Saturday, June 3, 2023

ಶಾಸಕ ಸಂಗಮೇಶ್ವರನ್ನು ಸದ್ಯಕ್ಕೆ ನಿಗಮಮಂಡಳಿಗೆ ಅಧ್ಯಕ್ಷರಾಗಿ ನೇಮಕಗೊಳಿಸಿ

ಜೂ.೪ರಂದು ಸಚಿವೆಯಾಗಿ ಮೊದಲ ಬಾರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ನಗರಕ್ಕೆ ಆಗಮನ

ಭದ್ರಾವತಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಮುಖಂಡರು ಮಾತನಾಡಿದರು.  .
    ಭದ್ರಾವತಿ, ಜೂ. ೩: ಮುಂದಿನ ಅವಧಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದ್ದು, ಸದ್ಯಕ್ಕೆ ಯಾವುದಾದರೂ ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಸೂಕ್ತ ಸ್ಥಾನಮಾನ ನೀಡುವಂತೆ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಮುಖಂಡರು ಮನವಿ ಮಾಡಿದರು.
    ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ೧೩೫ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರು ಉತ್ತಮ ಆಡಳಿತ ನೀಡುವ ಭರವಸೆ ಇದ್ದು, ಈಗಾಗಲೇ ಗ್ಯಾರಂಟಿ ಕಾರ್ಡ್‌ನಲ್ಲಿ ಘೋಷಿಸಲಾಗಿದ್ದ ೫ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಿದೆ ಎಂದರು.
    ಶಾಸಕರಿಗೆ ಮೊದಲ ಅವಧಿಯಲ್ಲಿಯೇ ಸಚಿವ ಸ್ಥಾನ ಸಿಗುವ ವಿಶ್ವಾಸವಿತ್ತು. ಸಾಕಷ್ಟು ಪ್ರಯತ್ನಿಸಿದರೂ ಸಹ ಈ ಬಾರಿ ಕೈತಪ್ಪಿದ್ದು, ಮುಂದಿನ ೨ನೇ ಅವಧಿಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಶಾಸಕರನ್ನು ಯಾವುದಾದರೂ ನಿಗಮ ಮಂಡಳಿಗೆ ನೇಮಕಗೊಳಿಸಿ ಸೂಕ್ತ ಸ್ಥಾನಮಾನ ನೀಡಬೇಕೆಂದರು.
    ಜೂ.೪ರಂದು ನಗರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ :
    ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ, ಶಾಸಕ ಬಿ.ಕೆ ಸಂಗಮೇಶ್ವರ್ ಕುಟುಂಬ ಸಂಬಂಧಿಕರಾದ ಲಕ್ಷ್ಮೀ ಹೆಬ್ಬಾಳ್ಕರ್‌ರವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ನಂತರ ಮೊದಲ ಬಾರಿಗೆ ಕ್ಷೇತ್ರಕ್ಕೆ ಜೂ.೪ರಂದು ಆಗಮಿಸುತ್ತಿದ್ದಾರೆ.
    ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ ಬಿ.ಕೆ ಶಿವಕುಮಾರ್‌ರವರ ಗಾಂಧಿನಗರದ ನಿವಾಸದ ಆವರಣದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ರವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.
    ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಮಾಜಿ ಉಪಾಧ್ಯಕ್ಷ ಚನ್ನಪ್ಪ, ಮುಖಂಡರಾದ ಬಿ.ಕೆ ಮೋಹನ್, ಫೀರ್‌ಷರೀಫ್, ಅರುಣ್, ಎಚ್. ರವಿಕುಮಾರ್, ರಮೇಶ್, ಎಸ್.ಎನ್ ಶಿವಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment