ಭದ್ರಾವತಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಮಾಜ ಸೇವಕ, ಛಲವಾದಿ ಸಮಾಜದ ಜಿಲ್ಲಾಧ್ಯಕ್ಷ ಸುರೇಶ್ ಮಾತನಾಡಿದರು.
ಭದ್ರಾವತಿ, ಏ. ೨೬ : ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಈ ಹಿಂದೆ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಬೆಂಬಲ ನೀಡಲಾಗಿತ್ತು. ಆದರೆ ನನ್ನ ನಿರೀಕ್ಷೆಯಂತೆ ಅವರು ನಡೆದುಕೊಂಡಿಲ್ಲ. ಈ ಹಿನ್ನಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಸಮಾಜ ಸೇವಕ, ಛಲವಾದಿ ಸಮಾಜದ ಜಿಲ್ಲಾಧ್ಯಕ್ಷ ಸುರೇಶ್ ಹೇಳಿದರು.
ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಗಮೇಶ್ವರ್‌ರವರು ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಈ ಹಿನ್ನಲೆಯಲ್ಲಿ ಅವರಿಗೆ ಬೆಂಬಲ ಸೂಚಿಸಲಾಯಿತು. ಸುಮಾರು ೪ ಚುನಾವಣೆಯಲ್ಲಿ ಅವರಿಗೆ ನೀಡಿದರೂ ಸಹ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕ್ಷೇತ್ರದಲ್ಲಿ ಇಂದಿಗೂ ರೌಡಿಗಳ ಹಾವಳಿ ಇದ್ದು, ಇಸ್ಪೀಟ್, ಮಟ್ಕಾ ಸೇರಿದಂತೆ ಜೂಜಾಟ ದಂಧೆ ಮಿತಿ ಮೀರಿದೆ. ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳು ಅವನತಿ ದಾರಿ ಹಿಡಿದಿವೆ. ಕ್ಷೇತ್ರದಲ್ಲಿ ಹೆಚ್ಚಿನ ವೈದ್ಯಕೀಯ ಸೇವೆ ಲಭ್ಯವಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಬೆಳವಣಿಗೆಯಾಗಿಲ್ಲ. ನಾನು ನಿರೀಕ್ಷಿಸಿದಂತೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯಾಗಿಲ್ಲ. ಈ ಹಿನ್ನಲೆಯಲ್ಲಿ ಸಂಗಮೇಶ್ವರ್ ಅವರಿಗೆ ನೀಡಿರುವ ಬೆಂಬಲ ಹಿಂಪಡೆಯುವುದಾಗಿ ಸ್ಪಷ್ಟಪಡಿಸಿದರು.
ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸುವ ಅಭ್ಯರ್ಥಿಗೆ ಈ ಬಾರಿ ನನ್ನ ಬೆಂಬಲವಿದೆ. ಈ ಕುರಿತು ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡ ಚಂದ್ರಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment