ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ಕಾರ್ಖಾನೆ ಮುಂಭಾಗ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಬುಧವಾರ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಬೆಂಬಲ ಸೂಚಿಸುವ ಮೂಲಕ ಈ ಬಾರಿ ವಿಶ್ವ ಮಹಿಳಾ ದಿನಾಚರಣೆ ವಿಶಿಷ್ಟವಾಗಿ ಆಚರಿಸಲಾಯಿತು. ಪಾದಯಾತ್ರೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಮಾ. ೮ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ಕಾರ್ಖಾನೆ ಮುಂಭಾಗ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಬುಧವಾರ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಬೆಂಬಲ ಸೂಚಿಸುವ ಮೂಲಕ ಈ ಬಾರಿ ವಿಶ್ವ ಮಹಿಳಾ ದಿನಾಚರಣೆ ವಿಶಿಷ್ಟವಾಗಿ ಆಚರಿಸಲಾಯಿತು.
ಕಾರ್ಮಿಕರ ಸಂಕಷ್ಟಗಳಿಗೆ ಸ್ಪಂದಿಸಬೇಕೆಂಬ ಮನೋಭಾವನೆಯೊಂದಿಗೆ ವೇದಿಕೆವತಿಯಿಂದ ಈ ಬಾರಿ ವಿಶ್ವ ಮಹಿಳಾ ದಿನಾಚರಣೆಯನ್ನು ಯಾವುದೇ ಸಡಗರ ಸಂಭ್ರಮವಿಲ್ಲದೆ ವಿಶಿಷ್ಟವಾಗಿ ಆಚರಿಸಲು ತೀರ್ಮಾನಿಸುವ ಮೂಲಕ ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಲಾಯಿತು.
ಮಧ್ಯಾಹ್ನ ಕಾರ್ಖಾನೆ ಮುಂಭಾಗದಿಂದ ಗುತ್ತಿಗೆ ಕಾರ್ಮಿಕರೊಂದಿಗೆ ತಾಲೂಕು ಕಛೇರಿವರೆಗೂ ಪಾದಯಾತ್ರೆ ನಡೆಸುವ ಮೂಲಕ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಸುಮಾರು ೩೦ ಸಾವಿರಕ್ಕೂ ಹೆಚ್ಚು ಕಾರ್ಮಿಕರು ೩ ಪಾಳಿಗಳಲ್ಲಿ ಕೆಲಸ ಮಾಡುತ್ತಿದ್ದು, ಲಕ್ಷಾಂತರ ಜನರ ಬದುಕಿಗೆ ಆಧಾರವಾಗಿತ್ತು. ಈ ಕಾರ್ಖಾನೆ ಗುಣಮಟ್ಟದ ಉಕ್ಕು ತಯಾರಿಕೆಗೆ ವಿಶ್ವದಲ್ಲಿಯೇ ಹೆಸರುವಾಸಿಯಾಗಿದ್ದು, ಪ್ರಸ್ತುತ ಕಾರ್ಖಾನೆಯಲ್ಲಿ ಸುಮಾರು ೧೪೦೦ ಗುತ್ತಿಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕಾರ್ಖಾನೆ ಮುಚ್ಚುವ ಸ್ಥಿತಿ ಇದೀಗ ಎದುರಾಗಿದ್ದು, ಇದರಿಂದಾಗಿ ಗುತ್ತಿಗೆ ಕಾರ್ಮಿಕರ ಬದುಕಿಗೆ ತೊಂದರೆಯಾಗಿದೆ ಎಂದು ಅಳಲು ವ್ಯಕ್ತಪಡಿಸಲಾಗಿದೆ.
ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ಹೂಡದೆ, ಪ್ರಸ್ತುತ ಸಂದರ್ಭಕ್ಕೆ ತಕ್ಕಂತೆ ಉನ್ನತೀಕರಿಸದೇ ನಷ್ಟದ ಲೆಕ್ಕಾಚಾರ ತೋರಿಸಿ ಮುಚ್ಚುವ ಹುನ್ನಾರ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಕಾರ್ಖಾನೆ ಹಾಗು ಕಾರ್ಮಿಕರ ಹಿತದೃಷ್ಟಿಯಿಂದ ಸರ್ಕಾರ ಕಾರ್ಖಾನೆಯನ್ನು ಮುಚ್ಚುವ ಪ್ರಕ್ರಿಯೆ ಹಿಂಪಡೆಯಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ನೇತೃತ್ವ ವಹಿಸಿದ್ದರು. ಉಪಾಧ್ಯಕ್ಷೆ ಎಂ.ಬಿ ಸುಮ, ಕಾರ್ಯದರ್ಶಿ ಲತಾ, ಸಹ ಕಾರ್ಯದರ್ಶಿ ಶೀಲಾ, ಖಜಾಂಚಿ ಭಾರತಿ, ನಿರ್ದೇಶಕರಾದ ಪುಷ್ಪ, ಮಂಗಳ, ಸುಧಾ, ನೂತನ್, ಸರಸ್ವತಿ, ಆಶಾ, ಮಮತ, ದೀಪಾ, ಗೀತ, ಕುಸುಮ, ಲತಾ ರವೀಂದ್ರ, ಪ್ರತಿಭಾ, ಸವಿತ, ಮಂಜುಳ, ಸೌಮ್ಯ, ಆಶಾ ಜಯಂತ್ ಸೇರಿದಂತೆ ವೇದಿಕೆ ಸದಸ್ಯರು, ಗುತ್ತಿಗೆ ಕಾರ್ಮಿಕರು ಪಾಲ್ಗೊಂಡಿದ್ದರು.
No comments:
Post a Comment