ಭದ್ರಾವತಿಯಲ್ಲಿ ಮಂಗಳವಾರ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಶಿಕಾರಿಪುರದ ನಿವಾಸದ ಮೇಲೆ ಸೋಮವಾರ ಕಲ್ಲು ತೂರಾಟ ನಡೆಸಿ ದಾಳಿ ಮಾಡಿರುವ ಕೃತ್ಯವನ್ನು ಖಂಡಿಸಿದರು.
ಭದ್ರಾವತಿ, ಮಾ. ೨೮: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಶಿಕಾರಿಪುರದ ನಿವಾಸದ ಮೇಲೆ ಸೋಮವಾರ ಕಲ್ಲು ತೂರಾಟ ನಡೆಸಿ ದಾಳಿ ಮಾಡಿರುವ ಕೃತ್ಯವನ್ನು ನಗರದ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಖಂಡಿಸಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಪ್ರಮುಖರು ಈ ಘಟನೆ ಸಮುದಾಯದಲ್ಲಿ ದಿಗ್ಭ್ರಮೆಯನ್ನುಂಟು ಮಾಡಿದೆ. ಸುಮಾರು ೫ ದಶಕಗಳ ರಾಜಕೀಯ ಅನುಭವ ಹೊಂದಿರುವ ನಾಡು ಕಂಡ ಧೀಮಂತ ನಾಯಕ ಬಿ.ಎಸ್ ಯಡಿಯೂರಪ್ಪ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಯಡಿಯೂರಪ್ಪನವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸದೆ ದೊಡ್ಡತನ ಪ್ರದರ್ಶಿಸಿದ್ದಾರೆ. ಈ ಕೃತಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸದಂತೆ ಮನವಿ ಮಾಡಿದ್ದಾರೆ. ಈ ಕೃತ್ಯವನ್ನು ಖಂಡಿಸುವುದು ಸಮುದಾಯದ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಯಡಿಯೂರಪ್ಪನವರು ಹೋರಾಟದಿಂದ ರಾಜಕೀಯಕ್ಕೆ ಬಂದವರು ಎಲ್ಲಾ ಸಮುದಾಯದ ಏಳಿಗೆಗಾಗಿ ಶ್ರಮಿಸಿದವರು. ಪ್ರಸ್ತುತ ಅವರು ರಾಜಕೀಯದಿಂದ ನಿವೃತ್ತಿ ಪಡೆದುಕೊಂಡಿದ್ದಾರೆ. ಆದರೂ ಸಹ ತನ್ನ ಪಕ್ಷಕ್ಕಾಗಿ ಶ್ರಮಿಸುತ್ತಿದ್ದಾರೆ. ದುರುದ್ದೇಶದಿಂದ ಇವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದರು.
ಹೋರಾಟ ನಡೆಸುವುದಕ್ಕೆ ಯಾವುದೇ ವಿರೋಧವಿಲ್ಲ. ಆದರೆ ಹೋರಾಟ ದಾರಿ ತಪ್ಪಬಾರದು. ಅದರಿಂದ ಮತ್ತೊಬ್ಬರಿಗೆ ತೊಂದರೆಯಾಗಬಾರದು. ಯಾರ ವಿರುದ್ಧ ಸಹ ಈ ರೀತಿಯ ಘಟನೆಗಳು ಸಮಾಜದಲ್ಲಿ ಮರುಕಳುಹಿಸಬಾರದು. ಈ ಹಿನ್ನಲೆಯಲ್ಲಿ ಈ ಘಟನೆ ಕುರಿತು ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ಪ್ರಮುಖರಾದ ತೀರ್ಥಯ್ಯ, ಜಿ. ಸುರೇಶಯ್ಯ, ಆರ್.ಎಸ್ ಶೋಭಾ, ರವಿಕುಮಾರ್, ಅನುಪಮ ಚನ್ನೇಶ್, ಶೋಭಾ ಪಾಟೀಲ್, ಕವಿತಾ ಸುರೇಶ್, ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment