ಮೆಡಿಕಲ್ ಆನಂದ್
ಭದ್ರಾವತಿ, ಮಾ. ೨೦ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಮ್ ಆದ್ಮಿ ಪಾರ್ಟಿ ರಾಜ್ಯದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದು, ನಗರದ ಉದ್ಯಮಿ ಆನಂದ್‌ರವರು ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಲಭಿಸಿದೆ.
ಮೆಡಿಕಲ್ ಆನಂದ್ ಹೆಸರಿನಲ್ಲಿ ಚಿರಪರಿಚಿತರಾಗಿದ್ದು, ಸುಮಾರು ಒಂದು ವರ್ಷದ ಹಿಂದೆ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡಿದ್ದರು. ನಗರದ ರಂಗಪ್ಪ ವೃತ್ತದಲ್ಲಿ ಪಕ್ಷದ ಅಧಿಕೃತ ಕಛೇರಿ ತೆರೆಯುವ ಮೂಲಕ ಆಕಾಂಕ್ಷಿ ಅಭ್ಯರ್ಥಿಯಾಗಿ ಕ್ಷೇತ್ರದಾದ್ಯಂತ ಪ್ರಚಾರ ಸಹ ಕೈಗೊಂಡಿದ್ದರು.
ಆನಂದ್‌ರವರು ಈ ಹಿಂದೆ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ಅವಕಾಶ ಕೋರಿದ್ದರು. ಆದರೆ ಅವಕಾಶ ಲಭಿಸದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ನಂತರ ಕಾಂಗ್ರೆಸ್ ಪಕ್ಷ ತೊರೆದು ಆಮ್ ಆದ್ಮಿ ಪಾರ್ಟಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈಗಾಗಲೇ ಕ್ಷೇತ್ರದಾದ್ಯಂತ ಪ್ರಚಾರ ನಡೆಸಿರುವ ಆನಂದ್‌ರವರು ಈ ಬಾರಿ ಚುನಾವಣೆಯಲ್ಲಿ ಗೆಲ್ಲುವ ಹುಮ್ಮಸ್ಸು ಹೊಂದಿದ್ದಾರೆ. ಜೆಡಿಎಸ್ ಪಕ್ಷದಿಂದ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪತ್ನಿ ಶಾರದ ಅಪ್ಪಾಜಿ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಉಳಿದಂತೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯನ್ನು ಘೋಷಿಸಿಲ್ಲ.
ಕಳೆದ ಬಾರಿ ಆಮ್ ಆದ್ಮಿ ಪಾರ್ಟಿಯಿಂದ ಎಚ್. ರವಿಕುಮಾರ್ ಸ್ಪರ್ಧಿಸಿದ್ದರು. ೯ನೇ ಸ್ಥಾನ ಪಡೆದುಕೊಂಡಿದ್ದರು. ಇತ್ತೀಚೆಗೆ ಇವರ ಎಎಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
No comments:
Post a Comment