ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ
ಭದ್ರಾವತಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಚಿರಋಣಿಯಾಗಿದ್ದು, ಮತನೀಡಿ ಸಹಕರಿಸಿದ ಕ್ಷೇತ್ರದ ಸಮಸ್ತ ಮತದಾರ ಬಂಧುಗಳಿಗೆ ಹೃದಯ ಪೂರ್ವಕ ಕೃತಜ್ಞತೆ ಸಲ್ಲಿಸಿದರು.
ಭದ್ರಾವತಿ, ಮೇ. ೧೫: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹಗಲಿರುಳು ಶ್ರಮಿಸಿದ ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಚಿರಋಣಿಯಾಗಿದ್ದು, ಮತನೀಡಿ ಸಹಕರಿಸಿದ ಕ್ಷೇತ್ರದ ಸಮಸ್ತ ಮತದಾರ ಬಂಧುಗಳಿಗೆ ಹೃದಯ ಪೂರ್ವಕ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ ಎಂದು ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಹೇಳಿದರು.
ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಜೇತ ಅಭ್ಯರ್ಥಿಯ ಹಣದ ಪ್ರಭಾವದ ಎದುರು ಸೋಲಾಗಿದೆ. ಸೋಲಿನ ಅಂತರ ಆತ್ಮವಿಶ್ವಾಸ ಹೆಚ್ಚಿಸಿದ್ದು, ಸೋಲನ್ನು ಸವಾಲಾಗಿ ಸ್ವೀಕರಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಅವರ ಮಧ್ಯೆಯೇ ಉಳಿಯಲು ಬಯಸುತ್ತೇನೆ ಎಂದರು.
ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಕ್ಷೇತ್ರದ ಮತದಾರರು ದಿವಂಗತ ಎಂ.ಜೆ ಅಪ್ಪಾಜಿಯವರ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಿ ನನಗೆ ಹೆಚ್ಚಿನ ಮತಗಳನ್ನು ನೀಡಿದ್ದಾರೆ. ಮೊದಲ ಚುನಾವಣೆಯಲ್ಲಿಯೇ ಹೆಚ್ಚಿನ ಮತಗಳನ್ನು ಪಡೆದಿರುವುದು ನನಗೆ ತೃಪ್ತಿ ಇದೆ. ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಧೈರ್ಯ ಕಳೆದುಕೊಳ್ಳುವುದು ಬೇಡ. ಕ್ಷೇತ್ರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಬೇಕು. ಯುವ ಸಮುದಾಯ ದುಶ್ಚಟಗಳಿಗೆ ಬಲಿಯಾಗುವುದು ನಿಲ್ಲಬೇಕು. ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳು ಅಭಿವೃದ್ಧಿಗೊಳ್ಳಬೇಕು. ಈ ನಿಟ್ಟಿನಲ್ಲಿ ನನ್ನ ಹೋರಾಟ ಮುಂದುವರೆಯಲಿದೆ.
ಪುನರಾಯ್ಕೆಯಾಗಿರುವ ಶಾಸಕರಿಗೆ ಅಭಿನಂದನೆಗಳು. ಊರಿನ ಅಭಿವೃದ್ಧಿಗೆ ಜನತೆಗೆ ನೀಡಿರುವ ಭರವಸೆಗಳನ್ನು ಈ ಬಾರಿಯಾದರೂ ಈಡೇರಿಸಲಿ ಎಂದು ಆಶಿಸುತ್ತೇನೆ. ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಗ್ರಾಮಾಂತರ ಘಟಕದ ಅಧ್ಯಕ್ಷ ಧರ್ಮಕುಮಾರ್, ಪ್ರಮುಖರಾದ ಮಹಮದ್ ಸನ್ನಾವುಲ್ಲಾ, ಎನ್. ಕೃಷ್ಣಪ್ಪ, ಡಿ.ಟಿ ಶ್ರೀಧರ್, ಕರಿಯಪ್ಪ, ತಿಮ್ಮೇಗೌಡ, ತ್ಯಾಗರಾಜ್, ಮೈಲಾರಪ್ಪ, ತರುಣ್‌ಕುಮಾರ್, ಲೋಕೇಶ್ವರ್‌ರಾವ್, ಎಂ. ರಾಜು ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
No comments:
Post a Comment