ಜಾತಕ ಪಕ್ಷಿಗಳಂತೆ ಎದುರು ನೋಡುತ್ತಿರುವ ಕ್ಷೇತ್ರದ ಮತದಾರರು
ಬಿ.ಕೆ ಸಂಗಮೇಶ್ವರ್
ಭದ್ರಾವತಿ, ಮೇ. ೧೯ : ಈ ಬಾರಿಯಾದರೂ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿ ಕ್ಷೇತ್ರದ ಜನತೆ ಎದುರು ನೋಡುತ್ತಿದ್ದು, ಶುಕ್ರವಾರ ರಾತ್ರಿ ೧೦ ಗಂಟೆ ಕಳೆದರೂ ಸಹ ಅಧಿಕೃತ ಮಾಹಿತಿ ಹೊರಬೀಳದೆ ಇರುವುದು ನಿರಾಸೆಯನ್ನುಂಟು ಮಾಡಿದೆ.
ಕ್ಷೇತ್ರದಲ್ಲಿ ಇದುವರೆಗೂ ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ನನಗೆ ಸಚಿವ ಸ್ಥಾನ ಸಿಗುವುದು ಖಚಿತ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕ್ಷೇತ್ರದಾದ್ಯಂತ ಮತಯಾಚನೆ ನಡೆಸಿದ್ದರು. ಅಲ್ಲದೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗು ಅಭಿಮಾನಿಗಳಲ್ಲೂ ಸಚಿವ ಸ್ಥಾನ ಸಿಗುವ ವಿಶ್ವಾಸ ಮೂಡಿಸುವ ಮೂಲಕ ಉತ್ಸಾಹ ತುಂಬಿದ್ದರು. ಇದೀಗ ಪದಗ್ರಹಣ ಸಮಾರಂಭಕ್ಕೆ ಕೆಲವು ಕೆಲವು ಗಂಟೆಗಳು ಮಾತ್ರ ಬಾಕಿ ಉಳಿದಿವೆ. ಇನ್ನೂ ಸಚಿವ ಸ್ಥಾನ ಸಿಗುವ ಅಧಿಕೃತ ಘೋಷಣೆಯಾಗದಿರುವುದು ನಿರಾಸೆಯನ್ನುಂಟು ಮಾಡುತ್ತಿದೆ.
ಜಿಲ್ಲೆಯಲ್ಲಿ ಪ್ರಸ್ತುತ ೩ ಮಂದಿ ಶಾಸಕರಿದ್ದು, ಈ ಪೈಕಿ ಶಾಸಕ ಬಿ.ಕೆ ಸಂಗಮೇಶ್ವರ್ ಹಿರಿಯರಾಗಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಶಾಸಕರಾಗಿದ್ದು, ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಿಗರಲ್ಲಿ ಒಬ್ಬರಾಗಿದ್ದಾರೆ. ಈ ಹಿನ್ನಲೆಯಲ್ಲಿ ಇವರಿಗೆ ಸಚಿವ ಸಿಗುವುದು ಬಹುತೇಕ ಖಚಿತ ಎನ್ನಲಾಗಿದ್ದು, ಆದರೂ ಸಹ ಈ ನಡುವೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗು ಕ್ಷೇತ್ರದ ಮತದಾರರಲ್ಲಿ ಆತಂಕ ಮನೆ ಮಾಡಿದೆ.
No comments:
Post a Comment