Thursday, April 20, 2023

ವಿಐಎಸ್‌ಎಲ್ ಕಾರ್ಖಾನೆ ಉಳಿಸಿ ಬೆಳೆಸಿ ಕಾರ್ಮಿಕರ ಹೋರಾಟಕ್ಕೆ ಕಾಶಿ ಶ್ರೀ ಬೆಂಬಲ

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಾರ್ಖಾನೆ ಮುಂಭಾಗದಲ್ಲಿ ಗುತ್ತಿಗೆ ಕಾರ್ಮಿಕರು ಕಳೆದ ಸುಮಾರು ೩ ತಿಂಗಳಿನಿಂದ ನಡೆಸುತ್ತಿರುವ ಹೋರಾಟಕ್ಕೆ ಶ್ರೀಮದ್ ಕಾಶಿ ಜ್ಞಾನ ಸಿಂಹಾಸನಾಧೀಶ್ವರ ಶ್ರೀ ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಬೆಂಬಲ ಸೂಚಿಸಿ ಮಾತನಾಡಿದರು.
    ಭದ್ರಾವತಿ, ಏ. ೨೦ : ದೇಶದ ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭಗೊಂಡು ಶತಮಾನೋತ್ಸವ ಸಂಭ್ರಮಾಚರಣೆಯಲ್ಲಿರುವ ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ಹೂಡಿ ಆಧುನೀಕರಣಗೊಳಿಸುವಂತೆ ಶ್ರೀಮದ್ ಕಾಶಿ ಜ್ಞಾನ ಸಿಂಹಾಸನಾಧೀಶ್ವರ ಶ್ರೀ ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದರು.
    ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಾರ್ಖಾನೆ ಮುಂಭಾಗದಲ್ಲಿ ಗುತ್ತಿಗೆ ಕಾರ್ಮಿಕರು ಕಳೆದ ಸುಮಾರು ೩ ತಿಂಗಳಿನಿಂದ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಶ್ರೀಗಳು ಮಾತನಾಡಿದರು.
    ಮನೆಯಲ್ಲಿರುವ ಹಸುವಿಗೆ ಉತ್ತಮವಾದ ಮೇವು, ಹಿಂಡಿ, ಹುಲ್ಲು ಇತ್ಯಾದಿಗಳನ್ನು ನೀಡಿದಾಗ ಅದು ಸದೃಢವಾಗಿ ಬೆಳವಣಿಗೆ ಹೊಂದುವ ಮೂಲಕ ಹಾಲಿನ ಪ್ರಮಾಣ ಹೆಚ್ಚಾಗುತ್ತದೆ. ಅಲ್ಲದೆ ಆರ್ಥಿಕ ಸದೃಢತೆ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಇದೆ ರೀತಿ ಈ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ಹೂಡಿ ಆಧುನಿಕ ತಂತ್ರಜ್ಞಾನ ಅಳವಡಿಸಿದರೆ ಅಭಿವೃದ್ಧಿ ಹೊಂದುವ ಮೂಲಕ ಕಾರ್ಮಿಕರಿಗೆ ಉದ್ಯೋಗ ಲಭಿಸುವ ಜೊತೆಗೆ ಜಿಲ್ಲೆಯಲ್ಲಿನ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಾಯ್ದುಕೊಳ್ಳಬಹುದಾಗಿದೆ ಎಂದರು.
    ಕಾರ್ಖಾನೆಯ ಪ್ರಸ್ತುತ ಪರಿಸ್ಥಿತಿ ಕುರಿತು ಪ್ರಧಾನ ಮಂತ್ರಿ ಸೇರಿದಂತೆ ಸಂಬಂಧಿಸಿದ ಕೇಂದ್ರ ಮಂತ್ರಿಗಳು, ಅಧಿಕಾರಿಗಳು ಸೇರಿದಂತೆ ಇತರರ ಜೊತೆ ಮಾತುಕತೆ ನಡೆಸಿ ಗಮನಹರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
    ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ವೀರಶೈವ ಸಮಾಜದ ಮುಖಂಡರುಗಳಾದ ಸಿದ್ದಲಿಂಗಯ್ಯ, ಸುರೇಶಯ್ಯ, ಎಸ್.ಆರ್ ಮಂಜುನಾಥ್, ಎನ್.ಸಿ ಲೋಕೇಶ್, ವಾಗೀಶ್, ಎಸ್. ನರಸಿಂಹಾಚಾರ್, ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳಾದ ರಾಕೇಶ್, ಸುರೇಶ್, ವಿನೋದ, ಅಮೃತ್, ದಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

No comments:

Post a Comment