದರು.
ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿರುವ ರೈತರಿಂದ ಬಲವಂತವಾಗಿ ಸಾಲ ವಸೂಲಾತಿ ಮಾಡುವ ಮೂಲಕ ಅವರಿಗೆ ಕಿರುಕುಳ ನೀಡುವುದು ಸರಿಯಲ್ಲ. ಪಿಎಲ್‌ಡಿ ಬ್ಯಾಂಕ್ ಅಧಿಕಾರಿಗಳು ರೈತರ ಮನೆ ಚರಾಸ್ತಿ ಜಪ್ತಿ ಮಾಡಲು ಮುಂದಾಗಿರುವುದು ಖಂಡನೀಯ. ಬ್ಯಾಂಕಿನ ಅಧಿಕಾರಿಗಳು ದುರ್ವರ್ತನೆಯಿಂದ ನಡೆದುಕೊಳ್ಳುತ್ತಿದ್ದಾರೆ. ಒಂದೆಡೆ ರೈತರಿಂದ ಬಲವಂತವಾಗಿ ಸಾಲ ವಸೂಲಾತಿ ಮಾಡುವುದಿಲ್ಲ. ಯಾವುದೇ ರೀತಿ ತೊಂದರೆ ನೀಡುವುದಿಲ್ಲ ಎನ್ನುತ್ತಾರೆ. ಮತ್ತೊಂದೆಡೆ ರೈತರ ಮನೆ ಚರಾಸ್ತಿ ಜಪ್ತಿ ಮಾಡುತ್ತಾರೆ. ಇಂತಹ ಅಧಿಕಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ತಾಲೂಕಿನ ನಾಗಸಮುದ್ರದ ನಿವಾಸಿ, ರೈತ ನಾಗರಾಜ್ ಎಂಬುವರಿಗೆ ಮನೆ ಚರಾಸ್ತಿ ಜಪ್ತಿ ಮಾಡುವುದಾಗಿ ಬ್ಯಾಂಕ್ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಚಂದ್ರಪ್ಪ, ಜಿಲ್ಲಾಧ್ಯಕ್ಷ ಶಿವಮೂರ್ತಿ, ಜಿಲ್ಲಾ ಕಾರ್ಯದರ್ಶಿ ಜಗದೀಶ್, ತಾಲೂಕು ಅಧ್ಯಕ್ಷ ಪಂಚಾಕ್ಷರಿ, ತಾಲೂಕು ಕಾರ್ಯದರ್ಶಿ ನಾಗರಾಜ್, ರಾಘವೇಂದ್ರ, ಮಹಾದೇವಪ್ಪ ಪದಾಧಿಕಾರಿಗಳು ಸೇರಿದಂತೆ ಪ್ರಮುಖರು, ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
No comments:
Post a Comment